ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರೀಕ್ಷೆಯಂತೆ ರಿಪೋ ದರ (Repo Rate) ಅಥವಾ ಬಡ್ಡಿದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಹಣದುಬ್ಬರ ಇನ್ನೂ ಅಧಿಕ ಮಟ್ಟದಲ್ಲಿ ಇರುವುದರಿಂದ ರಿಪೋ ದರ ಇಳಿಕೆ ಸದ್ಯಕ್ಕೆ ಬೇಡ ಎಂಬುದು ಮಾನಿಟರಿ ಪಾಲಿಸಿ ಕಮಿಟಿ (Monetary Policy Committee)ಯ ಹೆಚ್ಚಿನ ಸದಸ್ಯರ ಅಭಿಮತದ ಹಿನ್ನಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಎಂಪಿಸಿ ಸಭೆಯಲ್ಲಿ ಕೈಗೊಂಡ ಈ ತೀರ್ಮಾನದ ಬಗ್ಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ (Shaktikanta Das) ಮಾಹಿತಿ ನೀಡಿದರು. ಇದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ಯಾವುದೇ ಬದಲಾವಣೆ ಆಗುವುದಿಲ್ಲ.
ʼʼಬಡ್ಡಿ ದರ ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಲಾಗಿದೆ. ಎಂಪಿಸಿ ಸಭೆಯಲ್ಲಿ ಆರು ಸದಸ್ಯರಲ್ಲಿ ನಾಲ್ವರು ಬಡ್ಡಿದರ ಯಥಾಸ್ಥಿತಿ ಮುಂದುವರಿಸುವ ಇಚ್ಛೆ ವ್ಯಕ್ತಪಡಿಸಿದ್ದರಿಂದ ಈ ತೀರ್ಮಾನ ಕೈಗೊಳ್ಳಲಾಗಿದೆʼʼ ಎಂದು ಶಕ್ತಿಕಾಂತ ದಾಸ್ ತಿಳಿಸಿದರು. ಆರ್‌ಬಿಐ ಕೊನೆಯ ಬಾರಿಗೆ 2023ರ ಫೆಬ್ರವರಿಯಲ್ಲಿ ರೆಪೋ ದರವನ್ನು ಶೇ. 6.25ರಿಂದ ಶೇ. 6.50ಕ್ಕೆ ಏರಿಕೆ ಮಾಡಿತ್ತು.
#WATCH | RBI Governor Shaktikanta Das says "…The Monetary Policy Committee decided by a 4:2 majority to keep the policy repo rate unchanged at 6.5%. Consequently, the standing deposit facility (SDF) rate remains at 6.25%, and the marginal standing facility (MSF) rate and the… pic.twitter.com/2bNLZVr03S
— ANI (@ANI) August 8, 2024
ಗೃಹ ಸಾಲದ ಮೇಲೆ ಪರಿಣಾಮ ಬೀರುವುದಿಲ್ಲ
ರೆಪೋ ದರ ಯಥಾಸ್ಥಿಯಲ್ಲಿರುವುದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ರೆಪೋ ದರವು ಬದಲಾಗದೆ ಉಳಿದಿರುವುದರಿಂದ ಬ್ಯಾಂಕ್‌ಗಳು ಶೀಘ್ರದಲ್ಲೇ ತಮ್ಮ ಸಾಲದ ದರಗಳನ್ನು ಬದಲಾಯಿಸುವ ಸಾಧ್ಯತೆಯಿಲ್ಲ. ಅಂದರೆ ನಿಮ್ಮ ಇಎಂಐ ಸದ್ಯ ಏರಿಕೆ ಅಥವಾ ಇಳಿಕೆಯಾಗುವುದಿಲ್ಲ.
