ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ (Job News) ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. 1000 ಗ್ರಾಮ ಲೆಕ್ಕಾಧಿಕಾರಿಗಳನ್ನು (Village Accountant) ಶೀಘ್ರ ನೇಮಕ ಮಾಡಿಕೊಳ್ಳಲು ಮುಂದಾಗಿದೆ. ಈ ಬಗ್ಗೆ ಸ್ವತಃ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ತಿಳಿಸಿದ್ದಾರೆ. 10,450 ಗ್ರಾಮ ಸಹಾಯಕರ ಹುದ್ದೆಗಳನ್ನು ಮಿತವೇತನದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವುದಲ್ಲದೆ, ಮಾಸಿಕ ವೇತನದಲ್ಲಿಯೂ (Monthly Salary) ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕಂದಾಯ ಇಲಾಖೆಯ ಕೆಲಸಗಳಿಗೆ ಮತ್ತಷ್ಟು ವೇಗ ನೀಡುವ ಹಾಗೂ ಜನರಿಗೆ ಸರಳ-ಸುಲಭ ಆಡಳಿತ ನೀಡುವ ನಿಟ್ಟಿನಲ್ಲಿ 1000 ಗ್ರಾಮ ಲೆಕ್ಕಾಧಿಕಾರಿಗಳನ್ನು ಶೀಘ್ರ ನೇಮಕ ಮಾಡಲಾಗುವುದು ಎಂದು ಈ ಹಿಂದೆ ಬೆಳಗಾವಿಯ ಚಳಿಗಾಲದ ಅಧಿವೇಶದಲ್ಲಿ ನಾನು ಕರ್ನಾಟಕದ ಜನತೆಗೆ ಮಾತು ನೀಡಿದ್ದೆ. ನೀಡಿದ ಮಾತಿನಂತೆ ಕಳೆದ ವಾರ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ನ್ಯಾಯ ಸಮ್ಮತವಾಗಿ ಪರೀಕ್ಷೆ ನಡೆಸಿ ಅರ್ಹರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಗೌರವಧನ ಹೆಚ್ಚಳಕ್ಕೆ ನಿರ್ಧಾರ
ಇದೀಗ ಇಲಾಖೆಯಲ್ಲಿ ಮತ್ತಷ್ಟು ಸುಧಾರಣಾ ಕೆಲಸಕ್ಕೆ ಮುಂದಾಗಿದ್ದು, ಹೆಚ್ಚುವರಿ ಗ್ರಾಮ ಸಹಾಯಕರ ನೇಮಕಾತಿಯ ಜೊತೆಗೆ ಅವರ ಗೌರವಧನವನ್ನೂ ಹೆಚ್ಚಿಸಲು ನಿರ್ಧರಿಸಲಾಗಿದೆ. ಗ್ರಾಮ ಸಹಾಯಕರಿಗೆ ಗೌರವಧನ ಹೆಚ್ಚಳ, ಸೇವಾ ಭದ್ರತೆ ಹಾಗೂ ‘ಡಿ ದರ್ಜೆ ನೌಕರರೆಂದು ಪರಿಗಣಿಸುವ ಸಂಬಂಧ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಪ್ರಸ್ತಾವನೆ ಪರಿಶೀಲನೆಯಲ್ಲಿದೆ.
ವೇತನ ಪರಿಷ್ಕರಣೆಗೆ ಆರ್ಥಿಕ ಇಲಾಖೆ ಒಪ್ಪಿಗೆ
ಕಂದಾಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 10,450 ಗ್ರಾಮ ಸಹಾಯಕರ ಹುದ್ದೆಗಳನ್ನು ಮಿತವೇತನದ ಆಧಾರದ ಮೇಲೆ ತಾತ್ಕಾಲಿಕವಾಗಿ ಮಂಜೂರು ಮಾಡಲಾಗಿದ್ದು, ಕಂದಾಯ ಇಲಾಖೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ 9903 ಗ್ರಾಮ ಸಹಾಯಕರ ಮಿತವೇತನವನ್ನು ದಿನಾಂಕ:1.4.2024 ರಿಂದ ಅನ್ವಯವಾಗುವಂತೆ ಮಾಸಿಕ ರೂ.13,000/- ಗಳಿಂದ ರೂ.15,000/- ಗಳಿಗೆ ಪರಿಷ್ಕರಿಸಲು ಆರ್ಥಿಕ ಇಲಾಖೆಯು ಸಹಮತಿ ನೀಡಿದೆ.
ಇದನ್ನೂ ಓದಿ: Kannada signboard rules: ಕನ್ನಡ ಬೋರ್ಡ್ ಕಡ್ಡಾಯ; ಡೆಡ್‌ಲೈನ್ ಮುಗೀತು, ಅಂಗಡಿ ಬಂದ್ ಮಾಡ್ತೇವೆ ಎಂದ ಬಿಬಿಎಂಪಿ!
ಡಿ ದರ್ಜೆ ನೌಕರರೆಂದು ಸದ್ಯಕ್ಕೆ ಪರಿಗಣಿಸಲ್ಲ
ಮುಂದುವರಿದು, ಗ್ರಾಮ ಸಹಾಯಕರಿಗೆ ಸೇವಾ ನಿಯಮಾವಳಿಯನ್ನು ರೂಪಿಸಿ ಸೇವಾ ಭದ್ರತೆಯನ್ನು ನೀಡುವ ಬಗ್ಗೆ ಇಲಾಖೆಯ ಹಂತದಲ್ಲಿ ಪರಿಶೀಲಿಸಿ, ಇದೇ ರೀತಿ ಗೌರವಧನ (ಸಂಚಿತ ವೇತನ) ಪಡೆಯುತ್ತಿರುವ ನೌಕರರುಗಳಿಗೆ ಇತರೆ ಇಲಾಖೆಗಳಲ್ಲಿ ಸೇವಾ ಭದ್ರತೆಗಾಗಿ ಯಾವ ರೀತಿ ನಿಯಮಾವಳಿ ರೂಪಿಸಿದ್ದಾರೆ ಎಂಬುದನ್ನು ಪರಿಶೀಲಿಸಿ ನಿರ್ದಿಷ್ಟ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಆರ್ಥಿಕ ಇಲಾಖೆ ತಿಳಿಸಿದೆ. ಗ್ರಾಮ ಸಹಾಯಕರನ್ನು ಡಿ ದರ್ಜೆ ನೌಕರರೆಂದು ಪರಿಗಣಿಸುವ ಪ್ರಸ್ತಾವನೆಯನ್ನು ಸದ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ಪರಿಗಣಿಸಲು ಸಾಧ್ಯವಿಲ್ಲವೆಂದು ಆರ್ಥಿಕ ಇಲಾಖೆ ತಿಳಿಸಿದೆ.