ಬೆಂಗಳೂರು: 2015-16ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ (Chemistry paper leak) ಪ್ರಕರಣದ 17 ಆರೋಪಿಗಳನ್ನು ಖುಲಾಸೆಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.
2016ರ ಮಾ.21ರಂದು ನಡೆದಿದ್ದ ದ್ವಿತೀಯ ಪಿಯು ರಸಾಯನಶಾಸ್ತ್ರದ ಪ್ರಶ್ನೆಪತ್ರಿಕೆಯು ಅದೇ ದಿನ ದಿನ ಬೆಳಗ್ಗೆ 7.30ಕ್ಕೆ ಸೋರಿಕೆಯಾಗಿ ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡಿತ್ತು. ಈ ಸಂಬಂಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳ ಒತ್ತಾಯಕ್ಕೆ ಮಣಿದು ಆಗೀನ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು.
ಬಳಿಕ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು 18 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ವೇಳೆ ವಿಚಾರಣಾ ಹಂತದಲ್ಲಿಯೇ ಓರ್ವ ಆರೋಪಿ ಸಾವನ್ನಪ್ಪಿದರು. ಉಳಿದ ಆರೋಪಿಗಳನ್ನು ನ್ಯಾಯಾಲಯವು ಇಂದು ಗುರುವಾರ (ಏ.25) ಖುಲಾಸೆಗೊಳಿಸಿದೆ.
ಇನ್ನೂ ತನಿಖೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆ ದಂಧೆಯು ಹಲವು ವರ್ಷಗಳಿಂದ ನಡೆಯುತ್ತಿತ್ತು. ಅದರಲ್ಲಿ ಹಲವು ಟ್ಯೂಟೋರಿಯಲ್‌ಗಳು ಹಾಗೂ ಶಿಕ್ಷಕರು ಭಾಗಿಯಾಗಿರುವ ಮಾಹಿತಿ ದೊರೆತಿತ್ತು. ಹೀಗಾಗಿ ಅದನ್ನು ಆಧರಿಸಿ ಕಾರ್ಯಾಚರಣೆ ನಡೆಸಿರುವ ಸಿಐಡಿ, ಹಲವು ಅಧಿಕಾರಿಗಳು ಮತ್ತು ಶಿಕ್ಷಕರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಯನ್ನೂ ನಡೆಸಿದ್ದರು.
2016ರ ಮಾರ್ಚ್ 21ರಂದು ಮೊದಲು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ನಂತರ ಮಾರ್ಚ್ 31ರಂದು ಮರು ಪರೀಕ್ಷೆ ನಡೆಸಿದಾಗಲೂ ಎರಡು ಬಾರಿಯೂ ಪಿಯು ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ನಂತರ ಈ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಸಿಐಡಿ ಡಿಐಜಿ ಸೋನಿಯಾ ನಾರಂಗ್ ನೇತೃತ್ವದಲ್ಲಿ ತನಿಖೆ ನಡೆದಿತ್ತು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