ರಾಯಚೂರು: ರಾಯಚೂರಿನಲ್ಲಿ ಕೆಎಸ್‌ಆರ್‌ಟಿಸಿ ಸ್ಲೀಪರ್ ಕೋಚ್ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಬಸ್ ಚಾಲಕ ಕಂ ನಿರ್ವಾಹಕ ಸ್ಥಳದಲ್ಲೇ (Road Accident) ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಘಟನೆ ನಡೆದಿದೆ. ನಸುಕಿನ ಜಾವ ಸ್ಲೀಪರ್ ಬಸ್ ಅಪಘಾತಕ್ಕೀಡಾಗಿದ್ದು, ಬಸ್ ಚಾಲಕ/ನಿರ್ವಾಹಕ ರಾಚಪ್ಪ (51) ಮೃತಪಟ್ಟಿದ್ದಾರೆ.
ಹುಬ್ಬಳ್ಳಿಯಿಂದ ರಾಯಚೂರನತ್ತ ಕೆಎಸ್‌ಆರ್‌ಟಿಸಿ ಬಸ್ ಬರುತ್ತಿತ್ತು. ನಿದ್ದೆ ಮಂಪರಿನಲ್ಲಿದ್ದಾಗ ನಸುಕಿನ ಜಾವ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಬಸ್ ಮುಂಭಾಗ ಪುಡಿ ಪುಡಿಯಾಗಿದ್ದು, ಬಸ್‌ನಡಿ ಸಿಲುಕಿ ಗಂಭೀರ ಗಾಯಗೊಂಡಿದ್ದ ರಾಚಪ್ಪ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಸ್‌ನಲ್ಲಿ 9 ಮಂದಿ ಪ್ರಯಾಣಿಸುತ್ತಿದ್ದರು, ಅಪಘಾತದಲ್ಲಿ ಒಬ್ಬರಿಗೆ ಮಾತ್ರ ಗಾಯವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಂಧನೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿಂಧನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸಕೋಟೆಯಲ್ಲಿ ಭೀಕರ ರಸ್ತೆ ಅಪಘಾತ
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿದ್ದು, 10ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಅಪಘಾತದ ತೀವ್ರತೆಗೆ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.ಖಾಸಗಿ ಬಸ್‌ವೊಂದು ಬೆಂಗಳೂರಿನಿಂದ ಕೆಜಿಎಫ್‌ಗೆ ಹೋಗುತ್ತಿತ್ತು. ಈ ವೇಳೆ ಲಾರಿಯೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿ ಸಿಲುಕಿದ್ದವರನ್ನು ಹೊರಗಡೆ ಕರೆತಂದು ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೈಕ್‌ಗೆ ಬಸ್ ಡಿಕ್ಕಿ; ಪೌರ ಕಾರ್ಮಿಕ ಸಾವು
ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪೌರ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಡುಪಿಯ ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಹಂಗಳೂರು ದುರ್ಗಾಂಬ ಬಸ್ ಡಿಪೋ ಬಳಿ ಅಪಘಾತ ನಡೆದಿದೆ. ಕುಂದಾಪುರ ಪುರಸಭೆಯ ಪೌರ ಕಾರ್ಮಿಕ ಸುಂದರ (39) ಮೃತಪಟ್ಟವರು.
ಬಾರ್ಕೂರು ಬಂಡಿ ಮಠ ಮೂಲದ ಪೌರ ಕಾರ್ಮಿಕ, ಕುಂದಾಪುರದ ಮನೆಗೆ ಬರುವಾಗ ಅಪಘಾತ ಸಂಭವಿಸಿದೆ. ಕೋಟೇಶ್ವರದಿಂದ ಕುಂದಾಪುರ ಕಡೆಗೆ ಬರುತ್ತಿದ್ದಾಗ ಬೈಕ್‌ಗೆ ಬಸ್ ಗುದ್ದಿದೆ. ಗುದ್ದಿದ ರಭಸಕ್ಕೆ ಕೆಳಗೆ ಬಿದ್ದ ಸುಂದರ ತಲೆಗೆ ತೀವ್ರ ಪೆಟ್ಟಾಗಿದ್ದು, ಸ್ಥಳದಲ್ಲೇ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.
ಹಂಗಳೂರು ದುರ್ಗಾಂಬ ಡಿಪ್ಪೋ ಒಳಗೆ ಹೋಗುತ್ತಿದ್ದ ವೇಳೆ ಚಾಲಕನ ನಿರ್ಲಕ್ಷ್ಯ ಚಾಲನೆಯ ಆರೋಪ ಕೇಳಿ ಬಂದಿದೆ. ನೇರ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಕುಂದಾಪುರ ಪೋಲಿಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