Site icon Vistara News

GlM | ನ.2ಕ್ಕೆ ಜಾಗತಿಕ ಹೂಡಿಕೆದಾರರ ಸಮಾವೇಶ ಉದ್ಘಾಟನೆ, 5 ಲಕ್ಷ ಕೋಟಿ ರೂ. ಹೂಡಿಕೆ ಪ್ರಸ್ತಾಪ ನಿರೀಕ್ಷೆ

nirani

ಬೆಂಗಳೂರು: ರಾಜ್ಯದ ಬಹುನಿರೀಕ್ಷಿತ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ (GlM) ನ.2ರಿಂದ 4ವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಹೂಡಿಕೆದಾರರ ಸಮಾವೇಶ ಉದ್ಘಾಟಿಸಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್‌. ನಿರಾಣಿ ತಿಳಿಸಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶದ ಪೂರ್ವ ಸಿದ್ದತೆ ಕುರಿತಂತೆ ಬೆಂಗಳೂರು ಅರಮನೆಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್‌ 2ರಂದು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, 10.30ಕ್ಕೆ ಪ್ರಧಾನಿ ನರೇಂದ್ರಮೋದಿ ಅವರು ವೀಡಿಯೋ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಲಿದ್ದಾರೆ ಎಂದರು

5 ಲಕ್ಷ ಉದ್ಯೋಗ ಸೃಷ್ಟಿ ನಿರೀಕ್ಷೆ: ಈ ಬಾರಿ ವಿಶ್ವದ ಮುಂಚೂಣಿಯಲ್ಲಿರುವ ಉದ್ಯಮಿಗಳು ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದಿದ್ದು, ಅಂದಾಜು 5 ಲಕ್ಷ ಕೋಟಿ ರೂ.ಗೂ ಅಧಿಕ ಹೂಡಿಕೆಯ ಪ್ರಸ್ತಾಪಗಳನ್ನು ನಿರೀಕ್ಷಿಸಲಾಗಿದೆ. 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೈಗಾರಿಕೆಗಳು ಬೆಂಗಳೂರನ್ನೇ ಕೇಂದ್ರೀಕೃತವಾಗಿರಿಸಿಕೊಂಡಿದ್ದು, ಅದನ್ನು ಎರಡು ಮತ್ತು ಮೂರನೇ ಹಂತದ ನಗರಗಳಿಗೂ ವಿಸ್ತರಿಸಲು ಸರ್ಕಾರ ಮುಂದಾಗಿದೆ. ಬೆಂಗಳೂರಿನ ಆಚೆಗೆ ಉದ್ಯಮ ವಿಸ್ತರಣೆ ಮತ್ತು ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗುತ್ತಿದೆ ಎಂದು ಸಚಿವರು ಹೇಳಿದರು.

ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಎಂಟಿಬಿ ನಾಗರಾಜ್, ಅಶ್ವತ್ಥನಾರಾಯಣ, ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರಾದ ಪಿಯೂಶ್ ಗೋಯಲ್, ಪ್ರಹ್ಲಾದ್ ಜೋಷಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ನವೆಂಬರ್‌ 4ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಭೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಸಿಎಂ ಬೊಮ್ಮಾಯಿ ಸೇರಿದಂತೆ ಮತ್ತಿತರ ಗಣ್ಯರು ಪಾಲ್ಗೊಳ್ಳುವರು. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಆದಂಥ ಹೂಡಿಕೆ ಒಪ್ಪಂದದ ವಿವರ, ಎಷ್ಟು ಉದ್ಯೋಗಾವಕಾಶ ಸೃಷ್ಟಿಯಾಗಲಿದೆ ಎಂಬ ಎಷ್ಟು ನಿಖರವಾದ ಮಾಹಿತಿ ಒದಗಿಸಲಾಗುವುದು. ಜಾಗತಿಕಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಂಡು ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಸಚಿವರು ಕೋರಿದರು.

ಈ ಸಮಾವೇಶ ಬಂಡವಾಳ ಹೂಡಿಕೆಗಷ್ಟೇ ಸೀಮಿತವಾಗಿಲ್ಲ. ಕರ್ನಾಟಕದ ಸಾಂಸ್ಕೃತಿಕ ಲೋಕ ಅನಾವರಣಗೊಳ್ಳಲಿದೆ. ಆಹಾರ‌ ಮೇಳದಲ್ಲಿ ಕರ್ನಾಟಕದ ವಿಶೇಷ ಖಾದ್ಯಗಳನ್ನು ಸವಿಯಬಹುದು ಎಂದು ಸಚಿವರು ವಿವವರಿಸಿದರು. ಗ್ರಾಮಿ ಪ್ರಶಸ್ತಿ ಪುರಸ್ಕೃತ ರಿಕ್ಕಿ ಕೇಜ್, ಗಾಯಕಿ ವಸುಂಧರಾ ದಾಸ್‌, ಹಿಂದೂಸ್ಥಾನಿ ಹಾಗೂ ಕರ್ನಾಟಕ ಸಂಗೀತದ ಜುಗಲ್‌ಬಂದಿಯ ಸಂಗೀತ ಆಸ್ವಾದಿಸಬಹುದು. ಯಕ್ಷಗಾನ, ವಸ್ತು ಪ್ರದರ್ಶನ, ಕೈಮಗ್ಗ ಮತ್ತು ಜವಳಿ, ವಾಸ್ತುಶಿಲ್ಪ ಪ್ರದರ್ಶನ, ಚಿತ್ರಕಲಾ‌‌‌ ಪರಿಷತ್‌ನಲ್ಲಿ ವಿಶೇಷ ಪ್ರದರ್ಶನ ಇರಲಿದೆ. ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ಸ್, ರಾಜ್ಯದ ಎಲ್ಲಾ ಭಾಗಗಳಲ್ಲಿರುವ ವಸ್ತು ಸಂಗ್ರಹಾಲಯಗಳು ಮತ್ತು ಗ್ಯಾಲರಿಗಳಿಂದ ವರ್ಣಚಿತ್ರಗಳು ಮತ್ತು ಕಲಾಕೃತಿಗಳನ್ನು ಪ್ರದರ್ಶಿಸಲಿದೆ ಎಂದರು.

ಬಿಲ್ಡ್ ಫಾರ್ ದಿ ವರ್ಲ್ಡ್‌ ಎಂಬ ಪರಿಕಲ್ಪನೆಯೊಂದಿಗೆ ನಡೆಯಲಿರುವ ಇನ್ವೆಸ್ಟ್ ಕರ್ನಾಟಕ 2022 ಜಾಗತಿಕ ಸಮಾವೇಶದಲ್ಲಿ ಫ್ರಾನ್ಸ್, ಜರ್ಮನಿ, ನೆದರ್ಲ್ಯಾಂಡ್ಸ್, ದಕ್ಷಿಣ ಕೊರಿಯಾ, ಜಪಾನ್ ಮತ್ತು ಆಸ್ಟ್ರೇಲಿಯಾದ ಸರ್ಕಾರ ಹಾಗೂ ಉದ್ಯಮದ ಪ್ರತಿನಿಧಿಗಳು ಸೇರಿ ಒಟ್ಟು 5000ಕ್ಕೂ ಹೆಚ್ಚು ಗಣ್ಯರು ಭಾಗವಹಿಸಲಿದ್ದಾರೆ.

Exit mobile version