ಭೋಪಾಲ್: ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ ತವರು ಜಿಲ್ಲೆಯಲ್ಲಿಯೇ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಮಹಿಳೆಯ ಸಹೋದರಿಯ ಮೇಲೂ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಅಷ್ಟೇ ಅಲ್ಲ, ಸಾಮೂಹಿಕ ಅತ್ಯಾಚಾರ ಎಸಗಿದ ನಾಲ್ವರು ಆರೋಪಿಗಳಲ್ಲಿ ಬಿಜೆಪಿ ಸ್ಥಳೀಯ ನಾಯಕರೊಬ್ಬರ ಪುತ್ರನೂ ಇದ್ದಾನೆ ಎಂದು ತಿಳಿದುಬಂದಿದೆ. ಹಾಗಾಗಿ, ಪ್ರಕರಣದಲ್ಲಿ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಜನ ಆಗ್ರಹಿಸುತ್ತಿದ್ದಾರೆ.
ಮಧ್ಯಪ್ರದೇಶದ ದಾಟಿಯಾ ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದೆ ಘಟನೆ ನಡೆದಿದೆ. ಇದುವರೆಗೆ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಮಾತ್ರ ಬಂಧಿಸಲಾಗಿದೆ. ಈಗ ಸಂತ್ರಸ್ತರ ಕುಟುಂಬಸ್ಥರು, ಗ್ರಾಮಸ್ಥರು ಪೊಲೀಸ್ ಠಾಣೆಗೆ ತೆರಳಿದ್ದು, ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕು ಎಂದು ಪೊಲೀಸರಿಗೆ ಒತ್ತಾಯಿಸಿದ್ದಾರೆ.
ನಾಲ್ವರು ಆರೋಪಿಗಳು ಕೂಡ ಉನ್ನಾವೋ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಗಳಾಗಿದ್ದಾರೆ. “ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಪೋಕ್ಸೊ ಹಾಗೂ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ” ಎಂದು ದಾಟಿಯಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಮಿಶ್ರಾ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Physical Abuse: ಚಲಿಸುತ್ತಿರುವ ಆಟೋದಲ್ಲಿ ಯುವತಿ ಮೇಲೆ ಅತ್ಯಾಚಾರ, ಉತ್ತರ ಪ್ರದೇಶದಲ್ಲಿ ಆರೋಪಿ ಸೆರೆ!
ನಾಲ್ವರು ಆರೋಪಿಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನಿಬ್ಬರು ತಲೆಮರೆಸಿಕೊಂಡಿದ್ದು, ಇವರಲ್ಲಿ ಒಬ್ಬನು ಸ್ಥಳೀಯ ಬಿಜೆಪಿ ನಾಯಕರೊಬ್ಬರ ಪುತ್ರ ಎಂದು ತಿಳಿದುಬಂದಿದೆ. ಹಾಗೆಯೇ, ಆರೋಪಿಗಳ ಕುರಿತು ಮಾಹಿತಿ ನೀಡಿದರೆ 10 ಸಾವಿರ ರೂ. ನೀಡಲಾಗುವುದು ಎಂದು ಪೊಲೀಸರು ಘೋಷಿಸಿದ್ದಾರೆ. ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲಿ ಎಂದು ಜಿಲ್ಲಾ ಬಿಜೆಪಿ ಘಟಕ ತಿಳಿಸಿದೆ. ಕೆಲ ದಿನಗಳ ಹಿಂದಷ್ಟೇ, ಮಹಿಳೆ ಹಾಗೂ ಮಹಿಳೆಯ ಸಹೋದರಿಯನ್ನು ಅಪಹರಿಸಿ, ಮನೆಯೊಂದರಲ್ಲಿ ಅತ್ಯಾಚಾರ ಮಾಡಲಾಗಿತ್ತು. ಮಹಿಳೆಯು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಬಾಲಕಿಗೆ ಲೈಂಗಿಕ ಕಿರುಕುಳ ಕೂಡ ನೀಡಲಾಗಿದೆ.