ಬೆಂಗಳೂರು: 15 ಸಾವಿರ ಶಿಕ್ಷಕರ ನೇಮಕಕ್ಕಾಗಿ( Teacher Recruitment ) ನಾಳೆಯಿಂದ ಅಂದರೆ ಮೇ 21 ಮತ್ತು 22 ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯು ಸಕಲ ಸಿದ್ಧತೆ ಮಾಡಿಕೊಂಡಿದೆ.
ಇತ್ತೀಚೆಗೆ ಪಿಎಸ್‌ಐ ಸೇರಿದಂತೆ ವಿವಿಧ ಸರ್ಕಾರಿ ಹುದ್ದೆಗಳ ನೇಮಕಕ್ಕೆ ನಡೆದ ಲಿಖಿತ ಪರೀಕ್ಷೆಗಳಲ್ಲಿ ಅಕ್ರಮ ನಡೆದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಶಿಕ್ಷಕರ ನೇಮಕ ಪರೀಕ್ಷೆಯನ್ನು ಬಹಳ ಎಚ್ಚರಿಕೆಯಿಂದ ನಡೆಸಲಾಗುತ್ತಿದೆ.
ಯಾವುದೇ ಕಾರಣಕ್ಕೂ ಅಕ್ರಮಗಳಿಗೆ ಅವಕಾಶ ನೀಡಬೇಡಿ. ಆಧುನಿಕ ತಂತ್ರಜ್ಞಾನ ಬಳಸಿ ಅಕ್ರಮ ನಡೆಸುವುದನ್ನು ತಡೆಯಲು ವೈಜ್ಞಾನಿಕ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯವೇ ಸೂಚನೆ ನೀಡಿರುವುದರಿಂದ ಈ ಬಗ್ಗೆಯೂ ಇಲಾಖೆ ಗಮನ ನೀಡಿದೆ ಎಂದು ಅಧಿಕಾರಿಯೊಬ್ಬರು ʼವಿಸ್ತಾರ ನ್ಯೂಸ್ʼ ಗೆ ತಿಳಿಸಿದ್ದಾರೆ.
ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಬಳಸಲಾಗುತ್ತಿದೆ. ಅಕ್ರಮ ತಡೆಗೆ ಜಿಲ್ಲಾ ಮಟ್ಟದಲ್ಲಿ ಉನ್ನತ ಸಮಿತಿಯನ್ನು ರಚಿಸಲಾಗಿದ್ದು, ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯಾನಿರ್ವಹಣಾಧಿಕಾರಿಗಳು ಈ ಸಮಿತಿಯಲ್ಲಿರುತ್ತಾರೆ. ಅಕ್ರಮ ನಡೆಯದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹಿರಿಯ ಅಧಿಕಾರಿಗಳಿಗೆ ವಹಿಸಲಾಗಿದೆ.
ಎರಡು ಬಾರಿ ತಪಾಸಣೆ
ಅಭ್ಯರ್ಥಿಗಳು ಪರೀಕ್ಷೆಯ ಆರಂಭದ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಿರಬೇಕೆಂದು ಸೂಚಿಸಲಾಗಿದೆ. ಎಲ್ಲ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದಲ್ಲಿ ಎರಡು ಬಾರಿ ತಪಾಸಣೆಗೊಳಪಡಿಸಲಾಗುತ್ತದೆ. ಮೊದಲಿಗೆ ಪೊಲೀಸ್ ಸಿಬ್ಬಂದಿ ತಪಾಸಣೆ ನಡೆಸಿದರೆ, ಎರಡನೇ ಬಾರಿಗೆ ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮುನ್ನ ಕೊಠಡಿ ಮೇಲ್ವಿಚಾರಕರು ತಪಾಸಣೆ ನಡೆಸಲಿದ್ದಾರೆ.
ಈ ತಪಾಸಣೆಗಳನ್ನು ನಡೆಸಬೇಕಾಗಿರುವ ಕಾರಣದಿಂದ ಪರೀಕ್ಷೆ ಪ್ರಾರಂಭವಾಗುವುದಕ್ಕಿಂತ ಅರ್ಧಗಂಟೆ ಮೊದಲು ಪರೀಕ್ಷಾ ಕೇಂದ್ರಗಳ ಪ್ರವೇಶ ಬಾಗಿಲನ್ನು ಮುಚ್ಚಲಾಗುತ್ತದೆ ಎಂದು ಇಲಾಖೆಯು ತಿಳಿಸಿದೆ.
