ಬೆಂಗಳೂರು : ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಲು, 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಉದ್ದೇಶಿಸಿರುವ ಶಿಕ್ಷಣ ಇಲಾಖೆಯು, ನೇಮಕಾತಿಯನ್ನು ಕೂಡಲೇ ನಡೆಸಲು ಸಿದ್ಧತೆ ಮಾಡಿಕೊಂಡಿದೆ.
ನಿರೀಕ್ಷೆಯಂತೆಯೇ ದಸರಾದ ಸಂದರ್ಭದಲ್ಲಿ ಈ ನೇಮಕಾತಿಯ ಅಧಿಸೂಚನೆ ಪ್ರಕಟವಾಗಲಿದ್ದು, ಬರುವ ಡಿಸೆಂಬರ್ ಕೊನೆಯ ವಾರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಉದ್ದೇಶಿಸಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆದಷ್ಟು ಬೇಗ ಈ ನೇಮಕ ಪ್ರಕ್ರಿಯೆ ನಡೆಸಲು ಉದ್ದೇಶಿಸಲಾಗಿದೆ ಎಂದು ಶಿಕ್ಷಣ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.
ಈ ನೇಮಕಾತಿ ಮಾಡಿಕೊಳ್ಳುವ ಕುರಿತು ಸೆಪ್ಟೆಂಬರ್ 12ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ್ ಟ್ವೀಟ್ ಮಾಡಿ ತಿಳಿಸಿದ್ದರು. “2,200 ಸಹ ಶಿಕ್ಷಕರು, 200 ದೈಹಿಕ ಶಿಕ್ಷಣ ಶಿಕ್ಷಕರು ಮತ್ತು 100 ವಿಶೇಷ ಶಿಕ್ಷಕರನ್ನು (ಸಂಗೀತ, ಕಲೆ, ಇತರೆ) ನೇಮಕ ಮಾಡಿಕೊಳ್ಳಲಾಗುತ್ತದೆʼʼ ಎಂದು ಪ್ರಕಟಿಸಿದ್ದರು. ಅದರಂತೆಯೇ ಇಲಾಖೆಯು ನೇಮಕ ಪ್ರಕ್ರಿಯೆ ನಡೆಸಲು ಸಿದ್ಧತೆ ಮಾಡಿಕೊಂಡಿದೆ.
ಈ ಬಗ್ಗೆ ಮಾತನಾಡಿದ್ದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, 2016ರ ನಂತರ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ ನಡೆದಿರಲಿಲ್ಲ. ಇದರಲ್ಲಿ ವಿಶೇಷವಾಗಿ ದಶಕದ ಬಳಿಕ ಕ್ರೀಡಾ ಶಿಕ್ಷಕರ ನೇಮಕಾತಿ ಮಾಡಲಾಗುತ್ತಿದೆ. ಕ್ರೀಡೆ ಮತ್ತು ಕಲೆ ಕ್ಷೇತ್ರಗಳಿಗೆ ಒತ್ತು ನೀಡುವ ನಿಟ್ಟಿನಲ್ಲಿ ವಿಶೇಷ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದರು.
ಈ ನೇಮಕಾತಿಯಲ್ಲಿ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ಆಯಾ ಜಿಲ್ಲೆಯ ಉಪನಿರ್ದೇಶಕರಿಗೆ ವಹಿಸಲಾಗಿದೆ. ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸೆಪ್ಟೆಂಬರ್ 21 ರಂದೇ ಸುತ್ತೋಲೆ ಹೊರಡಿಸಿದ್ದಾರೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಈಗಾಗಲೇ ಹುದ್ದೆಗಳ ಸಂಖ್ಯೆಯ ಕುರಿತು ಅಂತಿಮ ತೀರ್ಮಾನವಾಗಿದೆ. ಹೀಗಾಗಿ ಹೆಚ್ಚಾಗುವ ಸಾಧ್ಯತೆಗಳಿಲ್ಲ ಎಂದು ಇಲಾಖೆಯ ಅಧಿಕಾರಿಗಳು “ವಿಸ್ತಾರ ನ್ಯೂಸ್ʼʼಗೆ ತಿಳಿಸಿದ್ದಾರೆ.
ಅರ್ಜಿ ಆಹ್ವಾನಿಸಲಾಗುವ ವೆಬ್‌ಸೈಟ್ ವಿಳಾಸ: https://www.schooleducation.kar.nic.in
ಸದ್ಯ ಆರು ಸಾವಿರಕ್ಕೂ ಹೆಚ್ಚಿನ ಅತಿಥಿ ಶಿಕ್ಷಕರು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಮತ್ತೆ ಮುಂದಿನ ವರ್ಷವೂ ನೇಮಕ ಮಾಡಿಕೊಳ್ಳುವುದು ಅನಿವಾರ್ಯವಾಗಲಿದೆ. ಅಲ್ಲದೆ, ಕಳೆದ 10 ವರ್ಷಗಳಿಂದ ದೈಹಿಕ ಶಿಕ್ಷಕರನ್ನು ನೇಮಕ ಮಾಡಿಕೊಂಡಿರಲಿಲ್ಲ. ಹೀಗಾಗಿ ಬಹಳಷ್ಟು ಅಭ್ಯರ್ಥಿಗಳು ಈ ನೇಮಕ ಪ್ರಕ್ರಿಯೆ ಎಂದು ಆರಂಭವಾಗುತ್ತದೆ ಎಂದು ಎದುರು ನೋಡುತ್ತಿದ್ದರು. ಇತ್ತೀಚೆಗೆ ರಾಜ್ಯ ಸರ್ಕಾರವು ಗರಿಷ್ಠ ವಯೋಮಿತಿಯನ್ನು ಸಡಿಲಿಕೆ ಮಾಡಿದ್ದು, ಪರಿಶಿಷ್ಟ ಜಾತಿ, ಪರಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 47 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 45 ವರ್ಷ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 42 ವರ್ಷ ಎಂದು ನಿಗದಿಪಡಿಸಿದೆ.
ಇದನ್ನೂ ಓದಿ | ದಸರಾ ಸಿಹಿ ಸುದ್ದಿ | 2,500 ಪ್ರೌಢ ಶಾಲಾ ಶಿಕ್ಷಕರ ನೇಮಕಕ್ಕೆ ಸರ್ಕಾರ ತೀರ್ಮಾನ, ಶೀಘ್ರವೇ ಪ್ರಕ್ರಿಯೆ ಆರಂಭ