Site icon Vistara News

ಸೆಪ್ಟೆಂಬರ್‌ನಲ್ಲಿ ಅರ್ಚಕರ ರಾಜ್ಯಮಟ್ಟದ ಸಮಾವೇಶ: ಸಚಿವೆ ಶಶಿಕಲಾ ಜೊಲ್ಲೆ

shashikala jolle

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ದೇವಸ್ಥಾನಗಳ ಅರ್ಚಕರ ರಾಜ್ಯಮಟ್ಟದ ಸಮಾವೇಶವನ್ನು ಸೆಪ್ಟೆಂಬರ್‌ ಕೊನೆಯ ವಾರದಲ್ಲಿ ಆಯೋಜಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಸೋಮವಾರ ವಿಕಾಸಸೌಧದಲ್ಲಿ ನಡೆದ 3ನೇ ರಾಜ್ಯ ಧಾರ್ಮಿಕ ಪರಿಷತ್ತಿನ 16ನೇ ಸಭೆಯಲ್ಲಿ ಹಲವಾರು ಧಾರ್ಮಿಕ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಧಾರಗಳನ್ನು ತಗೆದುಕೊಳ್ಳಲಾಗಿದೆ. ಅರ್ಚಕರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಹೊರತಂದಿದ್ದು ತಸ್ಥಿಕ್‌ ಹಣ ಹೆಚ್ಚಳ, ಅರ್ಚಕರುಗಳಿಗೆ ವಿಮಾ ಸೌಲಭ್ಯ ಸೇರಿದಂತೆ ಹಲವಾರು ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಇನ್ನು ಮುಜರಾಯಿ ಇಲಾಖೆಯ ವತಿಯಿಂದ ಅರ್ಚಕರ ಸಮಾವೇಶವನ್ನು ಏರ್ಪಡಿಸುವಂತೆಯೂ ಸದಸ್ಯರು ಕೋರಿಕೆ ಸಲ್ಲಿಸಿದ್ದು, ಸೆಪ್ಟೆಂಬರ್‌ ಕೊನೆಯ ವಾರದಲ್ಲಿ ರಾಜ್ಯಮಟ್ಟದ ಸಮಾವೇಶವನ್ನು ಏರ್ಪಡಿಸುವುದಾಗಿ ಸಚಿವರು ತಿಳಿಸಿದರು.

ಇದನ್ನೂ ಓದಿ | ತಿರುಪತಿ ತಿರುಮಲದಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ 346 ಕೊಠಡಿ ಲಭ್ಯ; ವಿಶ್ವನಾಥ್

ತೆರವಾಗಿರುವ ರಾಜ್ಯ ಧಾರ್ಮಿಕ ಪರಿಷತ್ತಿನ ನ್ಯಾಯಿಕ ಸದಸ್ಯರ ಸ್ಥಾನವನ್ನು ಶೀಘ್ರವಾಗಿ ಭರ್ತಿ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, ಮುಜರಾಯಿ ಇಲಾಖೆಯ ಶೇಕಡಾ 60 ರಷ್ಟು ಹುದ್ದೆಗಳು ಖಾಲಿಯಿವೆ. ಇದನ್ನು ತುಂಬಲು ನೇಮಕಾತಿಗೆ ಅವಕಾಶ ನೀಡುವಂತೆ ಆರ್ಥಿಕ ಇಲಾಖೆಗೆ ಪತ್ರ ಬರೆಯಲಾಗಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಶೀಘ್ರ ಕ್ರಮ ತಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯದ ಪ್ರಮುಖ ಶ್ರದ್ಧಾಕೇಂದ್ರ ಕುಕ್ಕೆಯಲ್ಲಿ ಭಕ್ತಾದಿಗಳಿಗೆ ಇನ್ನೂ ಹೆಚ್ಚಿನ ಉತ್ತಮ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪರಿಶೀಲನೆ ನಡೆಸುವಂತೆ ಆಯುಕ್ತರಿಗೆ ಸೂಚನೆ ನೀಡಲಾಯಿತು. ಎಲ್ಲ ಜಿಲ್ಲೆಗಳಲ್ಲೂ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸಭೆಗಳನ್ನು ಕಡ್ಡಾಯವಾಗಿ ನಡೆಸಲು ಕ್ರಮ ಕೈಗೊಳ್ಳುವಂತೆಯೂ ಹಾಗೂ ನೂತನ ಜಿಲ್ಲೆ ವಿಜಯನಗರದಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್‌ ರಚನೆಗೆ ಕ್ರಮವಹಿಸುವಂತೆ ಆಯುಕ್ತರಿಗೆ ಸಚಿವರು ಸೂಚನೆ ನೀಡಿದರು.

ಕಾಶಿಯ ಕರ್ನಾಟಕ ಛತ್ರ ಸಂಪೂರ್ಣ ನವೀಕರಣ

ಕಾಶಿಯಲ್ಲಿರುವ ಕರ್ನಾಟಕ ಛತ್ರವನ್ನು ಸಂಪೂರ್ಣ ನವೀಕರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಆಯುಕ್ತರಿಗೆ ಸೂಚನೆ ನೀಡಿದರು. ಅಲ್ಲದೆ, ಕೂಡಲೇ ಅಗತ್ಯವಿರುವ ಹೆಚ್ಚುವರಿ ಸಿಬ್ಬಂದಿಯ ನಿಯೋಜಿಸಲು ಆದೇಶಿಸಿದರು.

ಇದನ್ನೂ ಓದಿ | ರಾಜ್ಯದಿಂದ ಕಾಶಿಗೆ ಹೋಗುವ ಯಾತ್ರಾರ್ಥಿಗಳಿಗೆ ಸಿದ್ಧವಾಗುತ್ತಿದೆ ಭಾರತ್‌ ಗೌರವ್‌ ರೈಲು

Exit mobile version