ಬೆಂಗಳೂರು: ನಿಮಗೆ ಏನಾದರೂ ಸರ್ಕಾರದ ಕೆಲಸಗಳಿದ್ದರೆ ಮೇ 27ರ ಶುಕ್ರವಾರದಂದು ವಿಧಾನಸೌಧ ದಕಡೆ ಬರಲು ಹೋಗಬೇಡಿ. ಅಂದು ಸರ್ಕಾರದ ಕೇಂದ್ರ ಸ್ಥಾನ ಬಂದ್ ಆಗಿರಲಿದೆ.
ಸಚಿವಾಲಯದ ಸಂರಚನೆಯನ್ನು ಬದಲಾಯಿಸಲು ಮುಂದಾಗಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಸಚಿವಾಲಯದ ನೌಕರರ ಸಂಘ ಸಚಿವಾಲಯಗಳ ಎಲ್ಲಾ ಸೇವೆಯನ್ನು ಸ್ಥಗಿತಗೊಳಿಸುವ ತೀರ್ಮಾನ ತೆಗೆದುಕೊಂಡಿದೆ.
ಒಟ್ಟು 14 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಘ ಈ ಹೋರಾಟ ನಡೆಸುತ್ತಿದ್ದು, ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ಸಭೆ ನಡೆಸುವಾಗ ಸರ್ಕಾರ ಸಚಿವಾಲಯ ನೌಕರರ ಸಂಘದ ಪ್ರತಿನಿಧಿಗಳನ್ನು ಆಹ್ವಾನಿಸದೇ ಇರುವುದಕ್ಕೂ ಸಂಘ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಸಚಿವಾಲಯದಲ್ಲಿನ 542 ಕಿರಿಯ ಸಹಾಯಕರ ಹುದ್ದೆಗಳನ್ನು ಕಡಿತಗೊಳಿಸುವ ಪ್ರಸ್ತಾವನೆಯನ್ನು ಕೈಬಿಡಬೇಕು, ಕಂದಾಯ ಸಚಿವ ಆರ್. ಅಶೋಕ್ ಅಧ್ಯಕ್ಷತೆಯ ಸಂಪುಟ ಉಪಸಮಿತಿಯು ಸಚಿವಾಲಯಕ್ಕೆ ಸಂಬಂಧಿಸಿದಂತೆ ಅವೈಜ್ಞಾನಿಕವಾಗಿ ಮಾಡಿರುವ ಶಿಫಾರಸುಗಳನ್ನು ಕೈಬಿಡಬೇಕು, ಟಿ. ಎಂ. ವಿಜಯ ಭಾಸ್ಕರ್ ಅಧ್ಯಕ್ಷತೆಯ ಆಡಳಿತ ಸುಧಾರಣಾ ಆಯೋದ ಶಿಫಾರಸುಗಳನ್ನು ಜಾರಿಗೆ ತರಬಾರದು, ಸಚಿವಾಲಯದಲ್ಲಿ ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿರುವವರನ್ನು ಕೂಡಲೇ ಮಾತೃ ಇಲಾಖೆಗೆ ಹಿಂದಕ್ಕೆ ಕಳುಹಿಸಬೇಕು, ನಿವೃತ್ತಿಯಾದ ಅಧಿಕಾರಿಗಳು ಮತ್ತು ನೌಕರರನ್ನು ಪುನರ್ ನೇಮಕ ಮಾಡಿಕೊಳ್ಳಬಾರದು ಎಂದು ಸಂಘ ಪಟ್ಟು ಹಿಡಿದಿದೆ.
ಇದನ್ನೂ ಓದಿ| ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ
ಈ ಬಂದ್ ಅನ್ನು ಯಶಸ್ವಿಗೊಳಿಸುವ ಸಂಬಂಧ ಸೋಮವಾರ ಸಂಘದ ಅಧ್ಯಕ್ಷ ಗುರುಸ್ವಾಮಿ ಪಿ. ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಅನೇಕ ನೌಕರರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿ ಪಿ ಎಸ್ ಹರ್ಷ, ಖಜಾಂಚಿ ಕುಮಾರಸ್ವಾಮಿ, ಜಂಟಿ ಕಾರ್ಯದರ್ಶಿ ಶಾಂತರಾಮ, ಸಾಂಸ್ಕೃತಿಕ ಕಾರ್ಯದರ್ಶಿ ಮಂಜುಳ ಪಿ ಆರ್, ಸಂಘಟನಾ ಕಾರ್ಯದರ್ಶಿ ಮಾರುತಿ ಎಸ್. ಸೇರಿದಂತೆ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
ಕಳೆದ ಫೆಬ್ರವರಿಯಲ್ಲಿ ಸಂಘ ಇದೇ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿತ್ತು. ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಸರ್ಕಾರಿ ನೌಕರರು ಭಾಗವಹಿಸಿದ್ದರು. ಸಚಿವಾಲಯದ ಶಾಖಾಕಾರಿಗಳಿಗೆ ತಹಶೀಲ್ದಾರ್ ಹುದ್ದೆಗೆ ನಿಯೋಜನೆ ಮೇರೆಗೆ ಹೋಗಲು ಅವಕಾಶ ನೀಡಬೇಕು ಎಂದು ಈ ಸಂದರ್ಭದಲ್ಲಿ ಆಗ್ರಹಿಸಿದ್ದನ್ನು ಇಲ್ಲಿ ಸ್ಮರಿಸಬಹುದು.