ಬೆಂಗಳೂರು: ರಾಜ್ಯದ ವಾಣಿಜ್ಯ ತೆರಿಗೆ ಸಂಗ್ರಹ (Commercial tax Collection) ದೇಶದಲ್ಲೇ ಅತ್ಯಧಿಕ ಎಂದು ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಹೇಳಿದರೆ, ಅವರು ಇನ್ನೊಂದು ಲೆಕ್ಕ ಹೇಳಿ ಇದು ಸಾಲದು ಎಂದು ಅತೃಪ್ತಿ ವ್ಯಕ್ತಪಡಿಸಿದ ಘಟನೆ ಗುರುವಾರ ನಡೆಯಿತು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ (Commercial tax department) ಪ್ರಗತಿ ಪರಿಶೀಲನೆ ನಡೆಸುವ ವೇಳೆ ಈ ಘಟನೆ ನಡೆಯಿತು.
ಸಭೆಯ ವೇಳೆ ಅಧಿಕಾರಿಗಳು ವಾಣಿಜ್ಯ ತೆರಿಗೆ ಸಂಗ್ರಹ ಬೆಳವಣಿಗೆ ದರವು ರಾಜ್ಯದಲ್ಲಿ ಶೇ.19.2ರಷ್ಟಿದ್ದು, ಇದು ದೇಶದಲ್ಲಿಯೇ ಅತಿ ಹೆಚ್ಚು ಎಂದರು. ದೇಶದ ಸರಾಸರಿ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ.15ರಷ್ಟು ಮಾತ್ರ ಇದೆ. ದೇಶದ ಒಟ್ಟಾರೆ ತೆರಿಗೆ ಸಂಗ್ರಹದಲ್ಲಿ ರಾಜ್ಯದ ಪಾಲು ಶೇ. 9.4 ರಷ್ಟಿದೆ. ಕಳೆದ ಬಾರಿಗಿಂತ ಈ ಬಾರಿ ರಾಜ್ಯದ ಪಾಲು ಹೆಚ್ಚಾಗಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ವಾಣಿಜ್ಯ ತೆರಿಗೆ ಇಲಾಖೆಯ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ. 19.2 ರಷ್ಟಿದ್ದು, ದೇಶದಲ್ಲಿಯೇ ಅತಿ ಹೆಚ್ಚಿದೆ ಎನ್ನುವುದು ಸಂತೋಷ ನೀಡುವ ಸಂಗತಿ, ನನಗೂ ಖುಷಿಯಾಗುತ್ತದೆ. ಆದರೆ, ನಮ್ಮ ಗುರಿ ಎಷ್ಟಿದೆ ನೋಡಿ. ನಾವು ಶೇ. 24 ಬೆಳವಣಿಗೆ ದರದ ಗುರಿಯನ್ನು ಹೊಂದಿದ್ದೇವೆ. ಅದನ್ನು ತಲುಪಲು ಪ್ರಯುತ್ನಿಸಬೇಕು ಎಂದು ಸಲಹೆ ನೀಡಿದರು.
ಇಷ್ಟಕ್ಕೆ ಸಮಾಧಾನ ಪಟ್ಟುಕೊಳ್ಳದೆ ತೆರಿಗೆ ವಂಚಿಕೆ ಪ್ರಕರಣಗಳನ್ನು ಹೆಚ್ಚೆಚ್ಚು ಪತ್ತೆ ಹಚ್ಚಿ ತೆರಿಗೆ ಸಂಗ್ರಹ ಗುರಿಯನ್ನು ದಾಟಿ ಸಾಧನೆ ಮಾಡುವ ಅವಕಾಶಗಳಿವೆ. ಇದನ್ನು ಸಾಧಿಸಿ ತೋರಿಸಿ ಎಂದು ಸಿಎಂ ಹೇಳಿದರು. ಇಲಾಖೆಯು ನಿಯಮ ಜಾರಿಯನ್ನು ಇನ್ನಷ್ಟು ತೀವ್ರವಾಗಿ ನಡೆಸುವ ಮೂಲಕ ತೆರಿಗೆ ವಂಚನೆ ತಡೆಗಟ್ಟುವ ಕಡೆಗೆ ಹೆಚ್ಚು ಆಸಕ್ತಿ ಕೊಡಬೇಕು ಎಂದರು.
