ಬೆಂಗಳೂರು: 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8 ನೇ ತರಗತಿ) ನೇಮಕಾತಿಗೆ (Teacher Recruitment) ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯು 1:1 ಅನುಪಾತದಲ್ಲಿ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹೈ ಕೋರ್ಟ್ ಸೋಮವಾರ ರದ್ದು ಪಡಿಸಿದೆ.
ಆಯ್ಕೆ ಪಟ್ಟಿ ಸಿದ್ಧಪಡಿಸುವಾಗ ತಾವು ನೀಡಿದ್ದ ತಂದೆ ತಾಯಿಯ ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳಿಗೆ ಬದಲಾಗಿ ಪತಿಯ ಆದಾಯ ಮತ್ತು ಜಾತಿ ಪ್ರಮಾಣ ಪತ್ರವನ್ನು ಪರಿಗಣಿಸಿ ಆಯ್ಕೆ ಪಟ್ಟಿ ಸಿದ್ಧಪಡಿಸಿದ್ದನ್ನು ಪ್ರಶ್ನಿಸಿ ಕೆಲ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಏಕಸದಸ್ಯ ಪೀಠವು ಈ ತೀರ್ಪು ಪ್ರಕಟಿಸಿದೆ.
ಒಟ್ಟು 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8 ನೇ ತರಗತಿ) ಹುದ್ದೆಗಳಿಗೆ 13,363 ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಕಳೆದ ತಿಂಗಳು ಇಲಾಖೆ ತಾತ್ಕಾಲಿಕ ಆಯ್ಕೆ ಪಟ್ಟಿ ಸಿದ್ಧಪಡಿಸಿತ್ತು.
ಜಾತಿ ಹಾಗೂ ಆದಾಯ ಪ್ರಮಾಣಪತ್ರ ಸಲ್ಲಿಕೆಯಲ್ಲಿ ಗೊಂದಲ ಉಂಟಾದ ಕಾರಣ ೧:೧ ಅನುಪಾತದ ತಾತ್ಕಾಲಿಕ ಆಯ್ಕೆಪಟ್ಟಿಗೆ ತಡೆಯಾಜ್ಞೆ ನೀಡಬೇಕೆಂದು ಕೆಲ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆಗೆ ತಡೆಯಾಜ್ಞೆ ತಂದಿದ್ದರು.
ಶಿಕ್ಷಣ ಇಲಾಖೆಯ ನಿಯಮ ಕಾನೂನುಬಾಹಿರವೆಂದು ಅಭ್ಯರ್ಥಿಗಳಿ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ, ಶಿಕ್ಷಣ ಇಲಾಖೆಯ ಆಯ್ಕೆಪಟ್ಟಿ ರದ್ದುಪಡಿಸಿಸುವಂತೆ ಕೋರಿದ್ದರು. ಸೋಮವಾರ ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಎಂ. ನಾಗಪ್ರಸನ್ನರ ಪೀಠವು ಅಭ್ಯರ್ಥಿಗಳ ಪರವಾಗಿ ತೀರ್ಪು ನೀಡಿದ್ದು, ಈಗ ಇಲಾಖೆಯು ಹೊಸದಾಗಿ ಆಯ್ಕೆ ಪಟ್ಟಿ ಪ್ರಕಟಿಸಬೇಕಾಗಿದೆ.
ಈ ನೇಮಕಾತಿಗೆ ಸಂಬಂಧಿಸಿದಂತೆ ಕಳೆದ ಮೇ 21 ಮತ್ತು 22 ರಂದು ಲಿಖಿತ ಪರೀಕ್ಷೆ ನಡೆಸಿದ್ದು, ಆಗಸ್ಟ್ 17 ರಂದು ಫಲಿತಾಂಶ ಪ್ರಕಟಿಸಲಾಗಿತ್ತು. 15 ಸಾವಿರ ಹುದ್ದೆಗಳಿಗೆ ನಡೆದ ಈ ಪರೀಕ್ಷೆ ಬರೆಯಲು 1,16,223. ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಇವರಲ್ಲಿ ಶಿಕ್ಷಕ ಹುದ್ದೆಗೆ ಪರಿಗಣನೆಯಾಗಿರುವ ಅರ್ಜಿಗಳ ಸಂಖ್ಯೆ 68,849 ಮಾತ್ರ. ಪರೀಕ್ಷೆಗೆ ಶೇ.7ರಷ್ಟು ಅಭ್ಯರ್ಥಿಗಳು ಗೈರು ಹಾಜರಾಗಿದ್ದರು. 51,098 ಪರೀಕ್ಷೆ ಬರೆದು ಅರ್ಹತೆ ಪಡೆದಿದ್ದರು.
ಸೆಪ್ಟೆಂಬರ್‌ನಲ್ಲಿ 1:2 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿ ಪ್ರಕಟಿಸಲಾಗಿತ್ತು. ಈ ಪಟ್ಟಿಯಲ್ಲಿ 22,432 ಅಭ್ಯರ್ಥಿಗಳು ಸ್ಥಾನ ಪಡೆದಿದ್ದರು. ಅಕ್ಟೋಬರ್‌ನಲ್ಲಿ ಇವರ ದಾಖಲೆ ಪರಿಶೀಲನೆ ನಡೆಸಲಾಗಿತ್ತು. ಕಳೆದ ನವೆಂಬರ್‌ನಲ್ಲಿ ಅಂತಿಮವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿತ್ತು.
ಇದನ್ನೂ ಓದಿ : ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸಚಿವ ಸಂಪುಟದ ಮುಂದೆ ಪ್ರಸ್ತಾವನೆ