ಬೆಂಗಳೂರು: ಮಹಾಶಿವರಾತ್ರಿಗೆ ದಿನಗಣನೆ (Maha Shivratri) ಶುರುವಾಗಿದೆ. ಎಲ್ಲೆಲ್ಲೂ ಶಿವನಾಮಸ್ತರಣೆಯೊಂದಿಗೆ ಜಾಗರಣೆ ಆಚರಿಸಲು ಜನರು ಸಜ್ಜಾಗುತ್ತಿದ್ದಾರೆ. ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ ನಿಗಮವು ಹೆಚ್ಚುವರಿ ಬಸ್‌ಗಳ ನಿಯೋಜನೆ ಮಾಡಿದೆ.
ಮಾರ್ಚ್ 8 ಶುಕ್ರವಾರ ಮಹಾಶಿವರಾತ್ರಿ ಹಾಗೂ 9,10ರಂದು ವಾರಾಂತ್ಯ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮಾ. 7 ರಿಂದ 10ರವರೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 1,500 ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ರಾಜ್ಯ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಮಾ.10 -11ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.
*ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ. ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ ಹಾಗೂ ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಇರಲಿದೆ.
*ಮೈಸೂರು ರಸ್ತೆ ಬಸ್ ನಿಲ್ದಾಣದಿಂದ (ಸ್ಟ್ಯಾಟ್‌ಲೈಟ್) ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ನಡೆಸಲಾಗುತ್ತದೆ.
ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುತ್ತದೆ.
ಇದನ್ನೂ ಓದಿ:Train services: ರೈಲ್ವೆ ಕ್ರಾಸಿಂಗ್ ಕಾಮಗಾರಿ; 5 ದಿನ ಬೆಂಗಳೂರು-ಮೈಸೂರು ರೈಲು ಸಂಚಾರ ಬಂದ್
ಶೇ. 10ರಷ್ಟು ರಿಯಾಯಿತಿ
ಇ-ಟಿಕೇಟ್ ಬುಕಿಂಗ್ ಅನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುತ್ತಿದೆ.
ಕರ್ನಾಟಕ ಹಾಗೂ ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