ಕೊಲಂಬೊ: ಆರ್ಥಿಕ ಸಂಕಷ್ಟದಿಂದ ನಲುಗಿದ ಶ್ರೀಲಂಕಾದಲ್ಲಿ ಈಗ ಅರಾಜಕತೆ ತಾಂಡವಾಡುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೇನೆ ಮತ್ತು ಪೊಲೀಸರಿಗೆ ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಸೂಚಿಸಿದ್ದಾರೆ.
ದೇಶವನ್ನು ಸಂಕಷ್ಟಕ್ಕೆ ತಳ್ಳಿದ ಆರೋಪ ಎದುರಿಸುತ್ತಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರು ದೇಶ ಬಿಟ್ಟು ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ ಬೆನ್ನಲ್ಲೇ ದೇಶದಲ್ಲಿ ಮತ್ತೆ ಪ್ರತಿಭಟನೆ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಅಗತ್ಯ ಎಲ್ಲ ಕ್ರಮ ತೆಗೆದುಕೊಳ್ಳುವಂತೆ ಅವರು ಸೇನೆಗೆ ಮತ್ತು ಪೊಲೀಸರಿಗೆ ಆದೇಶ ನೀಡಿದ್ದಾರೆ.
ಈ ನಡುವೆ ದೇಶದಲ್ಲಿನ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜಕೀಯ ಪಕ್ಷಗಳು ಒಮ್ಮತದ ತೀರ್ಮಾನಕ್ಕೆ ಬರಬೇಕಿದೆ ಎಂದು ಲಂಕಾ ಸೇನೆಯು ಹೇಳಿದೆ.
ಕಳೆದ ಶನಿವಾರ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರ ನಿವಾಸದ ಮೇಲೆ ದಾಳಿ ನಡೆಸಿದಂತೆಯೇ ಬುಧವಾರ ಕೂಡ ಉದ್ರಿಕ್ತ ಜನರು ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಕಚೇರಿಗೂ ನುಗ್ಗಿದ್ದರು. ಈ ಹಿಂದೆ ಅವರ ಖಾಸಗಿ ನಿವಾಸಕ್ಕೆ ಬೆಂಕಿ ಹಚ್ಚಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ನೂತನ ಅಧ್ಯಕ್ಷ ರನಿಲ್ ವಿಕ್ರಮ ಸಿಂಘೆ ಹೆಚ್ಚಿನ ಗಮನ ನೀಡಿದ್ದಾರೆ. ಸೇನೆ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ನಿರಂತರ ಸಭೆ ನಡೆಸುತ್ತಿದ್ದು, ಅಗತ್ಯ ಬಿದ್ದಲ್ಲಿ, ಬಲ ಪ್ರಯೋಗ ನಡೆಸುವಂತೆಯೂ ತಿಳಿಸಿದ್ದಾರೆ.
ಪ್ರತಿಭಟನಾಕಾರರನ್ನು ಎಲ್ಲ ಸರ್ಕಾರಿ ಕಚೇರಿಗಳಿಂದ ತೆರವುಗೊಳಿಸಿ, ಅವುಗಳನ್ನು ಮರು ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವನ್ನು ಸೇನೆಗೆ ಮತ್ತು ಪೊಲೀಸರಿಗೆ ನೀಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಬುಧವಾರ ಉದ್ರಿಕ್ತರು ಪ್ರಧಾನಿ ಕಾರ್ಯಾಲಯಕ್ಕೆ ನುಗ್ಗುವುದನ್ನು ತಡೆಯುವಲ್ಲಿ ಪೊಲೀಸರು ವಿಫಲರಾಗಿದ್ದರು.
ಗೊಟಬಯ ರಾಜಪಕ್ಸ ದೇಶ ಬಿಟ್ಟು ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ ಸುದ್ದಿ ಬಹಿರಂಗವಾಗುತ್ತಿದ್ದಂತೆಯೇ ದೇಶಾದ್ಯಂತ ಮತ್ತೆ ಪ್ರತಿಭಟನೆ ಭುಗಿಲೆದ್ದಿದೆ. ಈ ನಡುವೆ, ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಆದರೂ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿಲ್ಲ.
ಬುಧವಾರ ಉದ್ರಿಕ್ತ ಜನರು ಸರ್ಕಾರಿ ಟಿವಿಯ ಸ್ಟುಡಿಯೋಗೂ ನುಗ್ಗಿದ್ದರು. ಕಂಡ ಕಂಡ ಸರ್ಕಾರಿ ಕಚೇರಿಗೆ ತೆರಳಿ ಕೈಗೆ ಸಿಕ್ಕಿದ್ದನ್ನು ಒಡೆಯುತ್ತಾ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೊಲೊಂಬೊದಲ್ಲಿ ನಡೆದ ಈ ಹಿಂಸಾಚಾರದಲ್ಲಿ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಪರಿಸ್ಥಿತಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತೆಗೆದುಕೊಳ್ಳುವುದು ತಮ್ಮ ಆಧ್ಯತೆಯಾಗಿದೆ ಎಂದು ನೂತನ ಅಧ್ಯಕ್ಷರು ಪ್ರಕಟಿಸಿದ್ದು, ಸಂವಿಧಾನದ ಪ್ರಕಾರವೇ ಎಲ್ಲವೂ ನಡೆಯಬೇಕು ಎಂದು ರಕ್ಷಣಾಪಡೆಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ| Lanka on fire: ಶ್ರೀಲಂಕಾದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಘೋಷಣೆ, ರಾಜಪಕ್ಸ ಪಲಾಯನದ ಬೆನ್ನಲ್ಲೇ ಭುಗಿಲೆದ್ದ ಪ್ರತಿಭಟನೆ