Site icon Vistara News

Teachers day : ಮಕ್ಕಳಲ್ಲಿ ಮೌಢ್ಯ ತುಂಬಬೇಡಿ, ವಿಶ್ವಮಾನವರಾಗಿ ಮಾಡಿ; ಶಿಕ್ಷಕರ ದಿನದಂದು ಸಿದ್ದರಾಮಯ್ಯ ಮನವಿ

Teachers day

ಬೆಂಗಳೂರು: ಮಕ್ಕಳಲ್ಲಿ ಮೌಢ್ಯ ತುಂಬಬೇಡಿ, ವಿಚಾರವಂತಿಕೆ ತುಂಬಿ. ಸಮಾಜದ, ದೇಶದ ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ಇರುವ ಶಿಕ್ಷಕರು ಮಕ್ಕಳನ್ನು ವಿಶ್ವ ಮಾನವರನ್ನಾಗಿ (Universal human being) ರೂಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಶಿಕ್ಷಕರಿಗೆ ಕರೆ ನೀಡಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನದ ಅಂಗವಾಗಿ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯನ್ನು (Teachers day) ಉದ್ಘಾಟಿಸಿ 43 ಮಂದಿ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಅತ್ಯುತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿ ಪಡೆದ ಶಿಕ್ಷಕರ ಜತೆ ಸಿಎಂ ಸಿದ್ದರಾಮಯ್ಯ ಮತ್ತು ಇತರ ನಾಯಕರು

ರೈತರು, ಸೈನಿಕರು, ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳು. ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ‌ ಶಿಕ್ಷಣದ ಗುರಿ ಎಂದು ಸಿದ್ದರಾಮಯ್ಯ ಹೇಳಿದರು.

ಡಿಗ್ರಿ ಪಡೆದು, ಡಾಕ್ಟರೇಟ್ ಪಡೆದರೂ ಅವರಲ್ಲಿ ವೈಜ್ಞಾನಿಕ ಮನೋಭಾವ, ವೈಚಾರಿಕತೆ ಬೆಳೆಯದಿದ್ದರೆ, ತಲೆಯೊಳಗೆ ಮೌಢ್ಯ ತುಂಬಿಕೊಂಡಿದ್ದರೆ ಅವರನ್ನು ಸುಶಿಕ್ಷಿತರು ಎಂದು ಕರೆಯಲು ಸಾಧ್ಯವಿಲ್ಲ. ಡಿಗ್ರಿ ಪಡೆದವರೇ ಹೆಚ್ಚೆಚ್ವು ಜಾತಿವಾದಿಗಳಾದರೆ ಈ ಚಂದಕ್ಕೆ ಶಿಕ್ಷಣ ಏಕೆ ಪಡೆಯಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಸಾಧಕರು

ಶೂದ್ರರು ಮತ್ತು ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ಹೊರಗೆ ಇಡಲಾಗಿತ್ತು. ನಮ್ಮ ಸಂವಿಧಾನ ಎಲ್ಲರಿಗೂ ಶಿಕ್ಷಣದ ಅವಕಾಶವನ್ನು ಒದಗಿಸಿತು. ಈಗ ಈ ಸಂವಿಧಾನಕ್ಕೆ ಅಪಾಯ ಬಂದೊದಗಿದೆ. ಆದ್ದರಿಂದ ಸಂವಿಧಾನವನ್ನು ರಕ್ಷಿಸಿಕೊಳ್ಳುವ ಹೊಣೆ ನಮ್ಮೆಲ್ಲರ ಮೇಲಿದೆ.

ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

ಶಿಕ್ಷಣದಿಂದ ವಂಚಿತರಾದವರು ಅಸಮಾನತೆಗೆ ಬಲಿ

ಸ್ವಾತಂತ್ರ್ಯ ಬಂದು 76 ವರ್ಷವಾದರೂ ಶೇಕಡಾ 100 ಸಾಕ್ಷರತೆ ಸಾಧ್ಯವಾಗಿಲ್ಲ. ಶಿಕ್ಷಣದಿಂದ ವಂಚಿತರಾದವರು ಅಸಮಾನತೆಗೆ ಬಲಿಯಾಗುತ್ತಾರೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸು ನನಸಾಗಬೇಕಾದರೆ ಎಲ್ಲರಿಗೂ ವೈಜ್ಞಾನಿಕ, ವೈಚಾರಿಕ ಶಿಕ್ಷಣ ದೊರೆತು ದೇಶ ಪ್ರಗತಿ ಪಥದಲ್ಲಿ ಮುನ್ನಡೆಯಬೇಕು ಎಂದರು.

