Site icon Vistara News

Teacher Transfer : ಶಾಲೆ ಆರಂಭದ ದಿನವೇ ಶಿಕ್ಷಕರಿಗೆ ಸಿಹಿ ಸುದ್ದಿ! ಸರ್ಕಾರಿ ಶಿಕ್ಷಕರ ವರ್ಗಾವಣೆಗೆ ಸರ್ಕಾರದ ಅನುಮತಿ

government school teacher transfer

ಶಿಕ್ಷಕರು

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ತರಗತಿಗಳು ಆರಂಭವಾದ ದಿನವೇ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಿದೆ. ವಿವಿಧ ಕಾರಣಗಳಿಂದ ಸ್ಥಗಿತಗೊಂಡಿದ್ದ ರಾಜ್ಯ ಪ್ರಾಥಮಿಕ ಶಾಲಾ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ (Teacher Transfer) ಪ್ರಕ್ರಿಯೆ ಆರಂಭಿಸಲು ಸರ್ಕಾರ ಅನುಮತಿ ನೀಡಿದೆ.

ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್‌ ಹಾಗೂ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯನ್ನು ಮುಂದುವರಿಸಲು ಸರ್ಕಾರವು ಅನುಮತಿ ನೀಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಮಹಾಂತಯ್ಯ ಎಸ್‌. ಹೊಸಮರ ಆದೇಶದಲ್ಲಿ ತಿಳಿಸಿದ್ದಾರೆ.

ಈ ಹಿಂದಿನ ಸರ್ಕಾರ ವಿವಿಧ ಕಾರಣಗಳಿಂದ ಸ್ಥಗಿತಗೊಂಡಿದ್ದ ವರ್ಗಾವಣೆ ಪ್ರಕ್ರಿಯೆಯನ್ನು ಆರಂಭಿಸಲು ಚುನಾವಣೆಗಿಂತ ಒಂದು ವಾರ ಮೊದಲಷ್ಟೇ (ಮಾರ್ಚ್‌ 31 ರಂದು) ಅನುಮತಿ ನೀಡಿತ್ತು. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಈ ವರ್ಗಾವಣೆ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಇದನ್ನು ಮತ್ತೆ ಆರಂಭಿಸಬೇಕೆಂದು ಶಿಕ್ಷಕರು ಒತ್ತಾಯಿಸುತ್ತಿದ್ದರು. ನೂತನ ಸರ್ಕಾರ ಅಧಿಕಾರಕ್ಕೆ ಬಂದ 15 ದಿನಗಳ ಒಳಗೆ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ.

ಶಾಲಾ ಶಿಕ್ಷಣ ಇಲಾಖೆಯು ಸದ್ಯವೇ ವೇಳಾಪಟ್ಟಿಯನ್ನು ಪ್ರಕಟಿಸಿ ಶಿಕ್ಷಕರ ವರ್ಗಾವಣೆಯನ್ನು ಆರಂಭಿಸಲಿದೆ. ಇದಕ್ಕಾಗಿ ಇಲಾಖೆಯ ಅಧಿಕಾರಿಗಳು ಬುಧವಾರವೇ ಸಿದ್ಧತೆ ಆರಂಭಿಸಿದ್ದಾರೆ ಎಂದು ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯಗಳಡಿ ವರ್ಗಾವಣೆಗಾಗಿ 88,324 ಶಿಕ್ಷಕರು ಅರ್ಜಿ ಸಲ್ಲಿಸಿದ್ದಾರೆ. ತಾಂತ್ರಿಕ ಕಾರಣಗಳಿಂದಾಗಿ ಕಳೆದ ಡಿಸೆಂಬರ್‌ನಲ್ಲಿ ಆರಂಭವಾಗಿದ್ದ ಈ ವರ್ಗಾವಣೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು. ನಂತರ ಪ್ರಾರಂಭವಾದರೂ ಚುನಾವಣೆಯ ಕಾರಣದಿಂದ ಸ್ಥಗಿತಗೊಂಡಿತ್ತು. ಹೆಚ್ಚುವರಿ ಶಿಕ್ಷಕರ ನಿಯೋಜನೆ, ಸರ್ಕಾರಿ ಪ್ರಾಥಮಿ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರನ್ನು ಕೌನ್ಸಿಲಿಂಗ್‌ ಮುಖಾಂತರ ಮಾತ್ರ ವರ್ಗಾವಣೆ ಮಾಡಲಾಗುತ್ತದೆ. ಇದಕ್ಕೆ ಈಗಾಗಲೇ ಸಕ್ಷಮ ಪ್ರಾಧಿಕಾರ ಅನುಮೋದನೆ ಕೂಡ ನೀಡಿದೆ.

ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಶಿಕ್ಷಕರ ಸಂಘ

ಶಿಕ್ಷಕರ ವರ್ಗಾವಣೆಗೆ ಸರ್ಕಾರ ಅನುಮತಿ ನೀಡಿರುವುದಕ್ಕೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹರ್ಷ ವ್ಯಕ್ತಪಡಿಸಿದೆ. ಸಂಘದ ಪದಾಧಿಕಾರಿಗಳು ಮಂಗಳವಾರ ನೂತನ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ವರ್ಗಾವಣೆ ಪ್ರಕ್ರಿಯೆಗಳನ್ನು ಪ್ರಾರಂಭಿಸುವುದಾಗಿ ಸಚಿವರು ಸ್ಪಷ್ಟ ಭರವಸೆ ನೀಡಿದ್ದರು. ಅದರಂತೆಯೇ ಮಂಗಳವಾರ ರಾತ್ರಿಯೇ ಮುಖ್ಯಮಂತ್ರಿಯೊಂದಿಗೆ ಸಮಾಲೋಚಿಸಿ, ವರ್ಗಾವಣೆಗೆ ಅನುಮತಿ ನೀಡುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಬುಧವಾರ ಬೆಳಗ್ಗೆಯೇ ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಗೆ ಮಾಹಿತಿ ನೀಡಲಾಗಿದೆ.

ಸರ್ಕಾರವು ನಮ್ಮ ಮನವಿಗೆ ಸ್ಪಂಧಿಸಿದೆ. 88 ಸಾವಿರ ಶಿಕ್ಷಕರ ನಿರೀಕ್ಷೆಯನ್ನು ಈಡೇಡಿರಿಸಿದೆ. ಅಧಿಕಾರಕ್ಕೆ ಬಂದು ಹದಿನೈದು ದಿನಗಳಾಗುವುದೊರಳಗೆ ಈ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಇಲಾಖೆಯ ಎಲ್ಲ ಹಿರಿಯ ಅಧಿಕಾರಿಗಳನ್ನು ಕೃತಜ್ಞತೆ ಸಲ್ಲಿಸುವುದಾಗಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ತಿಳಿಸಿದ್ದಾರೆ.

ಸಚಿವ ಮಧು ಬಂಗಾರಪ್ಪ ಅವರನ್ನು ಅಭಿನಂದಿಸುತ್ತಿರುವ ಶಿಕ್ಷಕರ ಸಂಘದ ಪದಾಧಿಕಾರಿಗಳು.

ನೂತನ ಮುಖ್ಯಮಂತ್ರಿಯನ್ನು ಅಭಿನಂದಿಸಲು ಭೇಟಿಯಾದ ಸಂದರ್ಭದಲ್ಲಿ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳು ವರ್ಗಾವಣೆಯನ್ನು ಆರಂಭಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ʻʻಶಿಕ್ಷಕರ ಸಂಘದ ಮನವಿಯಂತೆ ವರ್ಗಾವಣೆಯನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಸರ್ಕಾರ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ಹೇಳಿದೆʼʼ ಎಂದು ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ʻವಿಸ್ತಾರ ನ್ಯೂಸ್‌ʼಗೆ ತಿಳಿಸಿದ್ದಾರೆ.

ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ.

ನೂತನ ಶೈಕ್ಷಣಿಕ ವರ್ಷ ಈಗಾಗಲೇ ಆರಂಭವಾಗಿದ್ದು, ಹೀಗಾಗಿ ಕೂಡಲೇ ವರ್ಗಾವಣೆ ಪ್ರಕ್ರಿಯೆಯನ್ನು ಇಲಾಖೆಯು ಆರಂಭಿಸಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ಆದಷ್ಟು ಬೇಗ ಈ ಪ್ರಕ್ರಿಯೆಯನ್ನು ಮುಗಿಸಿದರೆ ವಿದ್ಯಾರ್ಥಿಗಳಿಗೆ ತೊಂದರೆಯಾಗುವುದು ತಪ್ಪುತ್ತದೆ ಎಂದು ಶಿಕ್ಷಕರು ಅಭಿಪ್ರಾಯ ಪಡುತ್ತಿದ್ದಾರೆ.

ಇದನ್ನೂ ಓದಿ : Teacher Transfer : ಶಿಕ್ಷಕರ ವರ್ಗಾವಣೆ ಮುಂದೂಡಿದ ಚುನಾವಣಾ ಆಯೋಗ; ಫಲಿತಾಂಶದ ಬಳಿಕವಷ್ಟೇ ಚಾಲನೆ

Exit mobile version