Site icon Vistara News

KAS: ಕೆಎಎಸ್ ಪರೀಕ್ಷೆ ಬರೆಯುವವರಿಗೆ ಗುಡ್‌ನ್ಯೂಸ್‌; ಸರ್ಕಾರದ ಹೊಸ ಆದೇಶದಲ್ಲಿ ಏನಿದೆ?

Vistara editorial, Do not disrespectful to the Anthem of Karnataka

ಬೆಂಗಳೂರು: ಕೆಎಎಸ್ (KAS-ಕರ್ನಾಟಕ ನಾಗರಿಕ ಸೇವೆ) ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಶುಭ ಸುದ್ದಿಯೊಂದನ್ನು ಕರ್ನಾಟಕ ಸರ್ಕಾರ ನೀಡಿದೆ. ವಯೋಮಿತಿ ಸಡಿಲಿಕೆ ಮಾಡಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಯೋಮಿತಿ ಸಡಿಲಿಕೆ ಮಾಡಲು ಈ ಮಹತ್ವದ ನಿರ್ಧಾರಕ್ಕೆ ಒಪ್ಪಿಗೆ ನೀಡಲಾಯಿತು.

ಆದೇಶದಲ್ಲಿ ಏನಿದೆ?

ಕರ್ನಾಟಕ ಗೆಜೆಟೆಡ್‌ ಪ್ರೋಬೆಷನರ್ಸ್‌ (ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ) ನಿಯಮಗಳು 1997ರ ಅನ್ವಯ 2023-24ನೇ ಸಾಲಿಗೆ ಕರ್ನಾಟಕ ಲೋಕಸೇವಾ ಆಯೋಗವು ಹೊಸದಾಗಿ ಹೊರಡಿಸಲಿರುವ ಅಧಿಸೂಚನೆಯಲ್ಲಿ ಈಗಿರುವ ನಿಯಮಗಳ ಮೇಲೆ ಎಲ್ಲ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಒಂದು ಬಾರಿ ಗರಿಷ್ಠ ವಯೋಮಿತಿಯನ್ನು ಮೂರು ವರ್ಷಗಳಿಗೆ ಹೆಚ್ಚಿಸಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಈ ಆದೇಶದ ಪ್ರಕಾರ 2023-24ನೇ ಸಾಲಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ಸ್ಥಾನಗಳನ್ನು ತುಂಬಲು ಹೊರಡಿಸುವ ಅಧಿಸೂಚನೆಯಲ್ಲಿ ಅರ್ಹರಿರುವ ಎಲ್ಲ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಸೌಲಭ್ಯ ಲಭಿಸಲಿದೆ.

ಕಾರಣವೇನು?

ಕೆಲವು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ ಆಕಾಂಕ್ಷಿಗಳು ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಿ ಕೋವಿಡ್-19 ಸಾಂಕ್ರಾಮಿಕ ರೋಗ ಮತ್ತು ಇತರ ಕಾರಣದಿಂದ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗೆ ನೇಮಕಾತಿಗಾಗಿ 2021ನೇ ಸಾಲಿನಿಂದ ಪರೀಕ್ಷೆಯನ್ನು ನಡೆಸಿಲ್ಲ. ಆದ್ದರಿಂದ ಅನೇಕ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ ಆಕಾಂಕ್ಷಿಗಳು ನೇಮಕಾತಿಗಾಗಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಮೀರಿ ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ ಎಂದು ಹೇಳಿದ್ದರು. ಆದ್ದರಿಂದ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಹಾಜರಾಗಲು ಗರಿಷ್ಠ ವಯೋಮಿತಿಯನ್ನು ಸಡಿಲಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಈ ಅಂಶಗಳನ್ನು ಪರಿಶೀಲಿಸಿದ ಸರ್ಕಾರವು 2023-24ನೇ ಸಾಲಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಅಧಿಸೂಚಿಸಲ್ಪಡುವ ಗ್ರೂಪ್-ಎ ಮತ್ತು ಗ್ರೂಪ್-ಬಿ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ತುಂಬಲು ಹೊರಡಿಸುವ ಅಧಿಸೂಚನೆಗೆ ಮಾತ್ರ ಅನ್ವಯವಾಗುವಂತೆ, ಅರ್ಹವಿರುವ ಎಲ್ಲ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: Government Job: ತೆರಿಗೆ ಇಲಾಖೆಯಲ್ಲಿ ಅತಿ ಹೆಚ್ಚು ಗೆಜೆಟೆಡ್‌ ಹುದ್ದೆ; ಪ್ರವಾಸೋದ್ಯಮದಲ್ಲಿ ಎರಡೇ! ಶೀಘ್ರ ನೇಮಕ

ನೇಮಕಾತಿ ಅಧಿಸೂಚನೆ ಪ್ರಕಟವಾಗಿಲ್ಲ

ಸರ್ಕಾರ 2024ನೇ ಸಾಲಿನಲ್ಲಿ 276 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗಾಗಿ ಈಗಾಗಲೇ ತಯಾರಿ ನಡೆದಿದೆ. ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಯ ಒಪ್ಪಿಗೆಯೂ ಸಿಕ್ಕಿದ್ದು, ಈ ಕುರಿತು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಹ ಸಲ್ಲಿಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಈಚೆಗೆ ನಡೆದ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಹೇಳಿದ್ದರು. ಆದರೆ ಈ ಕುರಿತಾದ ಅಧಿಸೂಚನೆ ಯಾವಾಗ ಪ್ರಕಟವಾಗಲಿದೆ ಎನ್ನುವುದು ಸ್ಪಷ್ಟವಾಗಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

Exit mobile version