ಬೆಂಗಳೂರು: ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಕಾನ್ಸ್‌ಟೇಬಲ್‌ಗಳ ನೇಮಕಕ್ಕೆ ನಡೆಸಲಿರುವ ಪರೀಕ್ಷೆ (SSC Recruitment 2022)ಯನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ನಡೆಸುತ್ತಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೇದೆ ಆಯ್ಕೆಗೆ ಅರ್ಜಿ ಕರೆದಿರುವ ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ (ಎಸ್ಎಸ್‌ಸಿ) ಹಿಂದಿ, ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದೆ. ಹಾಗಾದರೆ, ಕನ್ನಡವೂ ಸೇರಿ ಇತರೆ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಅಭ್ಯರ್ಥಿಗಳು ಏನು ಮಾಡಬೇಕು? ಹಿಂದಿಗೆ ಬೆಣ್ಣೆ, ಕನ್ನಡಕ್ಕೆ ಸುಣ್ಣ!! ಇದೆಂಥಾ ನ್ಯಾಯ? ಎಂದು ಪ್ರಶ್ನಿಸಿದ್ದಾರೆ.
ಗಡಿ ಭದ್ರತಾ ಪಡೆ, ಕೇಂದ್ರೀಯ ಕೈಗಾರಿಕಾ ಪಡೆ, ಕೇಂದ್ರ ಪೊಲೀಸ್ ಮೀಸಲು ಪಡೆ, ಇಂಡೋ ಟಿಬೆಟಿಯನ್ ಗಡಿ ಪೊಲೀಸ್, ಸಶಸ್ತ್ರ ಸೀಮಾಬಲ, ಸಚಿವಾಲಯ ಭದ್ರತಾ ಪಡೆ, ಅಸ್ಸಾಂ ರೈಫಲ್ಸ್, ಮಾದಕ ವಸ್ತು ನಿಯಂತ್ರಣಾ ಇಲಾಖೆ ಸೇರಿ ಹಲವು ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಜನವರಿಯಲ್ಲಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಕೇವಲ ಹಿಂದಿ, ಇಂಗ್ಲಿಷ್‌ನಲ್ಲಿ ಮಾತ್ರ ಇರುತ್ತದೆ. ಅಲ್ಲಿಗೆ ಹಿಂದಿ ಭಾಷಿಕರು ಬಿಟ್ಟರೆ ಬೇರೆ ಯಾರೂ ಆಯ್ಕೆ ಆಗಲೇಬಾರದು ಎನ್ನುವ ಹುನ್ನಾರ ಇದರಲ್ಲಿ ಅಡಗಿದೆ ಎಂದು ಆಪಾದಿಸಿದ್ದಾರೆ.
ಕನ್ನಡದ ಕತ್ತು ಹಿಚುಕುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿರುವ ಬಿಜೆಪಿ ಸರಕಾರಕ್ಕೆ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ಮುಗಿಸಲೇಬೇಕು ಎನ್ನುವ ಹಪಾಹಪಿ, ತವಕ, ಹಠ ಉತ್ಕಟವಾಗಿದೆ ಎನ್ನುವುದಕ್ಕೆ ಇಲ್ಲಿದೆ ಹೊಸ ಸಾಕ್ಷಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ʻʻನನ್ನ ಅಭಿಪ್ರಾಯದಲ್ಲಿ, ಇದು ಕನ್ನಡ ವಿರೋಧಿ ಅಷ್ಟೇ ಅಲ್ಲ; ಭಾರತವನ್ನು ಉತ್ತರ, ದಕ್ಷಿಣ ಎಂದು ವಿಭಜಿಸಲು ಕೇಂದ್ರ ಬಿಜೆಪಿ ಸರಕಾರವೇ ಕೊಡುತ್ತಿರುವ ಕುಮ್ಮಕ್ಕುʼʼ ಎಂದೂ ಕಿಡಿ ಕಾರಿದ್ದಾರೆ.
ʻʻಕೇಂದ್ರದ ಬಿಜೆಪಿ ಸರಕಾರ ಈ ಅಪಾಯದ ಅರಿವು ಮಾಡಿಕೊಂಡು, ಕೂಡಲೇ ಈ ಕನ್ನಡ ವಿರೋಧಿ ಆದೇಶ ಹಿಂಪಡೆದು, ಹೊಸ ಆದೇಶ ಹೊರಡಿಸಿ ಕನ್ನಡವೂ ಸೇರಿ ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಇಲ್ಲವಾದರೆ, ಬೀದಿಗಿಳಿದು ಕನ್ನಡಿಗರ ಶಕ್ತಿ ಏನೆಂದು ತೋರಿಸಬೇಕಾಗುತ್ತದೆʼʼ ಎಂದು ಎಚ್‌ಡಿಕೆ ಎಚ್ಚರಿಕೆ ನೀಡಿದ್ದಾರೆ.
ʻʻಕೋಟಿ ಕಂಠ ಗಾಯನ ಎಂದರೆ ಕೋಟಿಗೂ ಹೆಚ್ಚು ಕನ್ನಡ ಕಂಠಗಳಿಗೆ ಜೀವ ತುಂಬುವುದು, ಅನ್ನದ ದಾರಿ ತೋರಿಸುವುದು, ಬದುಕಿನ ಖಾತರಿ ಕೊಡುವುದು. ಕೇವಲ ನಾಲಿಗೆ ಮೇಲೆ ಕನ್ನಡ ಎಂದು ಹೇಳಿ, ಮನದಾಳದಲ್ಲಿ ಅದೇ ಕನ್ನಡದ ಮೇಲೆ ವಿಷ ಕಕ್ಕುವುದಲ್ಲ. ಅದನ್ನು ಕನ್ನಡಿಗರು ಎಂದಿಗೂ ಸಹಿಸುವುದೂ ಅಲ್ಲʼʼ ಎಂದಿದ್ದಾರೆ ಕುಮಾರಸ್ವಾಮಿ.
ʻʻನಿನ್ನೆಯಷ್ಟೇ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಾಡಿದ ರಾಜ್ಯ ಬಿಜೆಪಿ ಸರಕಾರ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಏನು ಹೇಳುತ್ತದೆ? ಕೋಟಿ ಕಂಠ ಗಾಯನ ಎನ್ನುತ್ತಲೇ ಕನ್ನಡದ ಕತ್ತು ಸೀಳುವುದಾ? ಕನ್ನಡಿಗರ ಅನ್ನ ಕಸಿದುಕೊಳ್ಳುವುದಾ? ಕನ್ನಡಿಗರ ಹಕ್ಕುಗಳಿಗೆ ಮರಣಶಾಸನ ಬರೆಯುವುದಾ? ಕನ್ನಡಿಗರಿಗೆ ಬೇಕಿದೆ ಉತ್ತರʼʼ ಎಂದು ಕುಮಾರಸ್ವಾಮಿ ಹಕ್ಕೊತ್ತಾಯ ಮಂಡಿಸಿದ್ದಾರೆ.
ಇದನ್ನೂ ಓದಿ | SSC Recruitment 2022 | ಎಸ್‌ಎಸ್‌ಸಿಯಿಂದ 24,369 ಕಾನ್ಸ್‌ಟೇಬಲ್ ನೇಮಕ; SSLC ಆದವರಿಗೆ ಭರ್ಜರಿ ಅವಕಾಶ