ಬೆಂಗಳೂರು: ರಾಜ್ಯ ಸರ್ಕಾರಿ ಹುದ್ದೆಗಳ ನೇಮಕ ಪ್ರಕ್ರಿಯೆಯಲ್ಲಿ ಮಹತ್ತರ ಬದಲಾವಣೆ ತರಲಾಗಿದೆ. ಇನ್ನು ಮುಂದೆ ಕಲ್ಯಾಣ ಕರ್ನಾಟಕದ (ಹೈದರಾಬಾದ್ ಕರ್ನಾಟಕ) ಹುದ್ದೆಗಳ ನೇಮಕಕ್ಕೆ ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಿ, ಪ್ರತ್ಯೇಕ ನೇಮಕ ಪ್ರಕ್ರಿಯೆ ನಡೆಸಲಾಗುತ್ತದೆ.
ಈ ಸಂಬಂಧ ರಾಜ್ಯ ಸರ್ಕಾರ ಜೂನ್ ೧೫ರಂದು ಆದೇಶ ಹೊರಡಿಸಿದ್ದು, ಎಲ್ಲ ನೇಮಕಾತಿ ಪ್ರಾಧಿಕಾರಗಳು ಈ ಆದೇಶವನ್ನು ಪಾಲಿಸಬೇಕೆಂದು ಸೂಚಿಸಲಾಗಿದೆ.
ಇದುವರೆಗೆ ೨೦೨೦ರ ಜೂನ್‌ನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ಪ್ರಕಾರ ಒಂದೇ ಅಧಿಸೂಚನೆಯಲ್ಲಿ ಮಿಕ್ಕುಳಿದ ವೃಂದ ಮತ್ತು ಸ್ಥಳೀಯ ವೃಂದ ಎಂದು ಹುದ್ದೆಗಳನ್ನು ವಿಭಾಗಿಸಿ, ನೇಮಕ ಪ್ರಕ್ರಿಯೆ ನಡೆಸಲಾಗುತ್ತಿತ್ತು. ಒಂದೇ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಿ, ಒಂದೇ ಸ್ಪರ್ಧಾತ್ಮಕ ಪರೀಕ್ಷೆ, ಸಂದರ್ಶನದ ಮೂಲಕ ನೇಮಕ ನಡೆಯುತ್ತಿತ್ತು. ಅಭ್ಯರ್ಥಿಗಳು ತಮ್ಮ ಇಚ್ಛೆಯಂತೆ ಸ್ಥಳೀಯ ಅಥವಾ ಮಿಕ್ಕುಳಿದ ವೃಂದವನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತಿತ್ತು.
ಇದರಿಂದ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಸ್ಥಳೀಯ ಜನಪ್ರತಿನಿಧಿಗಳು ದೂರಿದ್ದರು. ಈ ಹಿನ್ನೆಲೆಯಲ್ಲಿ ಈ ಬಗ್ಗೆ ತೀರ್ಮಾನಿಸಲು ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿಯು ಕಳೆದ ಮೇ ೭ರಂದು ನಡೆಸಿದ ಸಭೆಯಲ್ಲಿನ ತೀರ್ಮಾನದಂತೆ ಈಗ ಸರ್ಕಾರ ಈ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶ ಹೀಗಿದೆ;
ಮಿಕ್ಕುಳಿದ ವೃಂದ ಮತ್ತು ಸ್ಥಳೀಯ ವೃಂದದ ಹುದ್ದೆಗಳಿಗೆ ಒಂದೇ ಅಧಿಸೂಚನೆ ಹೊರಡಿಸಬೇಕೆಂದು ೨೦೨೦ರ ಜೂನ್ ೬ರಂದು ಹೊರಡಿಸಲಾಗಿದ್ದ ಸುತ್ತೋಲೆಯನ್ನು ಹಿಂದಕ್ಕೆ ಪಡೆಯಲಾಗಿದೆ.
ಕೆಎಎಸ್‌ಗೆ ಒಂದೇ ಅಧಿಸೂಚನೆ
ಗೆಜೆಟೆಡ್ ಪ್ರೊಭೆಷನರಿ ಹುದ್ದೆಗಳ ನೇಮಕಕ್ಕೆ ಈ ಆದೇಶದಿಂದ ವಿನಾಯಿತಿ ನೀಡಲಾಗಿದೆ. ಕೆಎಎಸ್ ಹುದ್ದೆಗಳ ನೇಮಕಕ್ಕೆ ಒಂದೇ ಅಧಿಸೂಚನೆ ಹೊರಡಿಸಲಾಗುತ್ತದೆ. ಒಂದೇ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ. ಆದರೆ ಅರ್ಜಿ ಸಲ್ಲಿಸುವಾಗಲೇ ಅಭ್ಯರ್ಥಿಯು ಯಾವ ವೃಂದದ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬ ಸ್ಪಷ್ಟ ಮಾಹಿತಿಯನ್ನು ಅಭ್ಯರ್ಥಿಗಳಿಂದ ಪಡೆದುಕೊಳ್ಳುವಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಈ ಆದೇಶದಲ್ಲಿ ಸೂಚಿಸಲಾಗಿದೆ.
ಈಗಾಗಲೇ ಜಾರಿಯಲ್ಲಿರುವ ನೇಮಕ ಪ್ರಕ್ರಿಯೆಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ. ಅವು ಈ ಹಿಂದಿನ ಅಧಿಸೂಚನೆಯಂತೆಯೇ ನಡೆಯಲಿವೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಇದನ್ನೂ ಓದಿ | ಸರ್ಕಾರದ ಹೊರಗುತ್ತಿಗೆ ಹುದ್ದೆಗಳಲ್ಲಿಯೂ ಮಹಿಳೆಯರಿಗೆ ಶೇ.33 ಮೀಸಲು ಜಾರಿ