ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಮುಸ್ಲಿಮರು ಶನಿವಾರ ಪವಿತ್ರ ʼಈದ್ ಉಲ್ ಫಿತರ್ʼ (ರಂಜಾನ್) ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಕಳೆದ ಒಂದು ತಿಂಗಳಿನಿಂದ ಉಪವಾಸ ವ್ರತ ಕೈಗೊಂಡಿದ್ದ ಮುಸ್ಲಿಮರು, ಮಸೀದಿಗಳಿಗೆ ತೆರಳಿ ಶ್ರದ್ಧಾ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು.
ರಂಜಾನ್ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಜಿಲ್ಲಾಡಳಿತಗಳಿಂದ ವ್ಯವಸ್ಥೆ ಮಾಡಲಾಗಿತ್ತು. ಪ್ರಾರ್ಥನೆ ಸಲ್ಲಿಸಿದ ಬಳಿಕ ಸಮುದಾಯದವರು, ಪರಸ್ಪರ ರಂಜಾನ್ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ನಂತರ ಬಡವರು, ನಿರ್ಗತಿಕರಿಗೆ ದಾನದ ರೂಪದಲ್ಲಿ ಹಣ, ಬಟ್ಟೆ, ತಿಂಡಿ-ತಿನಿಸುಗಳನ್ನು ವಿತರಿಸುವ ಮೂಲಕ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಚಾಮರಾಜಪೇಟೆಯಲ್ಲಿ ಸಾಮೂಹಿಕ ಪ್ರಾರ್ಥನೆ
ಬೆಂಗಳೂರು: ರಂಜಾನ್ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಮೈದಾನದಲ್ಲಿ ಸಾವಿರಾರು ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಆಲಿಂಗನ ಮಾಡಿ ಶುಭಾಶಯ ವಿನಿಮಯ ಮಾಡಿಕೊಂಡರು. ಶುಕ್ರವಾರ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಶನಿವಾರ ಈದ್ ಉಲ್ ಫಿತರ್ ಆಚರಣೆ ಮೂಲಕ ಮುಸ್ಲಿಮರು ರಂಜಾನ್ ವ್ರತಾಚರಣೆಯನ್ನು ಮುಗಿಸಲು ಸಾವಿರಾರು ಮಂದಿ ಆಗಮಿಸಿ ಪ್ರಾರ್ಥನೆ ಸಲ್ಲಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮೈದಾನದ ಸುತ್ತ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.
ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ರಂಜಾನ್
ಉಡುಪಿ: ಜಿಲ್ಲೆಯಾದ್ಯಂತ ಮುಸ್ಲಿಂ ಸಮುದಾಯದವರು ಈದ್ ಉಲ್ ಫಿತರ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ನಗರ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರ್, ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಜ್ ನೆರವೇರಿಸಲಾಯಿತು.
ಮುಸ್ಲಿಮರು ಬೆಳಗ್ಗೆ ಅರ್ಹರಿಗೆ ಫಿತರ್ ಝಕಾತ್ (ದಾನ) ನೀಡಿದ ಬಳಿಕ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಜ್ ಮಾಡಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಜ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ಉಡುಪಿ ಜಾಮಿಯಾ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನಾ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್ ನಮಾಜ್ ನಿರ್ವಹಿಸಲಾಯಿತು. ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಜ್ ಮತ್ತು ಖುತ್ಬಾ ಪಾರಾಯಣ ನಡೆಯಿತು.
ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಧರ್ಮಗುರು ಮೌಲಾನಾ ಕರಾರ್ ಹುಸೇನ್ ನೇತೃತ್ವದಲ್ಲಿ ಈದ್ ವಿಶೇಷ ನಮಾಜ್ ನೆರವೇರಿಸಲಾಯಿತು. ಗಂಗೊಳ್ಳಿಯ ಜುಮ್ಮಾ ಮಸೀದಿಯಲ್ಲಿ ಮೌಲಾನಾ ಮುಝಮ್ಮಿಲ್ ನದ್ವಿ, ಮೋಹಿದೀನ್ ಜುಮ್ಮಾ ಮಸೀದಿಯಲ್ಲಿ ಖತೀಬ್ ಮೌಲಾನ ಅಬ್ದುಲ್ ಕರೀಂ ನದ್ವಿ, ಶಾಹಿ ಜುಮ್ಮಾ ಮಸೀದಿಯಲ್ಲಿ ಮೌಲಾನಾ ಅಬ್ದುಲ್ ಮತಿನ್ ಸಿದ್ದಿಕಿ ಅವರ ನೇತೃತ್ವದಲ್ಲಿ ವಿಶೇಷ ನಮಾಝ್ ನಿರ್ವಹಿಸಲಾಯಿತು. ಇದರಲ್ಲಿ ನೂರಾರು ಮಂದಿ ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಧರ್ಮಗುರುಗಳು ಈದ್ ಸಂದೇಶ ನೀಡಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಿದರು. ನೆಲದ ಕಾನೂನನ್ನು ಗೌರವಿಸಿ ಶಾಂತಿಯ ವಾತಾವರಣ ಕಾಪಾಡುವಂತೆ ಕರೆ ನೀಡಿದರು. ಹಬ್ಬದ ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.
ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಮುಸ್ಲಿಮರು
ರಾಯಚೂರು: ರಂಜಾನ್ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆ ಬಳಿಕ ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಮಠಕ್ಕೆ ಮುಸ್ಲಿಮರು ತೆರಳಿ ರಾಯರ ದರ್ಶನ ಪಡೆದರು. ಈ ವೇಳೆ ಮಠಕ್ಕೆ ಆಗಮಿಸಿದ್ದ ನೂರಾರು ಸಂಖ್ಯೆ ಮುಸ್ಲಿಮರಿಗೆ, ಶ್ರೀ ಸುಬುಧೇಂದ್ರ ತೀರ್ಥರು ಆಶೀರ್ವಚನ ನೀಡಿ ಪರಿಮಳ ಪ್ರಸಾದ್ ವಿತರಿಸಿದರು.
ಶಿವಮೊಗ್ಗದಲ್ಲಿ ಈದ್ ಉಲ್ ಫಿತರ್ ಆಚರಣೆ ಜೋರು
ಶಿವಮೊಗ್ಗ: ಮುಸ್ಲಿಮರ ಪವಿತ್ರ ಹಬ್ಬ ಈದ್ ಉಲ್ ಫಿತರ್ (ರಂಜಾನ್) ಹಿನ್ನೆಲೆಯಲ್ಲಿ ನಗರದ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಚಿಕ್ಕವರು, ದೊಡ್ಡವರೆನ್ನದೆ ಪ್ರಾರ್ಥನೆಯಲ್ಲಿ ಎಲ್ಲರೂ ಭಾಗಿಯಾಗಿದ್ದರು. ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡ ನಂತರ ಯಥಾಶಕ್ತಿ ದಾನ ಮಾಡುವ ಮೂಲಕ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಬಡವರಿಗೆ ದಾನ ಮಾಡಿದರೆ ಅಲ್ಲಾಹು ಮೆಚ್ಚುತ್ತಾನೆ ಎಂಬ ನಂಬಿಕೆಯಿದ್ದು, ಈ ಹಿನ್ನೆಲೆಯಲ್ಲಿ ಮಸ್ಲಿಮರು, ಬಡವರಿಗೆ ದಾನ ಮಾಡಿದರು. ಸಾಮೂಹಿಕ ಪ್ರಾರ್ಥನೆ ಬಳಿಕ ಹಬ್ಬದ ಅಂಗವಾಗಿ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಪ್ರಾರ್ಥನೆ ಸಲ್ಲಿಕೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ. ಯೋಗೀಶ್, ಇತ್ತೀಚೆಗಷ್ಟೇ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡು ಅಭ್ಯರ್ಥಿಯಾಗಿರುವ ಆಯನೂರು ಮಂಜುನಾಥ್ ಮತ್ತು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ. ಶ್ರೀಕಾಂತ್ ಅವರು ಮುಸ್ಲಿಂ ಸಮುದಾಯದವರಿಗೆ ಶುಭಾಶಯ ಕೋರಿದರು.
ಕೊಪ್ಪಳದಲ್ಲಿ ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ
ಕೊಪ್ಪಳ: ನಗರಸಭೆ ಸಮೀಪದ ಈದ್ಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ್, ಜೆಡಿಎಸ್ ಅಭ್ಯರ್ಥಿ ಸಿ.ವಿ.ಚಂದ್ರಶೇಖರ್, ಬಿಜೆಪಿಯ ಅಮರೇಶ ಕರಡಿ, ಮಾವ ಸಂಸದ ಕರಡಿ ಸಂಗಣ್ಣ ಅವರು ಮುಸ್ಲಿಂ ಬಾಂಧವರಿಗೆ ರಂಜಾನ್ ಶುಭಾಶಯ ಕೋರಿದರು.
ಇದನ್ನೂ ಓದಿ | Eid Mubarak: ಸಮಾಜದಲ್ಲಿ ಸೌಹಾರ್ದತೆಯ ಮನೋಭಾವ ಹೆಚ್ಚಲಿ; ಈದ್ ಉಲ್ ಫಿತರ್ ಶುಭಾಶಯ ಕೋರಿದ ಪ್ರಧಾನಿ ಮೋದಿ
ಚಿತ್ರದುರ್ಗದ ಬಡಾ ಮಖಾನ್ ದರ್ಗಾಗೆ ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ಭೇಟಿ
ಚಿತ್ರದುರ್ಗ: ಚಿತ್ರದುರ್ಗದ ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ಅವರು ಶನಿವಾರ ನಗರದ ಬಡಾ ಮಖಾನ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದರ್ಗಾಗೆ ಭೇಟಿ ನೀಡಿದ ರಘು ಆಚಾರ್ ಅವರನ್ನು ಮುಸ್ಲಿಂ ಧರ್ಮ ಗುರುಗಳು ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಅವರು ಸಮುದಾಯದವರಿಗೆ ರಂಜಾನ್ ಶುಭಾಶಯ ಕೋರಿದರು. ಚುನಾವಣೆ ಪ್ರಚಾರ ಆರಂಭಕ್ಕೂ ಮುನ್ನ ರಘು ಆಚಾರ್ ಮಠಾಧೀಶರು, ಮುಸಲ್ಮಾನ ಮುಖಂಡರನ್ನು ಭೇಟಿ ಮಾಡಿ ಬೆಂಬಲ ಕೋರಿದ್ದಾರೆ. ಅಹಿಂದ ಪರಿಕಲ್ಪನೆಯನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಲು ರಘು ಆಚಾರ್ ಮುಂದಾಗಿದ್ದಾರೆ.