ಬೆಂಗಳೂರು: ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದು ಪಡಿಸಿ, ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ತರುವ ಪ್ರಸ್ತಾವನೆಯು ಸರ್ಕಾರದ ಮುಂದಿಲ್ಲ (NPS News) ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಮತ್ತೊಮ್ಮೆ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ರಾಯಭಾಗದ ಶಾಸಕ ಐಹೊಳೆ ಡಿ. ಮಹಾಲಿಂಗಪ್ಪ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು ದೇಶದ ಹಲವು ರಾಜ್ಯಗಳು ಈ ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವುದು ಸರ್ಕಾರದ ಗಮನಕ್ಕೇ ಬಂದಿಲ್ಲ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳು ವಿಧಾನಸಭೆಗೆ ನೀಡಿರುವ ಉತ್ತರ ಇಲ್ಲಿದೆ ನೋಡಿ;
ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿಗಾಗಿ ಹೋರಾಟ ನಡೆಸುತ್ತಿರುವ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿಗಳ ಈ ಉತ್ತರದಿಂದ ಮತ್ತೆ ನಿರಾಸೆಯಾಗಿದೆ.
ಸಭೆಯೂ ನಡೆಯಲಿಲ್ಲ, ಚರ್ಚೆಯೂ ಇಲ್ಲ
ಹಳೆಯ ಪಿಂಚಣಿ ಯೋಜನೆ(ಒಪಿಎಸ್) ಜಾರಿಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರ ಸಂಘದ ನೇತೃತ್ವದಲ್ಲಿ ಎನ್‌ಪಿಎಸ್ ಸರ್ಕಾರಿ ನೌಕರರು ಕಳೆದ ಡಿಸೆಂಬರ್‌ನಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಸಿದ್ದರು. ಈ ಸಂದರ್ಭದಲ್ಲಿ ಎನ್‌ಪಿಎಸ್ ರದ್ದುಪಡಿಸುವ ವಿಷಯದ ಚರ್ಚಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು ಎಂದು ಸರ್ಕಾರ ಭರವಸೆ ನೀಡಿತ್ತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದೇಶನದಂತೆ ಧರಣಿ ಸತ್ಯಾಗ್ರಹ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿದ್ದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಎನ್‌ಪಿಎಸ್ ರದ್ದಿನ ಕುರಿತು ಮುಖ್ಯಮಂತ್ರಿಗಳೇ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ ಮತ್ತು ಈ ವಿಷಯವನ್ನು ಮುಂದಿನ ಬಜೆಟ್ ಅಧಿವೇಶನದಲ್ಲಿ ವಿಸ್ತೃತವಾಗಿ ಚರ್ಚಿಸುವ ಕುರಿತು ತೀರ್ಮಾನಿಸುವುದಾಗಿ ತಿಳಿಸಿದ್ದಾರೆ. ಹೀಗಾಗಿ ಈ ಧರಣಿಯನ್ನು ಸ್ಥಗಿತಗೊಳಿಸಿ ಎಂದು ಕೋರಿದ್ದರು. ಸಚಿವರ ಮಾತನ್ನು ನಂಬಿದ ಎನ್‌ಪಿಎಸ್ ನೌಕರರು ಧರಣಿಯನ್ನು ಸ್ಥಗಿತಗೊಳಿಸುವ ತೀರ್ಮಾನ ತೆಗೆದುಕೊಂಡಿದ್ದರು. ಆದರೆ ಇದುವರೆಗೂ ಸರ್ಕಾರ ಸಭೆ ನಡೆಸಿಲ್ಲ.
ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್ ಮಾಡಿ.
ಅಲ್ಲದೆ, ಬಜೆಟ್ ಅಧಿವೇಶನದಲ್ಲಿ ವಿಸ್ತೃತವಾಗಿ ಈ ಕುರಿತು ಚರ್ಚಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದರೂ ಕೂಡ ಈ ಅಧಿವೇಶನದಲ್ಲಿ ಚರ್ಚೆ ನಡೆಯುವುದು ಅನುಮಾನ ಎಂದು ಹೇಳಲಾಗುತ್ತಿದೆ. ಕಳೆದ ವಿಧಾನಸಭಾ ಅಧಿವೇಶನದಲ್ಲಿ ಕೆಲ ಶಾಸಕರು ಚರ್ಚೆಗೆ ಮುಂದಾದಾಗ, ಈ ಕುರಿತು ಸದನದಲ್ಲಿ ಪ್ರತ್ಯೇಕವಾಗಿ ಚರ್ಚೆ ನಡೆಯಬೇಕಾಗಿದೆ. ಆ ನಂತರ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಪ್ರಕಟಿಸಿದ್ದರು. ಕಳೆದ ಅಧಿವೇಶನದಲ್ಲಿ ವಿಶೇಷ ಚರ್ಚೆಗೆಂದು ಈ ವಿಷಯ ನಿಗದಿಯಾಗಿತ್ತಾದರೂ ಅವಕಾಶ ಸಿಕ್ಕಿರಲಿಲ್ಲ. ಈ ಬಾರಿಯೂ ಈ ವಿಷಯ ಚರ್ಚೆಗೆ ಬರುವ ಸಾಧ್ಯತೆಗಳಿಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಇದನ್ನೂ ಓದಿ : NPS News : ಎನ್‌ಪಿಎಸ್ ರದ್ದಿನಿಂದ ಸರ್ಕಾರಕ್ಕೆ ಹೊರೆಯಾಗದು; ವೇತನ ಆಯೋಗದ ಮುಂದೆ NPS ನೌಕರರ ವಾದ