ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಿದ ಧಾರ್ಮಿಕ ಕಟ್ಟಡಗಳ (Religious buildings) ತೆರವು ಕಾರ್ಯಾಚರಣೆ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ. ಬೆಂಗಳೂರು ನಗರದ ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಸಾರ್ವಜನಿಕ ಸ್ಥಳ ಒತ್ತುವರಿ ಮಾಡಿ ನಿರ್ಮಿಸಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಿರುವ ಮತ್ತು ತೆರವಿಗೆ ಕೈಗೊಂಡಿರುವ ಕ್ರಮಗಳ ಮಾಹಿತಿಯುಳ್ಳ ಸಮರ್ಪಕ ವಸ್ತುಸ್ಥಿತಿ ವರದಿಯನ್ನು ಮೂರು ವಾರದಲ್ಲಿ ಸಲ್ಲಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಈ ಸಂಬಂಧ ಸರಕಾರ ಮತ್ತು ಬಿಬಿಎಂಪಿಗೆ ನಿರ್ದೇಶನ ನೀಡಿದೆ.
ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು ಎನ್ನುವುದು ಸುಪ್ರೀಂಕೋರ್ಟ್ ಆದೇಶ. ಹೀಗಾಗಿ ಈ ನಿರ್ದೇಶನವನ್ನು ಪಾಲಿಸುವ ನಿಟ್ಟಿನಲ್ಲಿ ರಾಜ್ಯ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆದಿದೆ.
ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಚರಣೆ ನಡೆಸಿ ವರದಿ ಸಲ್ಲಿಸುವಂತೆ ಹೈಕೋರ್ಟ್, ಈ ಹಿಂದೆ ನೀಡಿರುವ ಆದೇಶದ ಅನುಪಾಲನಾ ವರದಿ ಸಲ್ಲಿಸಲು ಸ್ವಲ್ಪ ಕಾಲಾವಕಾಶ ನೀಡುವಂತೆ ಸರ್ಕಾರ ಮತ್ತು ಬಿಬಿಎಂಪಿ ಪರ ವಕೀಲರು ಕೋರಿದರು.
ತೆರವು ವಿಳಂಬಕ್ಕೆ ಆಕ್ರೋಶ
ಇದಕ್ಕೆ ಒಪ್ಪಿದ ಪೀಠವು ಹೈಕೋರ್ಟ್ ಹಲವು ಬಾರಿ ನೀಡಿದ ನಿರ್ದೇಶನದ ಹೊರತಾಗಿಯೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿನ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಸಂಬಂಧಿಸಿದಂತೆ ಬಿಬಿಎಂಪಿ ಮತ್ತು ಸರ್ಕಾರ ಸಮರ್ಪಕವಾದ ವಸ್ತುಸ್ಥಿತಿ ವರದಿ ಸಲ್ಲಿಸಿಲ್ಲ. ಇನ್ನೂ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವುಗೊಳಿಸುವಲ್ಲಿ ಸಾಕಷ್ಟು ವಿಳಂಬವಾಗಿದೆ. ವಾಸ್ತವವಾಗಿ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವಿಗೆ ಬಿಡಿಎ, ಬಿಬಿಎಂಪಿ ಮತ್ತು ಸರ್ಕಾರ ಪರಸ್ಪರ ಸಹಕಾರದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿತು.
ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳ ತೆರವು ಕಾರ್ಯಾಚರಣೆ ಕೆಲವು ಕಡೆ ನಡೆದಿದೆಯಾದರೂ ಅದಕ್ಕೆ ಸಾರ್ವಜನಿಕ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ನಿಧಾನ ಗತಿ ಪ್ರಗತಿಯಲ್ಲಿದೆ. ಈಗ ಹೈಕೋರ್ಟ್‌ಗೆ ಏನು ವರದಿ ನೀಡಲಾಗುತ್ತದೆ ಎಂದು ಕಾದು ನೋಡಬೇಕು. ಮುಂದಿನ ವಿಚಾರಣೆ ೨೦೨೩ರ ಜನವರಿ ೧೨ರಂದು ನಡೆಯಲಿದೆ.
ಇದನ್ನೂ ಓದಿ | 1991ರ ಕಾಯಿದೆ ಪಾಲನೆ ಆಗಲಿ, ಧಾರ್ಮಿಕ ಕೇಂದ್ರಗಳಿಗೆ ಧಕ್ಕೆ ಬೇಡ: ಬೃಂದಾ ಕಾರಟ್