Site icon Vistara News

SSLC Preparatory Exam : ವಿದ್ಯಾರ್ಥಿಗಳಿಂದಲೇ ಪರೀಕ್ಷಾ ವೆಚ್ಚ ವಸೂಲಿ; ಗತಿಗೆಟ್ಟ ಸರಕಾರ ಎಂದು ಹೆಚ್‌ಡಿಕೆ ಕಿಡಿ

The cost of sslc preparatory exam is recovered from the students themselves HD Kumaraswamys oppositing

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ (SSLC Preparatory Exam) ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗತಿಗೆಟ್ಟ ಸರಕಾರ ಎಂದು ಕಟುವಾಗಿ ಟೀಕೆ ಮಾಡಿರುವ ಹೆಚ್‌ಡಿಕೆ, ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು. ಜತೆಗೆ ಪರೀಕ್ಷಾ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.

ಜನರಿಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್‌ ಸರಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ. ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ, ಈಗ ಎಸ್‌ಎಸ್‌ಎಲ್‌ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಕಿಡಿಕಾರಿದ್ದಾರೆ. ಸರಕಾರದ ಆದೇಶದ ಪ್ರತಿಯನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಅಕ್ರಮ ಸುಲಿಗೆಯಲ್ಲಿ ‘ಸಿದ್ದಹಸ್ತ’ವಾಗಿರುವ ಸರಕಾರ, ಈಗ ಕಾನೂನು ಬದ್ಧವಾಗಿಯೇ ಸುಲಿಗೆ ಮಾಡುತ್ತಿದೆ, ಅದೂ ಲಜ್ಜೆಗೆಟ್ಟು. ಇದೇ ಫೆಬ್ರವರಿ 26ರಿಂದ ಮಾರ್ಚ್ 3ರವರೆಗೂ ನಡೆಯಲಿರುವ 2023-24ನೇ ಸಾಲಿನ SSLC ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ನಾಚಿಕೆಗೆಟ್ಟ ಸರಕಾರ ಮಕ್ಕಳಿಂದಲೇ ವಸೂಲಿ ಮಾಡಲು ಹೊರಟಿದೆ ಎಂದು ಅವರು ದೂರಿದ್ದಾರೆ.

ಪ್ರಶ್ನೆಪತ್ರಿಕೆ ತಯಾರಿ, ಮುದ್ರಣ, ಸಾಗಣೆ ವೆಚ್ಚವನ್ನು ವಿದ್ಯಾರ್ಥಿಗಳ ಮೇಲೆಯೇ ಹೇರಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಆದೇಶಿಸಿದ್ದಾರೆ. ವೆಚ್ಚ ವಸೂಲಿ ಮಾಡುವಂತೆ ಎಲ್ಲಾ ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ಆದೇಶಿಸಿರುವುದು ಸರಕಾರ ಎಷ್ಟರ ಮಟ್ಟಿಗೆ ದಿವಾಳಿಯೆದ್ದು ಹೋಗಿದೆ ಎನ್ನುವುದಕ್ಕೆ ಉದಾಹರಣೆ ಎಂದು ಅವರು ಕಿಡಿಕಾರಿದ್ದಾರೆ.

SSLC Preparatory Exam 2024

ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರು ವೆಚ್ಚ ವಸೂಲಿ ಮಾಡಿ, ಆ ಮೊತ್ತವನ್ನು ಇಲಾಖೆ ಉಪ ನಿರ್ದೇಶಕರು (ಆಡಳಿತ), ಇವರ ಖಾತೆಗೆ ಜಮೆ ಮಾಡಬೇಕೆಂದು ಆದೇಶಿಸಲಾಗಿದೆ. ಗ್ಯಾರಂಟಿ ಕೊಟ್ಟು ಬಡವರ ಉದ್ಧಾರ ಮಾಡುತ್ತಿದ್ದೇವೆ ಎಂದು ಬೀಗುವ ಸರಕಾರಕ್ಕೆ, ಅದೇ ಬಡಮಕ್ಕಳಿಗೆ 50 ರೂ. ಖರ್ಚು ಮಾಡಲು ಗತಿ ಇಲ್ಲವೇ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಈಗಾಗಲೇ ಬರದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಸರಕಾರ ಬರೆಯ ಮೇಲೆ ಬರೆ ಎಳೆಯುತ್ತಿದೆ. ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷೆ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯ ಮಾಡಿದ್ದಾರೆ.

ಪೂರ್ವ ಸಿದ್ದತಾ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ

SSLC Preparatory Exam 2024

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version