Site icon Vistara News

Ram Mandir: ರಾಮ ಮಂದಿರ ಉದ್ಘಾಟನೆಗೆ ಹೋಗ್ತಾರಾ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ?

kharge sonia

kharge sonia

ನವದೆಹಲಿ: 2024ರ ಜನವರಿ 22ರಂದು ಅಯೋಧ್ಯೆಯ (Ayodhya) ರಾಮಮಂದಿರ (Ram Mandir)ದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಹಾಗೂ ಮಂದಿರದ ಉದ್ಘಾಟನೆ ನಡೆಯಲಿದ್ದು, ಇದಕ್ಕಾಗಿ ಸಿದ್ಧತೆ ನಡಯುತ್ತಿದೆ. ದೇಶದ ಗಣ್ಯರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿದೆ. ಇದೀಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಲೋಕಸಭೆಯ ಕಾಂಗ್ರೆಸ್‌ ನಾಯಕ ಅಧೀರ್ ರಂಜನ್ ಚೌಧರಿ (Mallikarjun Kharge, Sonia Gandhi, Adhir Ranjan Chowdhury) ಅವರಿಗೆ ಆಹ್ವಾನ ಪತ್ರಿಕೆ ಕಳುಹಿಸಲಾಗಿದೆ.

ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡ ಅವರನ್ನೂ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಆಹ್ವಾನಿಸಿದೆ. ಆದರೆ ಹಿರಿಯ ಕಾಂಗ್ರೆಸ್ ನಾಯಕರು ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆಯಿಲ್ಲ ಎಂದು ವರದಿಗಳು ತಿಳಿಸಿವೆ.

ಮುಂದಿನ ಕೆಲವು ದಿನಗಳಲ್ಲಿ ಇನ್ನೂ ಹೆಚ್ಚಿನ ವಿರೋಧ ಪಕ್ಷದ ನಾಯಕರನ್ನು ಆಹ್ವಾನಿಸುವ ಸಾಧ್ಯತೆಯಿದೆ. ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜಿವಾಲ್, ಬಿಎಸ್‌ಪಿ ನಾಯಕಿ ಮಾಯಾವತಿ, ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ ಮತ್ತು ಸಿಪಿಐನ ಡಿ ರಾಜಾ ಸೇರಿದಂತೆ ರಾಜಕೀಯ ಪಕ್ಷಗಳ ಮುಖ್ಯಸ್ಥರನ್ನು ರಾಮ ಮಂದಿರ ಕಾರ್ಯಕ್ರಮಕ್ಕೆ ಆಹ್ವಾನಿಸುವ ಸಾಧ್ಯತೆಯಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 1,800 ಕೋಟಿ ರೂ.ಗಳ ವೆಚ್ಚದಲ್ಲಿ ರಾಮ ಮಂದಿರದ ಸಂಕೀರ್ಣ ನಿರ್ಮಿಸಲಾಗುತ್ತಿದೆ.

1990ರ ದಶಕದಲ್ಲಿ ರಾಮ ಮಂದಿರ ಚಳವಳಿಯ ಮುಂಚೂಣಿಯಲ್ಲಿದ್ದ ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ಆರೋಗ್ಯ ಮತ್ತು ವಯಸ್ಸಿನ ಕಾರಣದಿಂದಾಗಿ ಈ ಕಾರ್ಯಕ್ರಮದಿಂದ ದೂರವಿರಲು ವಿನಂತಿಸಲಾಗಿದೆ ಎಂದು ದೇವಾಲಯದ ಟ್ರಸ್ಟ್ ಕೆಲವು ದಿನಗಳ ಹಿಂದೆ ತಿಳಿಸಿತ್ತು. ಬಳಿಕ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಅವರಿಬ್ಬರನ್ನೂ ಆಹ್ವಾನಿಸಲಾಗಿದೆ ಎಂದು ಸ್ಪಷ್ಟನೆ ನೀಡಿತ್ತು. ದೇವಾಲಯದ ಟ್ರಸ್ಟ್ ಸಂತರು, ವಿಜ್ಞಾನಿಗಳು, ಸೇನಾಧಿಕಾರಿಗಳು, ಪದ್ಮ ಪ್ರಶಸ್ತಿ ಪುರಸ್ಕೃತರು, ಕೈಗಾರಿಕೋದ್ಯಮಿಗಳು, ದಲೈ ಲಾಮಾ ಮತ್ತು ವಿವಿಧ ಕ್ಷೇತ್ರಗಳ ಇತರ ಗಣ್ಯ ವ್ಯಕ್ತಿಗಳನ್ನು ಆಹ್ವಾನಿಸಿದೆ.

ಇದನ್ನೂ ಓದಿ: Ram Mandir: 5000 ಅಮೆರಿಕನ್ ವಜ್ರದಿಂದ ರಾಮ ಮಂದಿರದ ನೆಕ್ಲೇಸ್ ತಯಾರಿಸಿದ ಸೂರತ್‌ನ ವ್ಯಾಪಾರಿ!

ಭರದ ಸಿದ್ಧತೆ

ಕಾರ್ಯಕ್ರಮಕ್ಕಾಗಿ ನಗರಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಈಗಾಗಲೇ ಸಿದ್ದತೆ ನಡೆಯುತ್ತಿದೆ. ಹೊಸ ಟೆಂಟ್ ಸಿಟಿಯನ್ನು ಸ್ಥಾಪಿಸಲಾಗಿದೆ. ಅಲ್ಲಿ ಆರು ಕೊಳವೆ ಬಾವಿಗಳನ್ನು ಸ್ಥಾಪಿಸಲಾಗಿದೆ ಮತ್ತು ಆರು ಅಡುಗೆ ಮನೆಗಳೊಂದಿಗೆ, ಹತ್ತು ಹಾಸಿಗೆಗಳ ಆಸ್ಪತ್ರೆಯನ್ನು ಸಹ ಸಿದ್ಧಪಡಿಸಲಾಗಿದೆ. ದೇಶಾದ್ಯಂತ ಸುಮಾರು 150 ವೈದ್ಯರು ಈ ಆಸ್ಪತ್ರೆಯಲ್ಲಿ ಸೇವೆಯನ್ನು ಒದಗಿಸಲಿದ್ದಾರೆ. ಜತೆಗೆ ವ್ಯಾಪಕ ಸುರಕ್ಷಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ರಾಮ ಮಂದಿರದ ‘ಪ್ರಾಣ ಪ್ರತಿಷ್ಠಾ’ ಕಾರ್ಯಕ್ರಮದ ಪ್ರಯುಕ್ತ ಸೂಕ್ತ ಕ್ರಮ ಕೈಗೊಳ್ಳಲು ಸ್ಥಳೀಯ ಅಧಿಕಾರಿಗಳು ಸಜ್ಜಾಗುತ್ತಿದ್ದಾರೆ. ಭದ್ರತಾ ಕ್ರಮಗಳನ್ನು ಹೆಚ್ಚಿಸುತ್ತಿದ್ದಾರೆ. ನಗರಾದ್ಯಂತ ಸಿಸಿ ಟಿವಿ ಕ್ಯಾಮೆರಾಗಳನ್ನು ಸ್ಥಾಪಿಸಲಾಗಿದೆ ಮತ್ತು ಭದ್ರತೆಯನ್ನು ಪರಿಶೀಲಿಸಲು ಡ್ರೋನ್‌ಗಳನ್ನು ಬಳಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

Exit mobile version