ನವ ದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಪ್ರತಿ ಬ್ಯಾರೆಲ್‌ಗೆ 87.17 ಡಾಲರ್‌ಗೆ (Oil prices fall) ಸೋಮವಾರ ಇಳಿಕೆಯಾಗಿದೆ.
ಈ ಹಿನ್ನೆಲೆಯಲ್ಲಿ ಭಾರತದಲ್ಲೂ ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗಲಿದೆಯೇ ಎಂಬ ಊಹಾಪೋಹ ಉಂಟಾಗಿದೆ. ಚೀನಾದಲ್ಲಿ ಕೋವಿಡ್ ಬಿಕ್ಕಟ್ಟಿನ ಪರಿಣಾಮ ಕಚ್ಚಾ ತೈಲಕ್ಕೆ ಬೇಡಿಕೆ ಕುಸಿಯಲಿದೆ ಎಂದು ಭಾವಿಸಲಾಗಿತ್ತು. ಆದರೆ ಅಲ್ಲಿನ ಪರಿಸ್ಥಿತಿ ಸುಧಾರಿಸಿದರೆ ತೈಲ ದರ ಮತ್ತೆ ಏರುಗತಿ ಪಡೆಯುವ ಸಾಧ್ಯತೆಯೂ ಇದೆ ಎನ್ನುತ್ತಾರೆ ತಜ್ಞರು.
ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ (Petrol Diesel Price) ಏರಿಕೆ ಕುರಿತು ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ತೈಲ ಕಂಪನಿಗಳಿಗೆ ಕೇಂದ್ರ ಸರ್ಕಾರ ಮಹತ್ವದ ಸೂಚನೆ ನೀಡಿದೆ. “ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ನಿಯಂತ್ರಣದಲ್ಲಿದ್ದರೆ ಭಾರತದ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡಬೇಕು” ಎಂದ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಸೂಚಿಸಿದ್ದಾರೆ. ಹಾಗಾಗಿ, ಮುಂದಿನ ದಿನಗಳಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯಾದರೆ ಭಾರತದಲ್ಲೂ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.