Site icon Vistara News

Grama Sahayaka : Good News; ಗ್ರಾಮ ಸಹಾಯಕರ ವೇತನ 2000 ರೂ. ಹೆಚ್ಚಳ

Grama sahayaka Salary hike

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖಾ ಗ್ರಾಮ ಸಹಾಯಕರ (Grama Sahayaka) ಸಂಘದ ವತಿಯಿಂದ ಗ್ರಾಮ ಸಹಾಯಕರ ಹಲವು ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆಗಳು ನಡೆಯುತ್ತಿರುವ ನಡುವೆಯೇ ರಾಜ್ಯ ಸರ್ಕಾರ (Karnataka Government) ಅವರ ವೇತನವನ್ನು ಎರಡು ಸಾವಿರ ರೂ. ಹೆಚ್ಚಳ ಮಾಡಿದೆ (Salary Hike). ಆದರೆ, ಅವರ ಪ್ರಮುಖ ಬೇಡಿಕೆಯಾದ ತಮ್ಮನ್ನು ಡಿ ದರ್ಜೆ ನೌಕರರೆಂದು (D Group Employees) ಪರಿಗಣಿಸಬೇಕೆಂಬ ಬೇಡಿಕೆಯನ್ನು ಸರ್ಕಾರ ಸದ್ಯಕ್ಕೆ ಪರಿಗಣಿಸಲಾಗದು ಎಂದಿದೆ.

ಕಂದಾಯ ಇಲಾಖೆಯಲ್ಲಿ 40 ವರ್ಷಗಳಿಂದ ಕೆಲಸ ಮಾಡುತ್ತಿರುವ ಗ್ರಾಮ ಸಹಾಯಕರ ಹುದ್ದೆಯನ್ನು ಡಿ ದರ್ಜೆ ಎಂದು ಪರಿಗಣಿಸಬೇಕು ಎಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ (Bangalore Freedom Park) ಪ್ರತಿಭಟನೆ ನಡೆಯುತ್ತಿದೆ. ರಾಜ್ಯದ ನಾನಾ ಭಾಗಗಳಲ್ಲಿ ಕಳೆದ ಕೆಲವು ಸಮಯದಿಂದ ಪ್ರತಿಭಟನೆ ನಡೆಯುತ್ತಿದೆ.

ರಾಜ್ಯ ಸರ್ಕಾರದ ವೇತನ ಹೆಚ್ಚಳ ಆದೇಶದಲ್ಲಿ ಏನಿದೆ?

  1. ಗ್ರಾಮ ಸಹಾಯಕರಿಗೆ ಗೌರವಧನ ಹೆಚ್ಚಳ, ಸೇವಾ ಭದ್ರತೆ ಹಾಗೂ ‘ಡಿ ದರ್ಜೆ ನೌಕರರೆಂದು ಪರಿಗಣಿಸುವ ಸಂಬಂಧ ಆಡಳಿತ ಇಲಾಖೆಯು ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ.
  2. ಕಂದಾಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 10,450 ಗ್ರಾಮ ಸಹಾಯಕರ ಹುದ್ದೆಗಳನ್ನು ಮಿತವೇತನದ ಆಧಾರದ ಮೇಲೆ ತಾತ್ಕಾಲಿಕವಾಗಿ ಮಂಜೂರು ಮಾಡಲಾಗಿದೆ.
  3. ಕಂದಾಯ ಇಲಾಖೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ 9903 ಗ್ರಾಮ ಸಹಾಯಕರ ಮಿತವೇತನವನ್ನು ದಿನಾಂಕ:1.4.2024 ರಿಂದ ಅನ್ವಯವಾಗುವಂತೆ ಮಾಸಿಕ ರೂ.13,000/- ಗಳಿಂದ ರೂ.15,000/- ಗಳಿಗೆ ಪರಿಷ್ಕರಿಸಲು ಆರ್ಥಿಕ ಇಲಾಖೆಯು ಸಹಮತಿ ನೀಡಿದೆ.
  4. ಮುಂದುವರೆದು, ಗ್ರಾಮ ಸಹಾಯಕರಿಗೆ ಸೇವಾ ನಿಯಮಾವಳಿಯನ್ನು ರೂಪಿಸಿ ಸೇವಾ ಭದ್ರತೆಯನ್ನು ನೀಡುವ ಬಗ್ಗೆ ಇಲಾಖೆಯ ಹಂತದಲ್ಲಿ ಪರಿಶೀಲಿಸಿ, ಇದೇ ರೀತಿ ಗೌರವಧನ (ಸಂಚಿತ ವೇತನ) ಪಡೆಯುತ್ತಿರುವ ನೌಕರರುಗಳಿಗೆ ಇತರೆ ಇಲಾಖೆಗಳಲ್ಲಿ ಸೇವಾ ಭದ್ರತೆಗಾಗಿ ಯಾವ ರೀತಿ ನಿಯಮಾವಳಿ ರೂಪಿಸಿದ್ದಾರೆ ಎಂಬುದನ್ನು ಪರಿಶೀಲಿಸಿ ನಿರ್ದಿಷ್ಟ ಪ್ರಸ್ತಾವನೆಯನ್ನು ಸಲ್ಲಿಸುವಂತೆ ತಿಳಿಸಿದೆ.
  5. ಗ್ರಾಮ ಸಹಾಯಕರನ್ನು ಡಿ ದರ್ಜೆ ನೌಕರರೆಂದು ಪರಿಗಣಿಸುವ ಪ್ರಸ್ತಾವನೆಯನ್ನು ಸದ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ಪರಿಗಣಿಸಲು ಸಾಧ್ಯವಿಲ್ಲವೆಂದು ತಿಳಿಸಿದೆ.

ಇದನ್ನೂ ಓದಿ : Job News: ಶೀಘ್ರ 1 ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕ; ವೇತನದಲ್ಲೂ ಹೆಚ್ಚಳ!

ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಅಧಿಸೂಚನೆ

ಈ ನಡುವೆ ಕಂದಾಯ ಇಲಾಖೆಯ ಕೆಲಸಗಳಿಗೆ ಮತ್ತಷ್ಟು ವೇಗ ನೀಡುವ ಹಾಗೂ ಜನರಿಗೆ ಸರಳ-ಸುಲಭ ಆಡಳಿತ ನೀಡುವ ನಿಟ್ಟಿನಲ್ಲಿ 1000 ಗ್ರಾಮ ಲೆಕ್ಕಾಧಿಕಾರಿಗಳನ್ನು ಶೀಘ್ರ ನೇಮಕ ಮಾಡಲಾಗುವುದು ಎಂದು ಈ ಹಿಂದೆ ಬೆಳಗಾವಿಯ ಚಳಿಗಾಲದ ಅಧಿವೇಶನ ಕಂದಾಯ ಸಚಿವ ಕೃಷ್ಣ ಭೈರೇಗೌಡರು ಹೇಳಿದ್ದರು. ಅದರಂತೆ ಕಳೆದ ವಾರ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ನ್ಯಾಯ ಸಮ್ಮತವಾಗಿ ಪರೀಕ್ಷೆ ನಡೆಸಿ ಅರ್ಹರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೀಡಲಾಗಿದೆ.

Exit mobile version