ಹಣದುಬ್ಬರ ನಿಯಂತ್ರಣದ ಗುರಿ
ಹಣದುಬ್ಬರವನ್ನು ನಿಯಂತ್ರಿಸುವುದೇ ಆರ್‌ಬಿಐಯ ಹಣಕಾಸು ನೀತಿಯ ಪ್ರಮುಖ ಗುರಿ. ಪ್ರಸ್ತುತ ಹಣದುಬ್ಬರ ದರ ಆರ್‌ಬಿಐಯ ಗುರಿಯಾದ ಶೇ. 4ಕ್ಕಿಂತ ಹೆಚ್ಚಾಗಿದೆ. ರೆಪೋ ದರವನ್ನು ಕಡಿಮೆ ಮಾಡುವುದು ಆರ್ಥಿಕತೆಯಲ್ಲಿ ಹಣದುಬ್ಬರದ ಒತ್ತಡದ ಹೆಚ್ಚಳಕ್ಕೆ ಕಾರಣವಾಗಬಹುದು. ಪ್ರಸ್ತುತ ದರವನ್ನು ಕಾಯ್ದುಕೊಳ್ಳುವುದು ಹಣದುಬ್ಬರವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ ಮತ್ತು ಸ್ವಲ್ಪ ಆರ್ಥಿಕ ಬೆಳವಣಿಗೆಗೆ ಅನುವು ಮಾಡಿಕೊಡುತ್ತದೆ ಎನ್ನುವುದು ಆರ್‌ಬಿಐಯ ಅಭಿಮತ. ʼʼರೆಪೋ ದರ ಕಡಿತವು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಬಹುದಾದರೂ ಆರ್‌ಬಿಐ ಈ ಹಂತದಲ್ಲಿ ಹಣದುಬ್ಬರವನ್ನು ನಿಯಂತ್ರಿಸಲು ಆದ್ಯತೆ ನೀಡುತ್ತಿದೆʼʼ ಎಂದು ಮೂಲಗಳು ತಿಳಿಸಿವೆ.
ರೆಪೋ ದರ ಎಂದರೇನು?
ದೇಶದ ವಾಣಿಜ್ಯ ಬ್ಯಾಂಕ್‌ಗಳಿಗೆ ಆರ್‌ಬಿಐ ನೀಡುವ ಸಾಲಕ್ಕೆ ವಿಧಿಸುವ ಬಡ್ಡಿದರವೇ ರೆಪೋದರ ಆಗಿದೆ. ಹಣದ ಕೊರತೆ ಸೇರಿ ಯಾವುದೇ ತುರ್ತು ಸಂದರ್ಭಗಳಲ್ಲಿ ವಾಣಿಜ್ಯ ಬ್ಯಾಂಕ್‌ಗಳು ಆರ್‌ಬಿಐನಿಂದ ಸಾಲ ಪಡೆಯುತ್ತವೆ. ಈ ಸಾಲಕ್ಕೆ ಆರ್‌ಬಿಐ ಬಡ್ಡಿ ವಿಧಿಸುತ್ತದೆ. ಇದನ್ನೇ ರೆಪೋ ರೇಟ್ ಎನ್ನುತ್ತಾರೆ. ಕೆಲವೊಮ್ಮೆ, ವಾಣಿಜ್ಯ ಬ್ಯಾಂಕ್‌ಗಳಿಂದ ಆರ್‌ಬಿಐ ಸಾಲ ಪಡೆಯತ್ತದೆ. ಆ ಸಾಲದ ಮೇಲಿನ ಬಡ್ಡಿಗೆ ರಿವರ್ಸ್ ರೆಪೋ ದರ ಎನ್ನುತ್ತಾರೆ. ರೆಪೋ ದರ ಏರಿಕೆಯಾದರೆ, ಬ್ಯಾಂಕುಗಳು ಕೂಡ ಗ್ರಾಹಕರಿಗೆ ನೀಡುವ ಸಾಲದ ಮೇಲಿನ ಬಡ್ಡಿಯನ್ನು ಏರಿಕೆ ಮಾಡುತ್ತವೆ. ಹಾಗಾಗಿ, ರೆಪೋ ದರವು ಸಾಲಗಾರರಿಗೆ ಪ್ರಮುಖ ಎನಿಸುತ್ತದೆ.
ಇದನ್ನೂ ಓದಿ: Bangladesh Unrest: ಬಾಂಗ್ಲಾ ಹಿಂಸಾಚಾರ; ಬಹುರಾಷ್ಟ್ರೀಯ ಕಂಪನಿಗಳು ತತ್ತರ; ಭಾರತದ ಉದ್ಯಮಗಳ ಮೇಲೇನು ಪರಿಣಾಮ?