Site icon Vistara News

Salman Khan: “ನನ್ನನ್ನು ಕೊಲ್ಲಲು ಬಿಷ್ಣೋಯಿ ಗ್ಯಾಂಗ್‌ ಯತ್ನಿಸುತ್ತಿದೆ”-ಗುಂಡಿನ ದಾಳಿ ಬಗ್ಗೆ ಸಲ್ಮಾನ್‌ ಖಾನ್‌ ಹೇಳಿಕೆ ದಾಖಲು

Salman Khan

ಮುಂಬೈ: ಕಳೆದ ಕೆಲವು ವರ್ಷಗಳಿಂದ ತಮಗೆ ಮತ್ತು ತಮ್ಮ ಕುಟುಂಬಕ್ಕೆ ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌(Lawrence Bishnoi gang)ನಿಂದ ನಿರಂತರ ಜೀವ ಬೆದರಿಕೆ(Life threats) ಕರೆ ಬರುತ್ತಿವೆ ಎಂದು ಬಾಲಿವುಡ್‌ ನಟ ಸಲ್ಮಾನ್‌ ಖಾನ್‌(Salman Khan) ಹೇಳಿದ್ದಾರೆ. ಕೆಲವು ತಿಂಗಳ ಹಿಂದೆ ತಮ್ಮ ಮನೆ ಮೇಲೆ ನಡೆದ ದಾಳಿ ಬಗ್ಗೆ ಇದೀಗ ಮಾತನಾಡಿರುವ ಸಲ್ಲು, ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌ ನನ್ನನ್ನು ಕೊಲ್ಲಲು ಸಕಲ ಪ್ರಯತ್ನವನ್ನೂ ನಡೆಸುಲ್ಲೇ ಇದೆ. ಗುಂಡಿನ ದಾಳಿ ಬಳಿ ನನ್ನ ಕುಟುಂಬಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಮುಂಬೈ ಕ್ರೈಂ ಬ್ರ್ಯಾಂಚ್‌ಗೆ ವಿಚಾರಣೆ ವೇಳೆ ಮಾಹಿತಿ ನೀಡಿದ ಸಲ್ಮಾನ್‌, ಅಂದು ನನಗೆ ಪಟಾಕಿಯಂತಹ ಸದ್ದು ಕೇಳಿಸಿತ್ತು. ಸುಮಾರು ಬೆಳಗ್ಗೆ 4.55 ಗಂಟೆ ಹೊತ್ತಿಗೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಬಾಲ್ಕನಿಯನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದರು. ನನ್ನನ್ನು ಮತ್ತು ನನ್ನ ಕುಟುಂಬಸ್ಥರನ್ನು ಗುರಿಯಾಗಿಸಿ ಆ ದಾಳಿ ನಡೆದಿತ್ತು. ಲಾರೆನ್ಸ್‌ ಬಿಷ್ಣೋಯಿ ಈ ಕೃತ್ಯದ ಹೊಣೆ ಹೊತ್ತುಕೊಂಡಿರುವ ಬಗ್ಗೆ ಮಾಧ್ಯಮಗಳ ಮೂಲಕ ಮಾಹಿತಿ ಸಿಕ್ಕಿತ್ತು.

ಈ ಹಿಂದೆ ಕೂಡ ಸಂದರ್ಶನವೊಂದರಲ್ಲಿ ಲಾರೆನ್ಸ್ ಬಿಷ್ಣೋಯ್ ಮತ್ತು ಅವರ ಗ್ಯಾಂಗ್ ಸದಸ್ಯರು ನನ್ನನ್ನು ಮತ್ತು ನನ್ನ ಸಂಬಂಧಿಕರನ್ನು ಕೊಲ್ಲುವ ಬಗ್ಗೆ ಮಾತನಾಡಿದ್ದ. ಹಾಗಾಗಿ, ಲಾರೆನ್ಸ್ ಬಿಷ್ಣೋಯ್ ತನ್ನ ಗ್ಯಾಂಗ್ ಸದಸ್ಯರ ಸಹಾಯದಿಂದ ನನ್ನ ಕುಟುಂಬ ಸದಸ್ಯರು ಒಳಗೆ ಮಲಗಿದ್ದಾಗ ಗುಂಡಿನ ದಾಳಿ ನಡೆಸಿ ನನ್ನನ್ನು ಮತ್ತು ನನ್ನ ಕುಟುಂಬ ಸದಸ್ಯರನ್ನು ಕೊಲ್ಲಲು ಯೋಜಿಸಿ ದಾಳಿ ನಡೆಸಿದ್ದಾನೆ ಎಂದು ನಾನು ನಂಬುತ್ತೇನೆ ಎಂದಿದ್ದಾರೆ.

ಏನಿದು ಪ್ರಕರಣ?

ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಬೈಕ್‌ನಲ್ಲಿ ಬಂದು ದಾಳಿ ನಡೆಸಿದ್ದ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.

ಈ ಮಧ್ಯೆ ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಅನೂಜ್‌ ಥಾಪನ್‌ ಕೆಲವು ದಿನಗಳ ಹಿಂದೆ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದ. ಅನುಜ್ ಥಾಪನ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆತನ ಕುಟುಂಬ ಇದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು. ಲಾಕಪ್‌ನಲ್ಲಿ ಥಾಪನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದರೆ ಆತನ ತಾಯಿ ಇದು ಕೊಲೆ ಎಂದು ಆರೋಪಿಸಿದ್ದರು.

ಕಾರಣವೇನು?

ಹಲವು ವರ್ಷಗಳ ಹಿಂದಿನ ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಅವರನ್ನು ಕೊಲ್ಲುವುದಾಗಿ 2018 ರಲ್ಲಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿ. ಸಲ್ಮಾನ್‌ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆʼʼ ಎಂದು ಹೇಳಿದ್ದ.

ಇದನ್ನೂ ಓದಿ: Rahul Gandhi: ರಾಹುಲ್‌ ಗಾಂಧಿಯನ್ನು ಭೇಟಿಯಾದ ರೈತರು; ಆ.15ರಂದು ದೇಶಾದ್ಯಂತ ರ‍್ಯಾಲಿಗೆ ನಿರ್ಧಾರ!

Exit mobile version