Site icon Vistara News

Ramadan festival: ರಂಜಾನ್ ಹಬ್ಬದ ಪ್ರಯುಕ್ತ ಉರ್ದು ಶಾಲೆಗಳ ವೇಳಾಪಟ್ಟಿ ಬದಲು; ಇಲ್ಲಿದೆ ಟೈಂ ಟೇಬಲ್

Urdu schools change schedule due to Ramadan festival

ಬೆಂಗಳೂರು: ರಂಜಾನ್‌ ಹಬ್ಬ (Ramadan festival) ಬಂದಿರುವುದರಿಂದ ಈ ಮಾಸದಲ್ಲಿ ಉರ್ದು ಶಾಲೆಗಳ ವೇಳಾಪಟ್ಟಿಯಲ್ಲಿ ಬದಲಾವಣೆ (Change in schedule of Urdu schools) ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಹೀಗಾಗಿ ಪಾಠದ ಅವಧಿಯಲ್ಲಿ ವ್ಯತ್ಯಯವಾಗಲಿದ್ದು, ಇದನ್ನು ಸರ್ಕಾರಿ ರಜಾ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಈ ಸಂಬಂಧ ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯವು ಸುತ್ತೋಲೆ ಹೊರಡಿಸಿದ್ದು, ಉರ್ದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಾಲಾ ಅವಧಿ ಬದಲಾವಣೆ ಮಾಡಿದೆ. ಇದರ ಅನುಸಾರ ಈ ಆದೇಶವು ರಂಜಾನ್ ತಿಂಗಳಿಗೆ ಮಾತ್ರ ಅನ್ವಯ ಆಗಲಿದೆ. ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಹಲವರು ಸಮಯ ಬದಲಾವಣೆ ಕುರಿತು ಮಾಡಿರುವ ಮನವಿ ಪತ್ರಗಳನ್ನು ಉಲ್ಲೇಖ ಮಾಡಲಾಗಿದೆ.

ಸುತ್ತೋಲೆಯಲ್ಲೇನಿದೆ?

ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆ ನಿರ್ವಹಣೆಗೆ ಸಲಹಾತ್ಮಕ ವೇಳಾಪಟ್ಟಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4.20ರವರೆಗೆ ಶಾಲಾ ಅವಧಿ ನಿಗದಿಪಡಿಸಲಾಗಿರುತ್ತದೆ.

ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢಶಾಲೆಗಳನ್ನು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 12.45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ 31/10/2002ರಲ್ಲಿ ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್ ಆರ್ಡರ್ ಅನ್ನು ಯಥಾವತ್ತು ಹೊರಡಿಸಲು ಸ್ವೀಕೃತವಾದ ಮನವಿಗಳನ್ನು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗಿರುತ್ತದೆ.

ಈ ಹಿನ್ನಲೆಯಲ್ಲಿ ಈ ಬಗ್ಗೆ ಕಚೇರಿಗೆ ಸಲ್ಲಿಸಲಾಗಿರುವ ಮನವಿಗಳನ್ನು ಪರಿಶೀಲಿಸಿ, ಈ ಕೆಳಗಿನಂತೆ ಆದೇಶಿಸಿದೆ. 2023-24ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳು ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ದಿನಾಂಕ 10/04/2024ರವರೆಗೆ ಮಾತ್ರ ಶಾಲಾ ಅವಧಿಯ ವೇಳಾಪಟ್ಟಿಯ ಬದಲಾವಣೆಯ ವಿವರಗಳು ಎಂದು ಮಾಹಿತಿ ನೀಡಲಾಗಿದೆ.

Urdu schools change schedule due to Ramadan festival and circular

ಹೀಗಿರಲಿದೆ ಟೈಂ ಟೇಬಲ್

ಈ ವ್ಯವಸ್ಥೆಯಿಂದ ಶಾಲೆಗಳ ಕೆಲಸದ ಅವಧಿಯಲ್ಲಿ ಕಡಿಮೆ ಆಗುವ ಅವಧಿಯನ್ನು ಇತರೆ ರಜಾ ದಿನಗಳಲ್ಲಿ ಕಾರ್ಯ ನಿರ್ವಹಿಸುವ ಮೂಲಕ ಸರಿದೂಗಿಸಿಕೊಳ್ಳತಕ್ಕದ್ದು. ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ರಂಜಾನ್ ಮಾಹೆಯಲ್ಲಿ ಉಪವಾಸ ವ್ರತವನ್ನು ಕೈಗೊಳ್ಳುವುದರಿಂದ ಅವರುಗಳಿಗೆ ರಂಜಾನ್ ತಿಂಗಳಿನಲ್ಲಿ ಪ್ರತಿದಿನ ಸಂಜೆ ಅರ್ಧ ಗಂಟೆ ಮುಂಚಿತವಾಗಿ ತೆರಳಲು ಅನುಮತಿಸಬಹುದು.

2023-24ನೇ ಸಾಲಿಗೆ ನಿಗದಿಪಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕೆ.ಎಸ್.ಕ್ಯೂ.ಎ.ಎ.ಸಿ ವತಿಯಿಂದ ನಡೆಸಲಾಗುತ್ತಿರುವ ಸಂಕಲನಾತ್ಮಕ ಮೌಲ್ಯಾಂಕನ (SA-2) ವೇಳಾಪಟ್ಟಿಯಂತೆ 5ನೇ, 8ನೇ ಹಾಗೂ 9ನೇ ತರಗತಿಯ ಪರೀಕ್ಷಾ ಕಾರ್ಯ ನಡೆಸುವಂತೆ ಕ್ರಮವಹಿಸುವುದು.

ಇದನ್ನೂ ಓದಿ: CET Exam: ಸಿಇಟಿ ಪರೀಕ್ಷೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್;‌ ಕೊನೇ ಅವಕಾಶ ಕೊಟ್ಟ KEA!

ಯಾರಿಗೆ ಈ ಆದೇಶ ಅನ್ವಯ ಆಗಲ್ಲ

2023-24ನೇ ಸಾಲಿಗೆ ನಿಗದಿಪಡಿಸಿರುವ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಕರ್ತವ್ಯ ನಿರತ ಉರ್ದು ಮಾಧ್ಯಮದ ಶಿಕ್ಷಕರಿಗೆ ಈ ಆದೇಶವು ಅನ್ವಯಿಸುವುದಿಲ್ಲ ಎಂದು ಸುತ್ತೋಲೆ ಸ್ಪಷ್ಟಪಡಿಸಿದೆ.

Exit mobile version