ಬೆಂಗಳೂರು: ಕಾಂತಾರ ಸಿನಿಮಾ (Kantara Movie ) ಈಗ ವಿಶ್ವಾದ್ಯಂತ ಮೆಚ್ಚುಗೆಯನ್ನು ಪಡೆದುಕೊಳ್ಳುತ್ತಿದೆ. ಅಭೂತಪೂರ್ವ ಎಂಬ ರೀತಿಯಲ್ಲಿ ಪ್ರದರ್ಶನ ಕಾಣುತ್ತಿದೆ. ಇದರ ಬೆನ್ನಲ್ಲೆ ‘ಆ ದಿನಗಳು’ ಸಿನಿಮಾ ಖ್ಯಾತಿಯ ಚೇತನ್ ʻಭೂತಕೋಲ ಹಿಂದೂ ಸಂಸ್ಕೃತಿಯಲ್ಲʼ ಎಂಬ ಹೇಳಿಕೆ ನೀಡಿ ಕಿಡಿ ಹೊತ್ತಿಸಿದ್ದರು. ಈ ಬಗ್ಗೆ ಪರ – ವಿರೋಧ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ. “ಕಾಂತಾರʼದಲ್ಲಿ ಮುಖ್ಯ ಪಾತ್ರ ನಿರ್ವಹಿಸಿರುವ ಖ್ಯಾತ ನಟ ಕಿಶೋರ್ ಕುಮಾರ್ ಅವರು ಫೇಸ್‌ಬುಕ್ ವೇದಿಕೆಯಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಅನಿಸಿಕೆಯ ಪೂರ್ಣ ವಿವರ ಇಲ್ಲಿದೆ.
ಕಾಂತಾರ ಧರ್ಮ
ʻʻನಮ್ಮ ಜನಪದೀಯರ ಕೋಲದ ಭೂತಕ್ಕೂ, ನೇಮದ ದೈವಕ್ಕೂ ಧರ್ಮದ ಬಣ್ಣ ಬಳಿಯುತ್ತಿರುವವರಲ್ಲಿ ಕಳಕಳಿಯ ಮನವಿ. ಅದೇ ದೈವದ ವೇಷ ಧರಿಸುವವನನ್ನು ಅಸ್ಪೃಶ್ಯನೆಂದು ಮನೆಯೊಳಗೆ ಸೇರಿಸದ, ಮನೆಯೊಳಗೆ ಬಂದರೆ ಶುದ್ಧಿ ಮಾಡಿಸುವ ಅಸ್ಪೃಶ್ಯತೆಯ ಆಚರಣೆಯಲ್ಲಿ ನಮಗೆ ಅಧರ್ಮದ ಬಣ್ಣ ಕಾಣುತ್ತಿಲ್ಲವೇಕೆ? ಜನರಿಗಾಗಿ ಬಾಂಬು ಸಿಡಿಸಿ ಜೀವತೆತ್ತ ಗರ್ನಾಲು ಸಾಹೇಬನ ಧರ್ಮ ಕಾಣುತ್ತಿಲ್ಲವೇಕೆ?
ಎಲ್ಲ ಒಳ್ಳೆಯ ಸಿನಿಮಾಗಳಂತೆ “ಕಾಂತಾರ” ಜಾತಿ, ಧರ್ಮ, ಭಾಷೆಗಳನ್ನು ಮೀರಿ ದೇಶದ ಜನಗಳನ್ನು ಬೆಸೆಯುತ್ತಿದೆ. ಮನರಂಜನೆಯ ಮೂಲಕವೇ ಹಲವು ಸಾಮಾಜಿಕ ಸಮಸ್ಯೆಗಳ ಬಗ್ಗೆ ಜನರನ್ನು ಜಾಗೃತಗೊಳಿಸುತ್ತಿದೆ. ಅಂಥ ಸಿನಿಮಾವನ್ನು ಬಳಸಿ ಮೂಢನಂಬಿಕೆಯನ್ನೊ ಧರ್ಮಾಂಧತೆಯನ್ನೊ ಪ್ರಚೋದಿಸಿ ಜನಗಳನ್ನು ವಿಭಜಿಸುವ ಮಟ್ಟಕ್ಕೆ ಇಳಿದು ಬಿಟ್ಟರೆ ಇಂಥಾ ದೊಡ್ಡ ಗೆಲುವೂ ಮನುಷ್ಯತ್ವದ ದೊಡ್ಡ ಸೋಲಾಗಿ ಹೋದೀತು.
ಇದನ್ನೂ ಓದಿ | Kantara Movie | ಮಂಗಳೂರಿನಲ್ಲಿ ಕುಟುಂಬ ಸಮೇತ ಕಾಂತಾರ ಸಿನಿಮಾ ವೀಕ್ಷಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ
ಕೇವಲ ವೋಟಿಗಾಗಿ ಪಟೇಲ್, ಗಾಂಧಿ, ಬೋಸ್, ನೆಹರೂ ಸಹಿತ ಕೋಟಿ ಕೋಟಿ ಸ್ವಾತಂತ್ರ್ಯ ಹೋರಾಟಗಾರರನ್ನೂ ಬಳಸುವ, ಬೈಯ್ಯುವ, ರಾಷ್ಟ್ರ ಗೀತೆ, ಧ್ವಜ, ಲಾಂಛನ, ಕವಿಗಳನ್ನೂ ಬಿಡದೆ ಕಬಳಿಸಿದ ದ್ವೇಷದ ದಲ್ಲಾಳಿಗಳು ಸಿನಿಮಾಗಳನ್ನೂ ಕಬಳಿಸುವ ಮುನ್ನ ಒಂದು ಕ್ಷಣ ಯೋಚಿಸಿ. ನಮ್ಮ ಸಿನಿಮಾಗಳು ನಮ್ಮ ಹೆಮ್ಮೆ. ಅವುಗಳು ಧರ್ಮಾಂಧ ರಾಜಕಾರಣದ ದಾಳಗಳಾಗುವುದು ಬೇಡʼʼ ಎಂದು ಬರೆದುಕೊಂಡಿದ್ದಾರೆ.
ಕಿಶೋರ್ ಕುಮಾರ್ ಅವರ ಈ ಅನಿಸಿಕೆಗೆ ನೂರಾರು ಮಂದಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಇಲ್ಲೂ ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿವೆ.
ಇದನ್ನೂ ಓದಿ |Kantara Movie | ತುಮಕೂರಿನಲ್ಲಿ ಅರ್ಧಕ್ಕೆ ಸ್ಥಗಿತಗೊಂಡ ಕಾಂತಾರ ಪ್ರದರ್ಶನ; ಪ್ರೇಕ್ಷಕರ ಪ್ರತಿಭಟನೆ