Site icon Vistara News

Eid Ul Fitr 2023: ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಮುಸ್ಲಿಮರು; ಸುಬುಧೇಂದ್ರ ತೀರ್ಥರಿಂದ ಆಶೀರ್ವಚನ

Muslims who had darshan of Raghavendra swamy at Mantralaya

ರಾಯಚೂರು: ನಾಡಿನಾದ್ಯಂತ ಈದ್‌ ಉಲ್‌ ಫಿತರ್‌ (Eid Ul Fitr 2023-ರಂಜಾನ್) ಹಬ್ಬವನ್ನು ಮುಸ್ಲಿಮರು ಶನಿವಾರ ಸಂಭ್ರಮದಿಂದ ಆಚರಿಸಿದ್ದಾರೆ. ಈ ನಡುವೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ನೂರಾರು ಮುಸ್ಲಿಮರು ಭೇಟಿ ನೀಡಿ ರಾಯರ ದರ್ಶನ ಪಡೆದರು.

ರಂಜಾನ್‌ ಪ್ರಾರ್ಥನೆ ಬಳಿಕ ನೂರಾರು ಮುಸ್ಲಿಮರು ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳಿ ರಾಯರ ದರ್ಶನ ಪಡೆದರು. ಶ್ರೀ ಸುಬುಧೇಂದ್ರ ತೀರ್ಥರು ಆಶೀರ್ವಚನ ನೀಡಿ ಪರಿಮಳ ಪ್ರಸಾದ್ ವಿತರಿಸಿದರು. ಮಠಕ್ಕೆ ಸಾಕಷ್ಟು ಮುಸ್ಲಿಂ ಭಕ್ತರು ಇದ್ದಾರೆ. ಪ್ರತಿ ವರ್ಷ ಮಂತ್ರಾಲಯಕ್ಕೆ ಭೇಟಿ ನೀಡಿ ನೂರಾರು ಮುಸ್ಲಿಮರು ರಾಯರ ದರ್ಶನ ಪಡೆಯುವ ಮೂಲಕ ರಂಜಾನ್‌ ಆಚರಿಸುತ್ತಾರೆ.

ಇದನ್ನೂ ಓದಿ | Eid Mubarak: ಸಮಾಜದಲ್ಲಿ ಸೌಹಾರ್ದತೆಯ ಮನೋಭಾವ ಹೆಚ್ಚಲಿ; ಈದ್​ ಉಲ್​ ಫಿತರ್​ ಶುಭಾಶಯ ಕೋರಿದ ಪ್ರಧಾನಿ ಮೋದಿ

ಕೊಪ್ಪಳದಲ್ಲಿ ಮುಸ್ಲಿಂರಿಂದ ಸಾಮೂಹಿಕ ಪ್ರಾರ್ಥ‌ನೆ

ಕೊಪ್ಪಳ: ನಗರಸಭೆ ಸಮೀಪದ ಈದ್ಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ್, ಜೆಡಿಎಸ್ ಅಭ್ಯರ್ಥಿ ಸಿ.ವಿ.ಚಂದ್ರಶೇಖರ್, ಬಿಜೆಪಿಯ ಅಮರೇಶ ಕರಡಿ, ಮಾವ ಸಂಸದ ಕರಡಿ ಸಂಗಣ್ಣ ಅವರು ಮುಸ್ಲಿಂ ಬಾಂಧವರಿಗೆ ರಂಜಾನ್ ಶುಭಾಶಯ ಕೋರಿದರು.‌

ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ರಂಜಾನ್

ಉಡುಪಿ: ಜಿಲ್ಲೆಯಾದ್ಯಂತ ಮುಸ್ಲಿಂ ಸಮುದಾಯದವರು ಈದ್ ಉಲ್ ಫಿತರ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ನಗರ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರ್, ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಜ್ ನೆರವೇರಿಸಲಾಯಿತು.

ಮುಸ್ಲಿಮರು ಬೆಳಗ್ಗೆ ಅರ್ಹರಿಗೆ ಫಿತರ್ ಝಕಾತ್ (ದಾನ) ನೀಡಿದ ಬಳಿಕ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಜ್ ಮಾಡಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಜ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಉಡುಪಿ ಜಾಮಿಯಾ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನಾ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್ ನಮಾಜ್ ನಿರ್ವಹಿಸಲಾಯಿತು. ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಜ್ ಮತ್ತು ಖುತ್ಬಾ ಪಾರಾಯಣ ನಡೆಯಿತು.

ಇದನ್ನೂ ಓದಿ | Eid Ul Fitr 2023: ರಾಜ್ಯದ ವಿವಿಧೆಡೆ ಈದ್‌ ಉಲ್‌ ಫಿತರ್‌ ಆಚರಣೆ; ಶ್ರದ್ಧಾ ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಮರು

ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಧರ್ಮಗುರು ಮೌಲಾನಾ ಕರಾರ್ ಹುಸೇನ್ ನೇತೃತ್ವದಲ್ಲಿ ಈದ್ ವಿಶೇಷ ನಮಾಜ್ ನೆರವೇರಿಸಲಾಯಿತು. ಗಂಗೊಳ್ಳಿಯ ಜುಮ್ಮಾ ಮಸೀದಿಯಲ್ಲಿ ಮೌಲಾನಾ ಮುಝಮ್ಮಿಲ್ ನದ್ವಿ, ಮೋಹಿದೀನ್ ಜುಮ್ಮಾ ಮಸೀದಿಯಲ್ಲಿ ಖತೀಬ್ ಮೌಲಾನ ಅಬ್ದುಲ್ ಕರೀಂ ನದ್ವಿ, ಶಾಹಿ ಜುಮ್ಮಾ ಮಸೀದಿಯಲ್ಲಿ ಮೌಲಾನಾ ಅಬ್ದುಲ್ ಮತಿನ್ ಸಿದ್ದಿಕಿ ಅವರ ನೇತೃತ್ವದಲ್ಲಿ ವಿಶೇಷ ನಮಾಝ್ ನಿರ್ವಹಿಸಲಾಯಿತು. ಇದರಲ್ಲಿ ನೂರಾರು ಮಂದಿ ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಧರ್ಮಗುರುಗಳು ಈದ್ ಸಂದೇಶ ನೀಡಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಿದರು. ನೆಲದ ಕಾನೂನನ್ನು ಗೌರವಿಸಿ ಶಾಂತಿಯ ವಾತಾವರಣ ಕಾಪಾಡುವಂತೆ ಕರೆ ನೀಡಿದರು. ಹಬ್ಬದ ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.

Exit mobile version