ಶಿಕ್ಷಕರ ಗುಣಮಟ್ಟವೂ ಹೆಚ್ಚಬೇಕು ಎಂದ ಸಿದ್ದರಾಮಯ್ಯ

ಶಿಕ್ಷಕ ವೃತ್ತಿಗೆ ಬರುವಾಗ ಎಲ್ಲಾ ಶಿಕ್ಷಕರಿಗೂ ಒಂದೇ ರೀತಿಯ ತರಬೇತಿ ಇರುತ್ತದೆ. ಆದರೆ ಬೇರೆ ಬೇರೆ ಜಿಲ್ಲೆಗಳ ಫಲಿತಾಂಶದ ಪ್ರಮಾಣ, ಶೈಕ್ಷಣಿಕ ಗುಣಮಟ್ಟ ಭಿನ್ನವಾಗಿರುವುದು ಏಕೆ ಎನ್ನುವುದನ್ನು ಪ್ರತಿಯೊಬ್ಬ ಶಿಕ್ಷಕರೂ ತಮ್ಮನ್ನು ತಾವು ಕೇಳಿಕಂಡು ದಿನದಿಂದ ದಿನಕ್ಕೆ ಉನ್ನತೀಕರಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಶಿಕ್ಷಕರ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಶಾಸಕ ರಿಜ್ವಾನ್‌ ಅರ್ಷದ್‌, ಸಚಿವ ಮಧು ಬಂಗಾರಪ್ಪ, ಸಿಎಂ ಸಿದ್ದರಾಮಯ್ಯ, ಸಚಿವ ಡಾ. ಎಂ.ಸಿ. ಸುಧಾಕರ್

ನಮ್ಮ ಸರ್ಕಾರ ಬಂದ ಬಳಿಕ 10 ಸಾವಿರ ಶಾಲೆಗಳಿಗೆ ಶಿಕ್ಷಕರನ್ನು ನೇಮಿಸಿದ್ದೂ ಸೇರಿ ಹಲವು ಕಾರ್ಯಕ್ರಮ ಮಾಡಿದೆವು. ಪರಿಶಿಷ್ಟ ಜಾತಿ, ವರ್ಗದ ಮಕ್ಕಳಿಗೆ ನಾವು ನಮ್ಮ ಸರ್ಕಾರದ ಅವಧಿಯಲ್ಲಿ ಲ್ಯಾಪ್ ಟಾಪ್ ನೀಡುವ ಕಾರ್ಯಕ್ರಮ ಆರಂಭಿಸಿದೆವು. ನಂತರ ಬಂದ ಸರ್ಕಾರ ಇದನ್ನು ಸ್ಥಗಿತಗೊಳಿಸಿತ್ತು. ಈಗ ಮತ್ತೆ ನಾವು ಅಧಿಕಾರಕ್ಕೆ ಬಂದು ಲ್ಯಾಪ್ ಟಾಪ್ ಕೊಡುವುದನ್ನು ಮುಂದುವರೆಸಿದ್ದೇವೆ ಎಂದರು.

ಇದನ್ನೂ ಓದಿ : SSLC PUC Exam : ಎಸ್‌ಎಸ್‌ಎಲ್‌ಸಿ-ಪಿಯುಸಿ ವಿದ್ಯಾರ್ಥಿಗಳಿಗೆ ಇನ್ನು 3 ಪರೀಕ್ಷೆ! ಗುಡ್‌ನ್ಯೂಸ್‌ ಕೊಟ್ಟ ಸರ್ಕಾರ

ಡಾ. ಸರ್ವೇಪಲ್ಲಿ ರಾಧಾಕೃಷ್ಣನ್‌, ಜ್ಯೋತಿಬಾ ಫುಲೆ ನೆನಪು

ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಲ್ಲಿದೆ

ಬಡವರ ಮಕ್ಕಳಿಗಾಗಿ ಕ್ಷೀರ ಭಾಗ್ಯ, ವಾರಕ್ಕೆರಡು ಮೊಟ್ಟೆ

ಗ್ರಾಮೀಣ ಭಾಗದಲ್ಲಿ ಸರ್ಕಾರಿ ಶಾಲೆಗಳಿಗೆ ಶೇ. 80ರಷ್ಟು ಮಕ್ಕಳು ತಳಸಮುದಾಯದಿಂದ ಬರುತ್ತಾರೆ. ಅವರ ಓದಿಗೆ ಅನುಕೂಲ ಆಗಲಿ ಎನ್ನುವ ಕಾರಣದಿಂದ ಕ್ಷೀರಭಾಗ್ಯ ಯೋಜನೆ ಜಾರಿ ಮಾಡಿದೆವು. ವಾರಕ್ಕೆರಡು ಮೊಟ್ಟೆ ಕೊಡುವುದನ್ನು sslc ವರೆಗೂ ಮುಂದುವರೆಸಿದೆವು. ಶೂ ಭಾಗ್ಯ ಕಲ್ಪಿಸಿದೆವು ಎಂದು ಮುಖ್ಯಮಂತ್ರಿ ನುಡಿದರು.

ಶಾಸಕ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಎಸ್.ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಹಲವು ಹಾಲಿ, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version