ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟವು ಮೇ 30 ರಿಂದ ಬೆಂಗಳೂರಿನಲ್ಲಿ ನಡೆಯಲಿದೆ. ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಈ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.
ಮೇ 30, 31 ಹಾಗೂ ಜೂನ್ 1ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಈ ಕ್ರೀಡಾಕೂಟ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಈ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಮೇ 30ರಂದು ಸಂಜೆ 4.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸುತ್ತಿದ್ದು, ಸಚಿವ ಸಂಪುಟದ ಹಲವು ಸಚಿವರುಗಳು, ಗಣ್ಯರು ಭಾಗವಹಿಸಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು ಹತ್ತು ಸಾವಿರಕ್ಕೂ ಹೆಚ್ಚಿನ ನೌಕರ ಕ್ರೀಡಾಪಟುಗಳು ಭಾಗವಹಿಸುತ್ತಿರುವುದು ವಿಶೇಷ ಎಂದವರು ತಿಳಿಸಿದ್ದಾರೆ.
ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಉತ್ತಮ ಗುಣಮಟ್ಟದ ಟ್ರ್ಯಾಕ್ ಸೂಟ್ ಮತ್ತು ಕ್ಯಾಪ್ ವಿತರಿಸಲಾಗುವುದು. ಎಲ್ಲಾ ಕ್ರೀಡಾಪಟುಗಳಿಗೂ ಮೂರು ದಿನಗಳ ಕಾಲ ಶುಚಿ-ರುಚಿಯಾದ ಊಟೋಪಹಾರವನ್ನು ಕಲ್ಪಿಸಲಾಗುವುದು. ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ವಿಶೇಷ ನೆನಪಿನ ಕಾಣಿಕೆ ನೀಡಿ ಗೌರವಿಸಲಾಗುವುದು. ಅಖಿಲ ಭಾರತ ನಾಗರಿಕ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳನ್ನು ಅಭಿನಂದಿಸಲಾಗುವುದು ಎಂದವರು ತಿಳಿಸಿದ್ದಾರೆ.
ಇದನ್ನೂ ಓದಿ| ಥಾಮಸ್ ಕಪ್| ಭಾರತ ತಂಡದ ಐತಿಹಾಸಿಕ ಗೆಲುವು
ಈ ಕ್ರೀಡಾಕೂಟ ನಡೆಯುವ ಆರಂಭದ ದಿನ ಮೇ 30ರಂದು ಸಂಜೆ 6 ಗಂಟೆಗೆ ಖ್ಯಾತ ಗಾಯಕ ವಿಜಯ್ ಪ್ರಕಾಶ್‍ರವರಿಂದ ಸಂಗೀತ ರಸಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ. ಮೇ 31ರಂದು ಸಂಜೆ 6 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಾಯೋಜಿತ ಜಾನಪದ ಕಲಾ ತಂಡಗಳಿಂದ ಸಾಂಸ್ಕೃತಿಕ ಸಂಗೀತ ರಸಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಕೇಂದ್ರ ಸಂಘದ ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಂಡಿರುವ ಎಲ್ಲಾ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿಕೊಡುವಂತೆ ಸಿ.ಎಸ್.ಷಡಾಕ್ಷರಿ ಮನವಿ ಮಾಡಿದ್ದಾರೆ