ಹೀಗಾಗಿಯೇ ಅಭ್ಯರ್ಥಿಗಳಿಗೆ ʼʼ ಅಭ್ಯರ್ಥಿಯು ಪರೀಕ್ಷಾ ಕೇಂದ್ರಕ್ಕೆ ಪ್ರತೀ ಅಧಿವೇಶನದ ಪರೀಕ್ಷಾ ಪ್ರಾರಂಭದ ಅವಧಿಗಿಂತ ಒಂದು ಗಂಟೆ ಮುಂಚಿತವಾಗಿ ಹಾಜರಿರುವುದು ಕಡ್ಡಾಯʼʼ ಎಂದು ಸೂಚಿಸಲಾಗಿದೆ. ಕೈಗಡಿಯಾರ, ಮೊಬೈಲ್, ಕ್ಯಾಲ್‌ಕ್ಯುಲೇಟರ್, ಪೇಜರ್, ಬ್ಲೂಟೂತ್ ಹಾಗೂ ಇತರೆ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಮತ್ತು ಲಾಗ್‌ಟೇಬಲ್, ಬಿಳಿ ಫ್ಲೂಯಿಡ್, ಬೆಂಕಿ ಪೊಟ್ಟಣ ಅಥವಾ ಸಿಗರೇಟ್ ಲೈಟರ್ ಮುಂತಾದ ವುಸ್ತುಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ನಿಷೇಧಿಸಲಾಗಿದೆ.
ಅಕ್ರಮದ ಕುರಿತು ಮಾಹಿತಿ ಇದ್ದಲ್ಲಿ ಕೂಡಲೇ ಜಿಲ್ಲೆಯ ನೋಡಲ್ ಅಧಿಕಾರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಬೇಕೆಂದು ಅಭ್ಯರ್ಥಿಗಳಲ್ಲಿ ಕೋರಲಾಗಿದೆ. ನೋಡಲ್ ಅಧಿಕಾರಿಯ ದೂರವಾಣಿ ಸಂಖ್ಯೆಯನ್ನು ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ.
ಪರೀಕ್ಷೆಯ ವೇಳಾ ಪಟ್ಟಿ ಹೀಗಿದೆ
144 ಸೆಕ್ಷನ್ ಜಾರಿ
ಪರೀಕ್ಷಾ ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗುತ್ತಿದೆ. ರಾಜ್ಯದ 497 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯುತ್ತಿದ್ದು, 1.6 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುವ ಸಾಧ್ಯತೆಗಳಿವೆ. ಚಿಕ್ಕೋಡಿಯಲ್ಲಿ ಅತಿ ಹೆಚ್ಚು ಪರೀಕ್ಷಾ ಕೇಂದ್ರಗಳಿರಲಿವೆ. ಆ ಜಿಲ್ಲೆಯಲ್ಲಿ ಒಟ್ಟು 37 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, 11,119 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ನಂತರದ ಸ್ಥಾನ ರಾಯಚೂರು ಜಿಲ್ಲೆಯದ್ದಾಗಿದ್ದು, ಇಲ್ಲಿ 33 ಪರೀಕ್ಷಾ ಕೇಂದ್ರ ತೆರೆಯಲಾಗಿದೆ. ಯಾದಗಿರಿಯಲ್ಲಿ 28, ವಿಜಯನಗರದಲ್ಲಿ 13, ಬಾಗಲಕೋಟೆಯಲ್ಲಿ 22, ಬೆಳಗಾವಿಯಲ್ಲಿ 25 ಹಾಗೂ ಬೆಂಗಳೂರಿನಲ್ಲಿ 15 ಪರೀಕ್ಷಾ ಕೇಂದ್ರ ತೆರೆಯಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಇದನ್ನೂ ಓದಿ|ಶಿಕ್ಷಕರ ನೇಮಕಾತಿ ಪರೀಕ್ಷೆ: ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಿ
ಶನಿವಾರ ಮತ್ತು ಭಾನುವಾರ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಸಂಬಂಧಿಸಿದ ಸೂಚನೆಗಳನ್ನು ಇಲಾಖೆಯ ವೆಬ್‌ನಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಅದನ್ನು ಓದಿಕೊಂಡು ಪರೀಕ್ಷೆಗೆ ಹಾಜರಾಗಬೇಕೆಂದು ಇಲಾಖೆಯು ಕೋರಿದೆ.