ಇಸ್ಲಾಮಾಬಾದ್: ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿ, ಮತ್ತೆ ಅಧಿಕಾರದ ಗದ್ದುಗೆ ಏರುವ ಕನಸು ಕಾಣುತ್ತಿದ್ದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಭಾರಿ ಹಿನ್ನಡೆಯಾಗಿದೆ. ಪಾಕಿಸ್ತಾನದ ಸರ್ಕಾರಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಬಹಿರಂಗಗೊಳಿಸಿದ ಪ್ರಕರಣದಲ್ಲಿ ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ (PTI) ಪಕ್ಷದ ಅಧ್ಯಕ್ಷರೂ ಆಗಿರುವ ಇಮ್ರಾನ್ ಖಾನ್ ಅವರಿಗೆ ರಾವಲ್ಪಿಂಡಿ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದರಿಂದಾಗಿ ಇಮ್ರಾನ್ ಖಾನ್ ಅವರು ಪಾಕಿಸ್ತಾನ ಚುನಾವಣೆಯಲ್ಲಿ ಸ್ಪರ್ಧಿಸುವುದು ದುಸ್ಸಾಧ್ಯವಾಗಿದೆ ಎಂದು ತಿಳಿದುಬಂದಿದೆ.
ಇಮ್ರಾನ್ ಖಾನ್ ಅವರು ಪ್ರಧಾನಿಯಾಗಿದ್ದಾಗ ಪಾಕಿಸ್ತಾನಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಯೊಂದನ್ನು ಅಮೆರಿಕಕ್ಕೆ ನೀಡಿದ್ದಾರೆ ಎಂಬ ಆರೋಪ ಇದೆ. ಇದಕ್ಕೆ ಸಂಬಂಧಿಸಿದಂತೆ ಅಫಿಶಿಯಲ್ ಸೀಕ್ರೆಟ್ಸ್ ಆ್ಯಕ್ಟ್ ಅನ್ವಯ ಇಮ್ರಾನ್ ಖಾನ್ ಹಾಗೂ ಮಾಜಿ ವಿದೇಶಾಂಗ ಸಚಿವ ಶಾ ಮಹ್ಮೂದ್ ಖುರೇಷಿ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಇಮ್ರಾನ್ ಖಾನ್ ಹಾಗೂ ಶಾ ಮಹ್ಮೂದ್ ಖುರೇಷಿ ಅವರಿಗೆ ತಲಾ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಇಮ್ರಾನ್ ಖಾನ್ ಅವರು ರಹಸ್ಯ ದಾಖಲೆಯನ್ನು ತನಿಖಾ ಸಂಸ್ಥೆಗಳಿಗೆ ವಾಪಸ್ ನೀಡಿಲ್ಲ ಎಂದು ಫೆಡರಲ್ ಏಜೆನ್ಸಿಯು ಕೋರ್ಟ್ ತಿಳಿಸಿದೆ. ಇದಾದ ಬಳಿಕ ಕೋರ್ಟ್ ಶಿಕ್ಷೆ ವಿಧಿಸಿದೆ.
Cypher Case: Former Pak PM Imran Khan, his top aide Qureshi sentenced to 10 years jail
— ANI Digital (@ani_digital) January 30, 2024
Read @ANI Story | https://t.co/ZRPqlcxiQA pic.twitter.com/7joJ8wwS1e
ಚುನಾವಣೆ ಆಯೋಗವು ಈಗಾಗಲೇ ಇಮ್ರಾನ್ ಖಾನ್ ಅವರಿಗೆ ಭಾರಿ ಶಾಕ್ ನೀಡಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಇಮ್ರಾನ್ ಖಾನ್ ಅವರು 2024ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸವಂತಿಲ್ಲ ಎಂದು ಪಾಕಿಸ್ತಾನ ಚುನಾವಣೆ ಆಯೋಗ (Election Commission of Pakistan) ಹೇಳಿದೆ. ಇಮ್ರಾನ್ ಖಾನ್ ಅವರು ಸಲ್ಲಿಸಿದ ನಾಮನಿರ್ದೇಶನಗಳನ್ನು ಪಾಕ್ ಚುನಾವಣೆ ಆಯೋಗವು ನಿರಾಕರಿಸಿದೆ. ಇದರ ಬೆನ್ನಲ್ಲೇ ಇಮ್ರಾನ್ ಖಾನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಇದನ್ನೂ ಓದಿ: Pakistan Election: ‘ಬ್ಯಾಟ್’ ವಂಚಿತ ಇಮ್ರಾನ್ ಖಾನ್ ಪಕ್ಷ! ಸುಪ್ರೀಂ ಕೋರ್ಟ್ ಹೇಳಿದ್ದೇನು?
ಇಮ್ರಾನ್ ಖಾನ್ ಅವರು ಪ್ರಧಾನಿಯಾಗಿದ್ದಾಗ ಪಾಕಿಸ್ತಾನದ ತೋಷಾಖಾನಾ (ಖಜಾನೆ)ಗೆ ಸೇರಬೇಕಾದ ಉಡುಗೊರೆಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡಿದ ಪ್ರಕರಣ ಎದುರಿಸುತ್ತಿದ್ದು, ಅವರಿಗೆ ಇಸ್ಲಾಮಾಬಾದ್ ನ್ಯಾಯಾಲಯವು ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದರಿಂದಾಗಿ ಇಮ್ರಾನ್ ಖಾನ್ ಅವರ ಸಂಸದ ಸ್ಥಾನವು ರದ್ದಾಗಿದೆ. ಅಲ್ಲದೆ, ಈಗಾಗಲೇ ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ಇಮ್ರಾನ್ ಖಾನ್ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಆಗುವುದಿಲ್ಲ. ಹಾಗಾಗಿ, ಚುನಾವಣೆ ಆಯೋಗವು ಅವರು ಸಲ್ಲಿಸಿದ ನಾಮನಿರ್ದೇಶನ ಪತ್ರಗಳನ್ನು ರಿಜೆಕ್ಟ್ ಮಾಡಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