ಮಡಿಕೇರಿ: ಲಕ್ಷಾಂತರ ರೂಪಾಯಿ ಬೆಲೆ ಬಾಳುವಹುಲಿ ಉಗುರುಗಳನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದವರನ್ನು ಸಿಐಡಿ ಅರಣ್ಯ ಘಟಕದ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಸುದರ್ಶನ ವೃತ್ತದ ಬಳಿ ಸಿದ್ದಾಪುರ ಕಡೆಗೆ ಹೋಗುವ ರಸ್ತೆ ಬದಿಯಲ್ಲಿರುವ ಬಸ್ ನಿಲ್ದಾಣದ ಬಳಿ ಇಬ್ಬರು ವ್ಯಕ್ತಿಗಳು ಹುಲಿಯ ಉಗುರುಗಳನ್ನು ಅಕ್ರಮವಾಗಿ ಇಟ್ಟುಕೊಂಡು ಅದನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಡಿಕೇರಿ ತಾಲೂಕು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳಕ್ಕೆ ಖಚಿತ ಮಾಹಿತಿ ಲಭಿಸಿತ್ತು.
ಮಾಹಿತಿಯನ್ನು ಆಧರಿಸಿ ದಾಳಿ ನಡೆಸಿದ ಸಿಬ್ಬಂದಿ, ಇಬ್ಬರು ಆರೋಪಿಗಳನ್ನು ಮಾಲು ಸಹಿತ ಬಂಧಿಸಿದ್ದಾರೆ. ಆರೋಪಿಗಳ ವಶದಲ್ಲಿದ್ದ 22 ಹುಲಿಯ ಉಗುರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ | ಮೊಹಾಲಿ ಗ್ರೆನೇಡ್ ದಾಳಿಯಲ್ಲಿ ಉಗ್ರರ ಕೈವಾಡ?: ಸ್ಥಳದಲ್ಲಿ ಬಿಗಿ ಭದ್ರತೆ, ಶಂಕಿತರು ಪೊಲೀಸ್ ವಶಕ್ಕೆ
ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾ ನಿರೀಕ್ಷಕ ಕೆ.ವಿ.ಶರತ್ ಚಂದ್ರ ಅವರ ನಿರ್ದೇಶನದ ಮೇರೆಗೆ, ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪ್ರಭಾರ ಅಧೀಕ್ಷಕ ಎನ್.ಟಿ. ಶ್ರೀನಿವಾಸ್ ರೆಡ್ಡಿ ಮಾರ್ಗದರ್ಶನದಲ್ಲಿ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಉಪ ನಿರೀಕ್ಷಕಿ ಸಿ.ಯು. ಸವಿ, ಸಿಬ್ಬಂದಿಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ, ಸ್ವಾಮಿ ಮತ್ತು ಮಂಜುನಾಥ್ ಅವರುಗಳು ಕಾರ್ಯಾಚರಣೆ ನಡೆಸಿದರು.
ಇದನ್ನೂ ಓದಿ | ಮಂಪರು ಬರಿಸುವ ಮಾದಕ ತೈಲ ಮಾರುತ್ತಿದ್ದ ಆರೋಪಿ ಬಂಧನ, 200 ಗ್ರಾಂಗೆ 10 ಲಕ್ಷ!