Site icon Vistara News

Ram Mandir: ರಾಮಮಂದಿರ ಉದ್ಘಾಟನೆಗೆ ಮಮತಾ ಬ್ಯಾನರ್ಜಿಯೂ ಗೈರು; ಏನು ಕಾರಣ?

Mamata Banerjee

Mamata Banerjee Redefines INDIA Bloc, Says Will Provide Outside Support

ಕೋಲ್ಕೊತಾ: ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ (Ram Mandir) ಲೋಕಾರ್ಪಣೆಗೆ ಕೆಲವೇ ದಿನಗಳು ಬಾಕಿ ಇವೆ. ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ನಡೆಯುತ್ತಿದೆ. ಇದರ ಬೆನ್ನಲ್ಲೇ, ದೇಶದ ಹಲವು ಪಕ್ಷಗಳು ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಿರಲು ತೀರ್ಮಾನಿಸಿವೆ. ಸಿಪಿಎಂ ಬೆನ್ನಲ್ಲೇ ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ತೃಣಮೂಲ ಕಾಂಗ್ರೆಸ್‌ (TMC) ಕೂಡ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಿರಲು ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪ್ರತಿಪಕ್ಷಗಳಿಗೂ ಆಹ್ವಾನ ನೀಡಲಾಗಿದೆ. ಆದರೆ, ಮಮತಾ ಬ್ಯಾನರ್ಜಿ ಅಥವಾ ಟಿಎಂಸಿಯ ಯಾವುದೇ ಪ್ರತಿನಿಧಿಗಳು ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ. ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ಬಿಜೆಪಿಯು ರಾಜಕೀಯಕ್ಕೆ ಎಳೆದುತಂದಿದೆ. ಇದನ್ನು ಬಿಜೆಪಿಯು ಪಕ್ಷದ ಕಾರ್ಯಕ್ರಮ ಎಂಬಂತೆ ಬಿಂಬಿಸುತ್ತಿದೆ. ಹಾಗಾಗಿ ಪಾಲ್ಗೊಳ್ಳದಿರಲು ಮಮತಾ ಬ್ಯಾನರ್ಜಿ ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗೈರಾಗಲು ಸಿಪಿಎಂ ತೀರ್ಮಾನ

ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯಲು ಸಿಪಿಎಂ ಕೂಡ ತೀರ್ಮಾನಿಸಿದೆ. “ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ. ಧರ್ಮವು ಪ್ರತಿಯೊಬ್ಬರ ವೈಯಕ್ತಿಕ ಆಯ್ಕೆಯಾಗಿದೆ. ನಾವು ಎಲ್ಲರ ವೈಯಕ್ತಿಕ ಆಯ್ಕೆಯನ್ನು ಗೌರವಿಸುತ್ತದೆ. ಆದರೆ, ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವು ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮವಾಗಿ ಬದಲಾಗಿದೆ. ಪ್ರಧಾನಿ, ಉತ್ತರ ಪ್ರದೇಶ ಮುಖ್ಯಮಂತ್ರಿಯಂತಹ ಸಾಂವಿಧಾನಿಕ ಸ್ಥಾನ ಹೊಂದಿದವರು ಉದ್ಘಾಟನೆ ಮಾಡುತ್ತಿದ್ದಾರೆ. ಧಾರ್ಮಿಕ ನಂಬಿಕೆಯನ್ನು ರಾಜಕೀಯಕ್ಕೆ ಎಳೆದು ತರಲಾಗಿದೆ. ಸಿಪಿಎಂ ಪಕ್ಷವು ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಿರಲು ತೀರ್ಮಾನಿಸಿದೆ” ಎಂದು ಸೀತಾರಾಮ್‌ ಯೆಚೂರಿ ಹೇಳಿದ್ದರು.

ಯಾವೆಲ್ಲ ಸೆಲೆಬ್ರಿಟಿಗಳಿಗೆ ಆಹ್ವಾನ?

ಸ್ಯಾಂಡಲ್‌ವುಡ್‌ನ ಯಶ್‌ ಹಾಗೂ ರಿಷಬ್‌ ಶೆಟ್ಟಿ ಅವರಿಗೆ ರಾಮಮಂದಿರ ಟ್ರಸ್ಟ್‌ ಆಹ್ವಾನ ನೀಡಿದೆ ಎಂದು ತಿಳಿದುಬಂದಿದೆ. ಇನ್ನು ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌, ರಣಬೀರ್‌ ಕಪೂರ್‌, ಮಾಧುರಿ ದೀಕ್ಷಿತ್‌, ಅಕ್ಷಯ್‌ ಕುಮಾರ್‌, ಆಲಿಯಾ ಭಟ್‌, ಆಯುಷ್ಮಾನ್‌ ಕುರಾನ, ಅಜಯ್‌ ದೇವಗನ್‌, ಅನುಪಮ್‌ ಖೇರ್‌, ಸಂಜಯ್‌ ಲೀಲಾ ಬನ್ಸಾಲಿ ಸೇರಿ ಹಲವು ನಟ-ನಟಿಯರು, ನಿರ್ದೇಶಕರಿಗೆ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಮೋದಿಗೆ ರಾಮ ಪೂಜೆ ಮಾಡುವ ಹಕ್ಕಿದೆಯೇ ಎಂದ ಸುಬ್ರಮಣಿಯನ್ ಸ್ವಾಮಿಗೆ ಜಾಡಿಸಿದ ನೆಟ್ಟಿಗರು!

ದಕ್ಷಿಣ ಭಾರತದ ಚಿತ್ರರಂಗದ ಗಣ್ಯರಾದ ರಜನಿಕಾಂತ್‌, ಚಿರಂಜೀವಿ, ಮೋಹನ್‌ಲಾಲ್‌, ಧನುಶ್‌, ಪ್ರಭಾಸ್ ಅವರಿಗೂ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಮಂತ್ರಣ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ದೇಶದ ಸುಮಾರು 4 ಸಾವಿರ ಸಂತರು ಪಾಲ್ಗೊಳ್ಳಲಿದ್ದಾರೆ. ಇಡೀ ಕಾರ್ಯಕ್ರಮದಲ್ಲಿ ಸುಮಾರು 10-15 ಸಾವಿರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version