ಬೆಂಗಳೂರು: ಮಹಾರಾಷ್ಟ್ರದ ಪನ್ವೇಲ್‌ನಲ್ಲಿ (Maharashtra’s Panvel) ನಟ ಸಲ್ಮಾನ್ ಖಾನ್ (Salman Khan) ಅವರ ಕಾರಿನ ಮೇಲೆ ಅಟ್ಯಾಕ್ ಮಾಡಲು ಲಾರೆನ್ಸ್ ಬಿಷ್ಣೋಯ್ ಅವರ ಗ್ಯಾಂಗ್‌ನೊಂದಿಗೆ ನಂಟು ಹೊಂದಿರುವ ನಾಲ್ವರು ವ್ಯಕ್ತಿಗಳನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮಹಾರಾಷ್ಟ್ರದ ಪನ್ವೇಲ್‌ನಲ್ಲಿ ಪಾಕಿಸ್ತಾನಿ ಶಸ್ತ್ರಾಸ್ತ್ರ ಪೂರೈಕೆದಾರರಿಂದ ಶಸ್ತ್ರಾಸ್ತ್ರ ಪಡೆದು ಸಲ್ಮಾನ್ ಖಾನ್ ಕಾರಿನ ಮೇಲೆ ದಾಳಿ ಮಾಡಲು ಈ ತಂಡ ಸಂಚು ರೂಪಿಸಿತ್ತು ಎಂದು ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ತನ್ನ ಕೆನಡಾ ಮೂಲದ ಸೋದರಸಂಬಂಧಿ ಅನ್ಮೋಲ್ ಬಿಷ್ಣೋಯ್ ಮತ್ತು ಸಹವರ್ತಿ ಗೋಲ್ಡಿ ಬ್ರಾರ್ ಜತೆಗೆ ಪಾಕಿಸ್ತಾನಿ ಶಸ್ತ್ರಾಸ್ತ್ರ ವ್ಯಾಪಾರಿಯಿಂದ AK-47, M-16 ಮತ್ತು ಇತರ ಉನ್ನತ-ಕ್ಯಾಲಿಬರ್ ಶಸ್ತ್ರಾಸ್ತ್ರಗಳನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ. ಖಾನ್ ಅವರ ಕಾರಿನ ಮೇಲೆ ದಾಳಿ ಮಾಡುವುದು ಮತ್ತು ತೋಟದ ಮನೆಯ ಮೇಲೆ ಅಟ್ಯಾಕ್ ಮಾಡುವುದು ಲಾರೆನ್ಸ್ ಬಿಷ್ಣೋಯ್ ಪ್ಲ್ಯಾನ್ ಆಗಿತ್ತು ಎನ್ನಲಾಗಿದೆ.
ಲಾರೆನ್ಸ್ ಬಿಷ್ಣೋಯ್, ಅನ್ಮೋಲ್ ಬಿಷ್ಣೋಯ್, ಸಂಪತ್ ನೆಹ್ರಾ ಮತ್ತು ಗೋಲ್ಡಿ ಬ್ರಾರ್ ಸೇರಿದಂತೆ 17ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಧನಂಜಯ್ ಅಲಿಯಾಸ್ ಅಜಯ್ ಕಶ್ಯಪ್, ಗೌರವ್ ಭಾಟಿಯಾ ಅಲಿಯಾಸ್ ನಹ್ವಿ, ವಾಸ್ಪಿ ಖಾನ್ ಅಲಿಯಾಸ್ ವಾಸಿಂ ಚಿಕ್ನಾ ಮತ್ತು ರಿಜ್ವಾನ್ ಖಾನ್ ಅಲಿಯಾಸ್ ಜಾವೇದ್ ಖಾನ್ ಬಂಧಿತ ಆರೋಪಿಗಳು ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.
ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಯ ಬಳಿಕ, ಪೊಲೀಸರು ನಾಲ್ವರು ಶಂಕಿತರನ್ನು ಬಂಧಿಸಿದ್ದರು. ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಅವರನ್ನು ಗುಜರಾತ್‌ನಲ್ಲಿ ಬಂಧಿಸಲಾಗಿತ್ತು. ಅನುಜ್ ಥಾಪನ್ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಪಂಜಾಬ್‌ನಲ್ಲಿ ಏಪ್ರಿಲ್ 26 ರಂದು ಬಂಧಿಸಲಾಗಿತ್ತು. ಒಟ್ಟಾರೆಯಾಗಿ, ಆರು ಮಂದಿಯನ್ನು ಬಂಧಿಸಲಾಗಿತ್ತು ಅನುಜ್ ಥಾಪನ್ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದ
ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ ಸೆಡ್ಡು: ‘ರಘು ತಾತಾ’ ರಿಲೀಸ್ ಡೇಟ್ ಅನೌನ್ಸ್!
ಏನಿದು ಪ್ರಕರಣ?
ಎಪ್ರಿಲ್ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಬೈಕ್‌ನಲ್ಲಿ ಬಂದು ದಾಳಿ ನಡೆಸಿದ್ದ ಶೂಟರ್‌ಗಳಾದ ಸಾಗರ್ ಪಾಲ್ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.
ಈ ಮಧ್ಯೆ ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಅನೂಜ್ ಥಾಪನ್ ಕೆಲವು ದಿನಗಳ ಹಿಂದೆ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದ. ಅನುಜ್ ಥಾಪನ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆತನ ಕುಟುಂಬ ಇದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು. ಲಾಕಪ್‌ನಲ್ಲಿ ಥಾಪನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದರೆ ಆತನ ತಾಯಿ ಇದು ಕೊಲೆ ಎಂದು ಆರೋಪಿಸಿದ್ದರು.