Site icon Vistara News

UPSC Recruitment 2023 : ಐಎಎಸ್‌, ಐಎಫ್‌ಎಸ್‌ ನೇಮಕಕ್ಕೆ ಅಧಿಸೂಚನೆ; ಈ ಬಾರಿ 1,105 ಹುದ್ದೆಗಳಿಗೆ ನೇಮಕ

UPSC Recruitment 2023

UPSC Recruitment 2023

ನವ ದೆಹಲಿ: ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‌ಸಿ) ಭಾರತೀಯ ನಾಗರಿಕ ಸೇವಾ ಅಧಿಕಾರಿ (ಐಎಎಸ್‌) ಮತ್ತು ಭಾರತೀಯ ಅರಣ್ಯ ಸೇವಾ ಅಧಿಕಾರಿ (ಐಎಫ್‌ಎಸ್‌) ಹುದ್ದೆಗಳ ನೇಮಕಕ್ಕೆ ಅಧಿಸೂಚನೆ (UPSC Recruitment 2023) ಹೊರಡಿಸಿದೆ. ದೇಶದ ಪ್ರತಿಷ್ಠಿತ ಪರೀಕ್ಷೆ ಎಂದೇ ಪರಿಗಣಿಸಲಾಗುತ್ತಿರುವ ಈ ಪರೀಕ್ಷೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 21 ಕೊನೆಯ ದಿನವಾಗಿದೆ.

ಈ ಹಿಂದೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅದನ್ನು ಹಿಂದಕ್ಕೆ ಪಡೆಯಲು ಅವಕಾಶ ನೀಡಲಾಗಿತ್ತು. ಆದರೆ ಈಗ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ತಮ್ಮ ಅರ್ಜಿಯನ್ನು ಹಿಂದಕ್ಕೆ ಪಡೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಈ ಬಾರಿ ಒಟ್ಟು 1,105 ಐಎಎಸ್‌ ಮತ್ತು 150 ಐಎಫಎಸ್‌ ಹುದ್ದೆಗಳಿಗೆ ನೇಮಕ ನಡೆಯಲಿದೆ. ಕಳೆದ ಕೆಲವು ವರ್ಷಗಳಿಗೆ ಹೋಲಿಸಿದಲ್ಲಿ ಈ ಬಾರಿ ಅತಿ ಹೆಚ್ಚು ಐಎಎಸ್‌ ಹುದ್ದೆಗಳಿಗೆ ನೇಮಕ ನಡೆಯುತ್ತಿದೆ. ಕಳೆದ ವರ್ಷ ಮೊದಲಿಗೆ ಕಡಿಮೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದರೂ ನಂತರ 1,011 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗಿತ್ತು. 2016 ರಲ್ಲಿ 1079 ಹುದ್ದೆಗಳಿಗೆ ನೇಮಕ ನಡೆದಿತ್ತು. 2017 ರಲ್ಲಿ 980, 2018 ರಲ್ಲಿ 782, 2019 ರಲ್ಲಿ 896 ಮತ್ತು 2020 ರಲ್ಲಿ 796 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗಿತ್ತು. 2021 ರಲ್ಲಿ ಕೇವಲ 712 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗಿತ್ತು. ಈ ಬಾರಿಯ ಹುದ್ದೆಗಳ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ರಾಜ್ಯದಲ್ಲಿ ಎಲ್ಲಿ ಪರೀಕ್ಷೆ?

ರಾಜ್ಯದಲ್ಲಿ ಬೆಂಗಳೂರು, ಧಾರವಾಡ ಮತ್ತು ಮೈಸೂರಿನಲ್ಲಿ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಮುಖ್ಯ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುತ್ತದೆ. ಎರಡೂ ಸೇವೆಗಳಿಗೂ ಒಂದೇ ಪೂರ್ವಭಾವಿ ಪರೀಕ್ಷೆಯ ಮೂಲಕ ಮುಖ್ಯ ಪರೀಕ್ಷೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಪೂರ್ವಭಾವಿ ಪರೀಕ್ಷೆಯು ಈಗಾಗಲೇ ಪ್ರಕಟಿಸಿದಂತೆ ಮೇ 28 ರಂದು ನಡೆಯಲಿದೆ.

