Site icon Vistara News

Audio | ನಾಡಗೀತೆಗೆ ಅನಂತಸ್ವಾಮಿ ಧಾಟಿ, ಪೂರ್ಣ ಸಾಹಿತ್ಯ: ದಶಕದ ಗೊಂದಲಕ್ಕೆ ರಾಜ್ಯ ಸರ್ಕಾರದಿಂದ ತೆರೆ

nadageethe tune mysuru ananthaswamy
https://vistaranews.com/wp-content/uploads/2022/09/nadageethe-tune-anantha-swamy.mp3
ರಾಜ್ಯ ಸರ್ಕಾರದಿಂದ ಒಪ್ಪಿಗೆ ಪಡೆದಿರುವ ನಾಡಗೀತೆಯ ಧಾಟಿ

ಬೆಂಗಳೂರು: ನಾಡಗೀತೆಗೆ ನಿರ್ದಿಷ್ಟ ಸಮಯ ಹಾಗೂ ದಾಟಿ ನಿಗದಿ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ದಶಕಗಳಿಂದ ಇದ್ದ ಗೊಂದಲಕ್ಕೆ ರಾಜ್ಯ ಸರ್ಕಾರ ಇದೀಗ ಪೂರ್ಣ ವಿರಾಮ ಹಾಡಿದೆ.

ಖ್ಯಾತ ರಾಗ ಸಂಯೋಜಕ ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ದಾಟಿಯಲ್ಲಿ ಕುವೆಂಪು ವಿರಚಿತ ನಾಡಗೀತೆಯ ಒಂದಕ್ಷರವನ್ನೂ ಬಿಡದಂತೆ ಹಾಡುವುದಕ್ಕೆ ಈಗ ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದೆ. ಯಾವುದೇ ಆಲಾಪ ಹಾಗೂ ಪುನರಾವರ್ತನೆ ಇಲ್ಲದಂತೆ ಎರಡು ನಿಮಿಷ ಮೂವತ್ತು ಸೆಕೆಂಡ್‌ಗಳಲ್ಲಿ ನಾಡಗೀತೆಯನ್ನು ಹಾಡಲು ಸಾಧ್ಯ ಎಂದು ತಜ್ಞರು ನೀಡಿದ ವರದಿ ಆಧರಿಸಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಲ್ಲಿಸಿದ್ದ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ.

ಇನ್ನು ಮುಂದೆ ರಾಷ್ಟ್ರಕವಿ ಕುವೆಂಪು ರಚಿಸಿರುವ “ಜಯಭಾರತ ಜನನಿಯ ತನುಜಾತೆ” ಕವನವು ನಾಡಗೀತೆಯಾಗಿ ಅಂಗೀಕೃತಗೊಂಡ ರೂಪದಲ್ಲೇ ಹಿಂದಿನ ಒಂದಕ್ಷರವನ್ನೂ ಬಿಡದಂತೆ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆ ಮಾಡಿದ ದಾಟಿಯಲ್ಲೇ ಹಾಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ. ಈ ಮೂಲಕ ದಶಕಗಳಿಂದ ಇದ್ದ ಗೊಂದಲಕ್ಕೆ ಕೊನೆಗೂ ರಾಜ್ಯ ಸರ್ಕಾರ ತೆರೆ ಎಳೆದಿದೆ.

ಮೂರು ಸಮಿತಿಗಳ ವರದಿ

ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವ ವಿಚಾರ ೨೦೦೫ ರಿಂದಲೂ ನನೆಗುದಿಗೆ ಬಿದ್ದಿತ್ತು. ಕೆಲವು ಕಾರ್ಯಕ್ರಮಗಳಲ್ಲಿ ಏಳರಿಂದ ಎಂಟು ನಿಮಿಷಗಳ ಕಾಲ ನಾಡಗೀತೆ ಹಾಡುತ್ತಿದ್ದರು. ಇದು ಅಶಕ್ತರು, ಅಂಗವಿಕಲರಿಗೆ ಅನನುಕೂಲವಾಗುತ್ತಿತ್ತು. ಹೀಗಾಗಿ ದಾಟಿ ಹಾಗೂ ಕಾಲ ಮಿತಿಯ ಬಗ್ಗೆ ಸ್ಪಷ್ಟತೆ ತರಬೇಕೆಂಬ ಒತ್ತಾಯ ಸರ್ಕಾರದ ಮುಂದೆ ಇತ್ತು.
೨೦೦೬ ರಲ್ಲಿ ಸಾಹಿತಿ ವಸಂತ ಕನಕಾಪುರೆ ನೇತೃತ್ವದಲ್ಲಿ ಸರಕಾರ ಒಂದು ಸಮಿತಿ ರಚಿಸಿತ್ತು. ಆದರೆ ಅವರ ಅಕಾಲಿಕ ಮರಣ ಹಿನ್ನೆಲೆಯಲ್ಲಿ ಚನ್ನವೀರ ಕಣವಿ ಅಧ್ಯಕ್ಷತೆಯಲ್ಲಿ ಸರಕಾರ ಮತ್ತೊಂದು ಸಮಿತಿ ರಚನೆ ಮಾಡಿತ್ತು. ಆದರೆ ಈ ಸಮಿತಿಯು ಧಾಟಿ ನಿಗದಿಗಿಂತಲೂ ಹೆಚ್ಚಾಗಿ ಸಾಹಿತ್ಯವನ್ನು ತುಂಡರಿಸುವ ಕುರಿತು ಹೆಚ್ಚು ಆಸಕ್ತಿ ಹೊಂದಿತ್ತು. ಇದಕ್ಕೆ ಸಾಹಿತ್ಯ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು.

ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ವಿ. ಸುನೀಲ್ ಕುಮಾರ್ ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವಂತೆ ಹಿರಿಯ ಸಂಗೀತ ವಿದುಷಿ ಎಚ್.ಆರ್. ಲೀಲಾವತಿ ಅಧ್ಯಕ್ಷತೆಯಲ್ಲಿ ಹದಿನೆಂಟು ಜನರ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಎರಡು ನಿಮಿಷ ಮೂವತ್ತು ಸೆಕೆಂಡ್ ಗಳಲ್ಲಿ ನಾಡಗೀತೆ ಹಾಡಬೇಕೆಂದು ಸರ್ವಾನುಮತದಿಂದ ನೀಡಿದ್ದ ಶಿಫಾರಸು ಇದೀಗ ಅಧಿಕೃತಗೊಂಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸುನಿಲ್‌ ಕುಮಾರ್‌, ಬಹು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಸ್ತಾಪವನ್ನು ಸರ್ಕಾರ ಇತ್ಯರ್ಥಗೊಳಿಸಿದೆ. ಕುವೆಂಪು ವಿರಚಿತ ನಾಡಗೀತೆಯ ಒಂದಕ್ಷರವನ್ನೂ ಬಿಡದಂತೆ, ದಿ.ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಎರಡು ನಿಮಿಷ ಮೂವತ್ತು ಸೆಕೆಂಡ್ ಗೀತೆ ಹಾಡುವ ಪ್ರಸ್ತಾಪಕ್ಕೆ ಸಮ್ಮತಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ | ನಾಡಗೀತೆಗೆ ಅವಮಾನ ಮಾಡಿದವರ ವಿರುದ್ಧ ತಡಮಾಡದೇ ಕ್ರಮ ಕೈಗೊಳ್ಳಿ: ಕಸಾಪ ಅಧ್ಯಕ್ಷ ಮಹೇಶ್‌ ಜೋಶಿ ಆಗ್ರಹ

Exit mobile version