ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ (2nd PU Exam) ನಾಳೆಯಿಂದ (ಶುಕ್ರವಾರ – ಮಾ. 1) ಆರಂಭವಾಗುತ್ತಿದ್ದು, ಮಾರ್ಚ್ 22ರವರೆಗೆ ಪರೀಕ್ಷೆ ನಡೆಯಲಿದೆ. ಈ ನಡುವೆ ಶಾಲಾ ಶಿಕ್ಷಣ ಇಲಾಖೆಯು ಕೆಲವು ನಿರ್ಬಂಧಗಳನ್ನು ವಿಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ (Prohibitory orders) ಇದ್ದು, ಕಟ್ಟೆಚ್ಚರ ವಹಿಸಲಾಗುತ್ತದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಐಡಿ ಕಾರ್ಡ್ ಕಡ್ಡಾಯಗೊಳಿಸಲಾಗಿದೆ. ನಿಯಮಾನುಸಾರ ಹಾಗೂ ಕೋರ್ಟ್ ಆದೇಶದ ಅನ್ವಯವೇ ಉಡುಪು ಧರಿಸಿ ಬರಬೇಕಿದೆ.
ಮಾರ್ಚ್ 22ರ ವರೆಗೆ ನಡೆಯಲಿರುವ ಪರೀಕ್ಷೆಗೆ ಯಾವುದೇ ಅಡೆತಡೆಯಾಗದಂತೆ ಮತ್ತು ಯಾವುದೇ ಅಕ್ರಮ ನಡೆಯದಂತೆ ಕರ್ನಾಟಕ ರಾಜ್ಯ ಶಾಲಾ ಪರೀಕ್ಷಾ ಮಂಡಳಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಆಯಾ ನಗರ ಹಾಗೂ ತಾಲೂಕು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ 200 ಮೀಟರ್‌ವರೆಗೂ ಪೊಲೀಸರು ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದಾರೆ.
ರಾಜ್ಯಾದ್ಯಂತ 2024ರ ದ್ವಿತೀಯ ಪಿಯುಸಿಗೆ 6,98,627 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ 3,30,644 ಬಾಲಕರು, 3,67,980 ಬಾಲಕಿಯರು ಪರೀಕ್ಷೆಯನ್ನು ಬರೆಯಲಿದ್ದಾರೆ. ರಾಜ್ಯಾದ್ಯಂತ ಪಿಯುಸಿ ಪರೀಕ್ಷೆಯು 1,124 ಕೇಂದ್ರಗಳಲ್ಲಿ ನಡೆಯಲಿದೆ. 2023-24ನೇ ಸಾಲಿನಿಂದ ದ್ವಿತೀಯ ಪಿ.ಯು.ಸಿ. ಪರೀಕ್ಷಾ ಕ್ರಮದಲ್ಲಿ 80+20 patternನ್ನು (80 ಅಂಕಗಳಿಗೆ ಲಿಖಿತ ಪರೀಕ್ಷೆ ಮತ್ತು 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನ) ಅಳವಡಿಸಲಾಗಿದೆ. ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಭಾಷೆಯ ಪರೀಕ್ಷೆಗಳು ಬೆಳಗ್ಗೆ 10.30ಕ್ಕೆ ಆರಂಭಗೊಳ್ಳಲಿವೆ.
ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಹೀಗಿದೆ..
01-03-2024: ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ
04-03-2024: ಗಣಿತ, ಶಿಕ್ಷಣ ಶಾಸ್ತ್ರ
05-03-2024: ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ
06-03-2024: ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್ಸ್
07-03-2024: ಇತಿಹಾಸ ಹಾಗೂ ಭೌತಶಾಸ್ತ್ರ
09-03-2024: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ ಪರೀಕ್ಷೆ
11-03-2024: ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ಪರೀಕ್ಷೆ
13-03-2024: ಇಂಗ್ಲಿಷ್
15-03-2024: ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ
16-03-2024: ಅರ್ಥಶಾಸ್ತ್ರ ಪರೀಕ್ಷೆ
18-03-2024: ಭೂಗೋಳ ಶಾಸ್ತ್ರ, ಜೀವಶಾಸ್ತ್ರ
20-03-2024: ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
21-03-2024: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
22-03-2024: ಹಿಂದಿ ಪರೀಕ್ಷೆ
ವಿದ್ಯಾರ್ಥಿಗಳ ಗೊಂದಲ ನಿವಾರಣೆಗೆ FAQ’s
ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಇರಬಹುದಾದ ಗೊಂದಲಗಳಿಗೆ ಸಂಬಂಧಿಸಿದಂತೆ, ಮಾಹಿತಿ ನೀಡುವುದಕ್ಕಾಗಿ “ಸಾಮಾನ್ಯವಾಗಿ ಕೇಳಲ್ಪಡುವ ಪ್ರಶ್ನೆಗಳು” (FAQ’s) ಸಿದ್ಧಪಡಿಸಿ ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. 2023-24 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮಾಹಿತಿಯನ್ನೊಳಗೊಂಡ ಪೋಸ್ಟರ್‌ಗಳನ್ನು ಸಿದ್ಧಪಡಿಸಲಾಗಿದೆ.
ಉಚಿತ ಬಸ್ ವ್ಯವಸ್ಥೆ
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ವಿಶೇಷ ಕೊಡುಗೆ ನೀಡುತ್ತಿದೆ. ಪರೀಕ್ಷಾ ಕೇಂದ್ರಕ್ಕೆ ತೆರಳಲು ಹಾಗೂ ಮನೆಗೆ ಹಿಂದಿರುಗಲು ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇದಕ್ಕೆ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿದರೆ ಸಾಕು. ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣದ ಅವಕಾಶ ನೀಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.