ವಿದ್ಯಾರ್ಹತೆ ಏನು?

ಯಾವುದೇ ಪದವೀಧರರು ಐಎಎಸ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ, ಐಎಫ್‌ಎಸ್‌ ಹುದ್ದೆಗಳ ಪರೀಕ್ಷೆ ಬರೆಯಲಿಚ್ಛಿಸುವ ಅಭ್ಯರ್ಥಿಗಳು ಪಶುಪಾಲನಾ ಮತ್ತು ಪಶುವೈದ್ಯ ವಿಜ್ಞಾನ/ಸಸ್ಯಶಾಸ್ತ್ರ/ರಸಾಯನಶಾಸ್ತ್ರ/ಭೂ ವಿಜ್ಞಾನ ಶಾಸ್ತ್ರ/ಗಣಿತ/ ಸಂಖ್ಯಾಶಾಸ್ತ್ರ ಅಥವಾ ಪ್ರಾಣಿಶಾಸ್ತ್ರ ವಿಷಯಗಳನ್ನೊಳಗೊಂಡ ಯಾವುದಾದರೂ ಒಂದು ಪದವಿ ಅಥವಾ ಕೃಷಿ ವಿಜ್ಞಾನ/ಅರಣ್ಯಶಾಸ್ತ್ರ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು.

ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-02-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 21-02-2023
(6:00 PM)
ಅರ್ಜಿಯಲ್ಲಿ ಬದಲಾವಣೆ ಮಾಡಲು ಅವಕಾಶ : 22.02.2023 ರಿಂದ 28.02.2023
ಪೂರ್ವಭಾವಿ ಪರೀಕ್ಷೆ ದಿನಾಂಕ: 28-05-2023
ಸಹಾಯವಾಣಿ ಸಂಖ್ಯೆ: 011-23385271 / 011-23381125 / 011-23098543

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ : https://www.upsc.gov.in/

ವಯೋಮಿತಿ ಎಷ್ಟು?

21 ರಿಂದ 32 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ವಯಸ್ಸನ್ನು ಆಗಸ್ಟ್‌ 1, 2023 ಕ್ಕೆ ಲೆಕ್ಕ ಹಾಕಲಾಗುತ್ತದೆ. ಗರಿಷ್ಠ ವಯೋಮಿತಿಯಲ್ಲಿ ಎಸ್‌ಸಿ ಮತ್ತು ಎಸ್‌ಟಿಗೆ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ನೀಡಲಾಗಿದೆ. ಸಾಮಾನ್ಯ ಅಭ್ಯರ್ಥಿಗಳು ಆರು ಬಾರಿ ಮಾತ್ರ ಈ ಪರೀಕ್ಷೆ ಬರೆಯಬಹುದು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಎಷ್ಟು ಬಾರಿ ಬೇಕಾದರೂ ಪರೀಕ್ಷೆ ಬರೆಯಬಹುದು. ಒಬಿಸಿ ಅಭ್ಯರ್ಥಿಗಳು 9 ಬಾರಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಮಹಿಳಾ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿಯೇ ಪಾವತಿಸಲು ಅವಕಾಶ ನೀಡಲಾಗಿರುತ್ತದೆ. ಅರ್ಜಿ ಶುಲ್ಕ ಪಾವತಿಸಲು ಕೂಡ ಫೆಬ್ರವರಿ 21 ಕೊನೆಯ ದಿನವಾಗಿದೆ.

ನೇಮಕ ಹೇಗೆ?

ಮೊದಲಿಗೆ ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ, ನೇಮಕ ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿ : DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Exit mobile version