ಮಡಿಕೇರಿ: ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳಿನಿಂದ ರಾಗಿ ಮಾಲ್ಟ್ (Ragi Malt) ನೀಡಲು ಚಿಂತಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ.
ಪೊನ್ನಂಪೇಟೆಯಲ್ಲಿ ಸೋಮವಾರ ರಾಷ್ಟ್ರಮಟ್ಟದ 17 ವರ್ಷದೊಳಗಿನ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಈಗಾಗಲೇ ವಾರದಲ್ಲಿ ಒಂದು ದಿನ ಮೊಟ್ಟೆಯನ್ನು ವಿತರಿಸಲಾಗುತ್ತಿದ್ದು, ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸಲು ಮುಂದಾಗಲಾಗಿದೆ ಎಂದು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಹಲವು ಸಮಸ್ಯೆಗಳಿದ್ದು, ಅವುಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುತ್ತಿದೆ. 13 ಸಾವಿರ ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮ ವಹಿಸಲಾಗಿದೆ. 37 ಸಾವಿರ ಶಿಕ್ಷಕರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು ಅಗತ್ಯ ಕ್ರಮವಹಿಸಲಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.
ಪಠ್ಯ ಪುಸ್ತಕ ಹೊರೆಯಾಗದಂತೆ ಅಗತ್ಯ ಕ್ರಮ
ಸರ್ಕಾರಿ ಶಾಲೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕೈಗೊಂಡಿದೆ. ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕ ಮಾಡಲಾಗುತ್ತದೆ. ಜತೆಗೆ ಮಧ್ಯಾಹ್ನದ ಬಿಸಿ ಊಟ, ಮೊಟ್ಟೆ ಹಾಗೂ ಹಾಲು ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ತಲುಪಿಸಲಾಗುತ್ತಿದೆ. ಅಲ್ಲದೆ, ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹೊರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು.
ಶತಮಾನ ತುಂಬಿದ ಶಾಲೆಗಳ ಅಭಿವೃದ್ಧಿ
ಕೊಡಗು ಜಿಲ್ಲೆಯಲ್ಲಿ ಶತಮಾನ ಪೂರೈಸಿರುವ ಶಾಲೆಗಳು ಇದ್ದು, ಈ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಲಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದರು.
ಹಳೆಯ ಶಾಲೆಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ನೆಲದಲ್ಲಿ ಕೂರಬಾರದು. ಶಾಲೆಗಳಿಗೆ ಡೆಸ್ಕ್, ಬೆಂಚ್ ಇತರೆ ಸಾಮಗ್ರಿಗಳನ್ನು ವಿತರಿಸಲಾಗುವುದು ಎಂದು ಮಧು ಬಂಗಾರಪ್ಪ ಹೇಳಿದರು.
ಹೊಸ ತಾಲೂಕಿಗೆ ಶೀಘ್ರ ಬಿಇಒ
ಹೊಸ ತಾಲೂಕುಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇಮಕಾತಿ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳ ಕೊರತೆ ಇರುವುದರಿಂದ ನೇಮಕ ಮಾಡಿಲ್ಲ. ಮುಂದಿನ ದಿನಗಳಲ್ಲಿ ನೇಮಕಾತಿ ಮಾಡಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದರು.
ಇದನ್ನೂ ಓದಿ: Ram Mandir: ಬಿಜೆಪಿ-ಕಾಂಗ್ರೆಸ್ ಮಧ್ಯೆ ʼರಾಮʼ ಯುದ್ಧ; ರಾಮ ಭಕ್ತಿ ಪ್ರದರ್ಶಿಸಿದ ಕೈಪಡೆ!
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಎಂ.ಚಂದ್ರಕಾಂತ್, ತಹಸೀಲ್ದಾರ್ ಎಚ್.ಎನ್.ರಾಮಚಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್, ಡಾ.ಬಿ.ಸಿ.ದೊಡ್ಡೇಗೌಡ, ಎಸ್.ಭಾಗ್ಯಮ್ಮ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮಹದೇವಸ್ವಾಮಿ, ಕ್ರೀಡಾ ಸಂಚಾಲಕರಾದ ಡಾ.ಸದಾಶಿವಯ್ಯ ಎಸ್. ಪಲ್ಲೇದ್, ಶಿಕ್ಷಕರ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಇತರರು ಇದ್ದರು.