ಬೆಂಗಳೂರು: ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದು ಪಡಿಸಿ, ಹಳೆಯ ಪಿಂಚಣಿ ಯೋಜನೆ (ಓಪಿಎಸ್) ಜಾರಿಗೆ ತರುವ ಕುರಿತು ಶುಕ್ರವಾರ ಮಂಡನೆಯಾದ ರಾಜ್ಯ ಬಜೆಟ್‌ನಲ್ಲಿ (Karnataka Budget 2023) ಪ್ರಸ್ತಾಪಿಸದೇ ಇರುವುದಕ್ಕೆ ನಿರಾಸೆ ವ್ಯಕ್ತಪಡಿಸಿರುವ ಎನ್‌ಪಿಎಸ್ ಸರ್ಕಾರಿ ನೌಕರರು, ʻʻವೋಟ್ ಫಾರ್ ಓಪಿಎಸ್ʼʼ ಅಭಿಯಾನವನ್ನು ಬಿರುಸುಗೊಳಿಸುವುದಾಗಿ ಪ್ರಕಟಿಸಿದ್ದಾರೆ.
ರಾಜ್ಯ ಬಜೆಟ್‌ನಲ್ಲಿ ಈ ಬಗ್ಗೆ ಪ್ರಸ್ತಾಪವನ್ನು ಮಾಡದೇ ಇರುವುದು ಎಲ್ಲ ಸರ್ಕಾರಿ ನೌಕರರಿಗೂ ಅದರಲ್ಲಿಯೂ 2,98,000 ಎನ್‌ಪಿಎಸ್ ನೌಕರರಿಗೆ ಹಾಗೂ ನಿಗಮ/ಮಂಡಳಿ, ಅರೆ ಸರ್ಕಾರಿ ಮತ್ತು ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಸರ್ಕಾರ ತಮ್ಮನ್ನು ನಿರ್ಲಕ್ಷಿಸುತ್ತಿದೆ ಎಂಬ ಹತಾಶೆಯನ್ನುಂಟುಮಾಡಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರ ಸಂಘದ ರಾಜ್ಯಧ್ಯಕ್ಷ ಶಾಂತಾರಾಮ ಹೇಳಿದ್ದಾರೆ.
ಹಳೆಯ ಪಿಂಚಣಿ ಯೋಜನೆ(ಒಪಿಎಸ್) ಜಾರಿಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರ ಸಂಘದ ನೇತೃತ್ವದಲ್ಲಿ ಕಳೆದ ಡಿಸೆಂಬರ್‌ನಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಸಿದ ಸಂದರ್ಭದಲ್ಲಿ ಎನ್‌ಪಿಎಸ್ ರದ್ದುಪಡಿಸುವ ವಿಷಯ ಚರ್ಚಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು ಎಂದು ಸರ್ಕಾರ ಭರವಸೆ ನೀಡಿತ್ತು. ಅಲ್ಲದೆ ಬಜೆಟ್‌ನಲ್ಲಿ ಈ ಬಗ್ಗೆ ಪ್ರಸ್ತಾಪಿಸುವ ಭರವಸೆಯನ್ನೂ ನೀಡಲಾಗಿತ್ತು. ಆದರೆ ಸರ್ಕಾರ ಮಾತಿಗೆ ತಪ್ಪಿದೆ ಎಂದು ಶಾಂತಾರಾಮ ಹೇಳಿದ್ದಾರೆ.
ಬಜೆಟ್ ಅಧಿವೇಶನದಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು. ಆದರೆ ಈ ಸರ್ಕಾರ ಓಪಿಎಸ್ ಜಾರಿಗೆ ತರುವುದಿರಲಿ, ಈ ಕುರಿತು ಚರ್ಚೆಗೂ ಮುಂದಾಗುತ್ತಿಲ್ಲ. ಹೀಗಾಗಿ ಈ ವಿಷಯವನ್ನು ಮತದಾರರ ಮುಂದೆ ತೆಗೆದುಕೊಂಡು ಹೋಗಲು ಸಂಘವು ನಿರ್ಧರಿಸಿದ್ದು, ʻʻವೋಟ್ ಫಾರ್ ಓಪಿಎಸ್ʼʼ ಅಭಿಯಾನವನ್ನು ತೀವ್ರಗೊಳಿಸುವಂತೆ ಎಲ್ಲ ರಾಜ್ಯ ಸರ್ಕಾರಿ ನೌಕರರಲ್ಲಿ ಮನವಿ ಮಾಡಿಕೊಳ್ಳುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಕರಿಗೆ ನೋವಾಗಿದೆ ಎಂದ ಶಿಕ್ಷಕರ ಸಂಘ
ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಕುರಿತು ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪವಿಲ್ಲದೇ ಇರುವುದು ರಾಜ್ಯದ ಸಮಸ್ತ ಶಿಕ್ಷಕರಿಗೆ ತೀವ್ರ ನೋವನ್ನುಂಟು ಮಾಡಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹೇಳಿದೆ.
ಬಜೆಟ್‌ನಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಯ ಬಗ್ಗೆಯೂ ಪ್ರಸ್ತಾಪವಾಗಿಲ್ಲ ಎಂದು ದೂರಿರುವ ಸಂಘವು ರಾಜ್ಯದ ಸರ್ಕಾರಿ ನೌಕರರಿಗೆ ಹಾಗೂ ಶಿಕ್ಷಕರಿಗೆ ಶೇ.30 ರಷ್ಟು ಮಧ್ಯಂತರ ಪರಿಹಾರವನ್ನು ಹಾಗೂ ಶಿಕ್ಷಕರಿಗೆ ವಿಶೇಷ ವೇತನವನ್ನು ಘೋಷಣೆ ಮಾಡಬೇಕೆಂದು ಒತ್ತಾಯಿಸಿದೆ.
ರಾಜ್ಯದ 43,376 ಸರ್ಕಾರಿ ಶಾಲೆಗಳ ನಿರ್ವಹಣೆಗಾಗಿ ಬಜೆಟ್‌ನಲ್ಲಿ 150 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿತ್ತು. ಅಲ್ಲದೆ 47ಕ್ಕೂ ಹೆಚ್ಚು ಹೊಸ ತಾಲೂಕುಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳನ್ನು ಮಂಜೂರು ಮಾಡುವಂತೆ ಒತ್ತಾಯಿಸಲಾಗಿತ್ತು. ಈ ಬಗ್ಗೆಯೂ ಬಜೆಟ್‌ನಲ್ಲಿ ಪ್ರಸ್ತಾಪಿಸಿಲ್ಲ. ಇದರಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹಿನ್ನಡೆಯಾಗಲಿದೆ ಎಂದು ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಗಲಿ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
ಇದನ್ನೂ ಓದಿ : NPS News : ಹಳೆ ಪಿಂಚಣಿ ಯೋಜನೆ ಜಾರಿಗೆ ತರುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದ ಸಿಎಂ ಬಸವರಾಜ ಬೊಮ್ಮಾಯಿ