ಬೆಂಗಳೂರು: ವಿವಿಧ ಕಾರಣಗಳಿಂದ ಸ್ಥಗಿತಗೊಂಡಿದ್ದ ಶಿಕ್ಷಕರ ವರ್ಗಾವಣೆ (Teacher Transfer) ಪ್ರಕ್ರಿಯೆಯನ್ನು ಮುಂದುವರಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡದ ಬೆನ್ನಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆಯು ಇದಕ್ಕೆ ಅನುಮತಿ ನೀಡುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.
ವರ್ಗಾವಣೆಗೆ ಸಂಬಂಧಿಸಿದ ಕಡತಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಳೆದ ಶುಕ್ರವಾರ ಅನುಮೋದನೆ ನೀಡಿದ್ದು, ಚುನಾವಣಾ ಆಯೋಗದ ಅನುಮತಿಯನ್ನು ಪಡೆದು ಈ ವರ್ಗಾವಣೆ ಪ್ರಕ್ರಿಯೆಯನ್ನು ನಡೆಸಬೇಕೆಂದು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರಾಗ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಸೋಮವಾರದಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಪತ್ರ ಬರೆದಿದ್ದು, ಶಿಕ್ಷಕರ ವರ್ಗಾವಣೆಗೆ ಸಹಮತಿ ನೀಡುವಂತೆ ಕೋರಿದ್ದಾರೆ.
ಯಾವುದೇ ವರ್ಗಾವಣೆ ಮಾಡಬೇಕಾಗಿದ್ದಲ್ಲಿ ಆಯೋಗದ ಅನುಮತಿ ಪಡೆಯುವಂತೆ ರಾಜ್ಯ ಚುನಾವಣಾ ಆಯೋಗ ಇತ್ತೀಚೆಗೆ ಸುತ್ತೋಲೆ ಹೊರಡಿಸಿರುವುದರಿಂದ ಶಿಕ್ಷಕರ ಸಾಮಾನ್ಯ ವರ್ಗಾವಣೆಗೂ ಆಯೋಗದ ಅನುಮತಿ ಅವಶ್ಯವಾಗಿದೆ. ಶಿಕ್ಷಕರು ಕೂಡ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವುದರಿಂದ ಅವರ ವರ್ಗಾವಣೆಗೆ ಆಯೋಗ ಅನುಮತಿ ನೀಡುತ್ತದೆಯೇ, ಇಲ್ಲವೇ ಎಂಬುದು ಈಗ ತೀವ್ರ ಕುತೂಹಲ ಮೂಡಿಸಿದೆ.
ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್‌ನಲ್ಲಿ ನಿಗದಿಯಾದ ಹಾಗೂ ಶಿಕ್ಷಕರು ವರ್ಗಾವಣೆಗೊಂಡ ಸ್ಥಳಕ್ಕೆ ನೂತನ ಶೈಕ್ಷಣಿಕ ವರ್ಷದ ಆರಂಭದಿಂದ ಅಂದರೆ ಜೂನ್ 1 ರ ನಂತರ ಕರ್ತವ್ಯಕ್ಕೆ ಹಾಜರಾಗುವ ಷರತ್ತಿಗೊಳಪಟ್ಟು ಈ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುವುದು. ಹೆಚ್ಚುವರಿ ಶಿಕ್ಷಕರ ನಿಯೋಜನೆ, ಸರ್ಕಾರಿ ಪ್ರಾಥಮಿ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರನ್ನು ಕೌನ್ಸಿಲಿಂಗ್ ಮುಖಾಂತರ ಮಾತ್ರ ವರ್ಗಾವಣೆ ಮಾಡಲಾಗುತ್ತದೆ. ಇದಕ್ಕೆ ಈಗಾಗಲೇ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆದುಕೊಳ್ಳಲಾಗಿದೆ ಎಂದು ಇಲಾಖೆಯು ಪತ್ರದಲ್ಲಿ ವಿವರಿಸಿದೆ.
ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯಗಳಡಿ ವರ್ಗಾವಣೆಗಾಗಿ 88,324 ಶಿಕ್ಷಕರು ಅರ್ಜಿ ಸಲ್ಲಿಸಿದ್ದಾರೆ. ತಾಂತ್ರಿಕ ಕಾರಣಗಳಿಂದಾಗಿ ಕಳೆದ ಡಿಸೆಂಬರ್‌ನಲ್ಲಿ ಆರಂಭವಾಗಿದ್ದ ಈ ವರ್ಗಾವಣೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು ಎಂದು ರಿತೇಶ್ ಕುಮಾರ್ ಸಿಂಗ್ ಚುನಾವಣಾ ಆಯೋಗಕ್ಕೆ ತಿಳಿಸಿದ್ದಾರೆ.
ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್ ಮಾಡಿ.
ಸ್ಥಗಿತಗೊಂಡಿದ್ದ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನಿರಂತರವಾಗಿ ಪ್ರಯತ್ನ ನಡೆಸಿಕೊಂಡು ಬಂದಿತ್ತು. ಇದೀಗ ಈ ವರ್ಗಾವಣೆ ಪ್ರಕ್ರಿಯೆ ಮತ್ತೆ ಆರಂಭವಾಗುವ ಹೊಸ ಭರವಸೆ ಮೂಡಿದೆ.
ಇದನ್ನೂ ಓದಿ : Teacher Transfer : ಖಾಸಗಿ ಅನುದಾನಿತ ಶಾಲೆಗಳ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