ಮುಂದಿನ ಸಭೆಗೆ ಬರುವಾಗ ಇನ್ನಷ್ಟು ಪ್ರಗತಿ ತೋರಿಸಿ
ಗುರಿಗಿಂತ ಹೆಚ್ಚಿನ ಸಾಧನೆಯಾಗಬೇಕು. ಹಿಂದೆ ಉಳಿದವರು ಎಲ್ಲ ಪ್ರಯತ್ನ ಮಾಡಬೇಕು. ಜಾಗೃತ ದಳದವರು ಸಹಕರಿಸಬೇಕು. ಎರಡು ತಿಂಗಳ ನಂತರ ಮತ್ತೆ ಪ್ರಗತಿ ಪರಿಶೀಲಿಸಲಾಗುವುದು. ಆ ವೇಳೆಗೆ ಇನ್ನಷ್ಟು ಪ್ರಗತಿಯ ವರದಿ ನೀಡಿ. ಮುಂದಿನ ಸಭೆ ವೇಳೆಗೆ ಒಟ್ಟಾರೆ ಪರಿಸ್ಥಿತಿ ಈಗಿರುವುದಕ್ಕಿಂತ ಹೆಚ್ವು ಆಶಾದಾಯವಾಗಿರುವಂತೆ ಕ್ರಮ ವಹಿಸಿ ಎಂದು ಸೂಚನೆ ನೀಡಿದರು.
ಇದನ್ನೂ ಓದಿ: CM Siddaramaiah: ಸ್ಮಶಾನ, ಖಬರಸ್ಥಾನಗಳಿಗೆ 3 ತಿಂಗಳೊಳಗೆ ಜಾಗ ಒದಗಿಸಿ: ಡಿಸಿ, ಸಿಇಒಗಳಿಗೆ ಸಿಎಂ ಸೂಚನೆ
ಮುಖ್ಯಮಂತ್ರಿಗಳು ನೀಡಿದ ಪ್ರಮುಖ ಸೂಚನೆಗಳು
- ರಾಜ್ಯದಲ್ಲಿ ತೆರಿಗೆ ವಂಚನೆ, ತೆರಿಗೆ ಸೋರಿಕೆ, ತೆರಿಗೆ ಕಳ್ಳತನ ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಿ.
- ತೆರಿಗೆ ಕಳ್ಳತನ ತಡೆಯುವುದಕ್ಕಾಗಿ ಅಗತ್ಯ ಸೌಲಭ್ಯ ಒದಗಿಸಲಾಗಿದೆ. ನಿಮ್ಮ ಪ್ರಯತ್ನದಿಂದ ರಾಜ್ಯಕ್ಕೆ ಹೆಚ್ಚು ತೆರಿಗೆ ಬರಲು ಸಾಧ್ಯ.
- ಅನೇಕ ಭಾಗಗಳಲ್ಲಿ ಅನೇಕ ಉತ್ಪನ್ನಗಳಲ್ಲಿ ತೆರಿಗೆ ವಂಚನೆ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಹೆಚ್ಚಿನ ಗಮನಹರಿಸಿ ತೆರಿಗೆ ಸಂಗ್ರಹಿಸಬೇಕು.
- ಹೆಚ್ಚು ತೆರಿಗೆ ಸಂಗ್ರಹ ಮಾಡಿದರೆ ಅಭಿವೃದ್ಧಿ ಕೆಲಸ ಮಾಡಲು ಹೆಚ್ಚು ಅನುಕೂಲವಾಗುತ್ತದೆ. ಸಾಮೂಹಿಕ ಜವಾಬ್ದಾರಿ ಹೊತ್ತು ಕೆಲಸ ಮಾಡಬೇಕು.
ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಹಣಕಾಸು ಇಲಾಖೆಯ ಕಾರ್ಯದರ್ಶಿಗಳಾದ ಡಾ. ಪಿ.ಸಿ. ಜಾಫರ್ ಹಾಗೂ ಡಾ. ಎಂ.ಟಿ. ರೇಜು, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ.ಶಿಖಾ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು ಮತ್ತು ನಸೀರ್ ಅಹ್ಮದ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.