ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ 15ನೇ ಬಜೆಟ್ (Karnataka Budget Session 2024) ಅನ್ನು ಮಂಡಿಸಿದ್ದು, ನಗರಾಭಿವೃದ್ಧಿ ಯೋಜನೆಗೆ (Urban Development Plan) ಹಲವು ರೀತಿಯ ಒತ್ತನ್ನು ನೀಡಿದ್ದಾರೆ. ಇದೇ ವೇಳೆ ತೆರಿಗೆ ಸಂಗ್ರಹಕ್ಕೂ ಒತ್ತು ನೀಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ (BBMP limits) 2024-25ರಲ್ಲಿ ತೆರಿಗೆ ಸಂಗ್ರಹ (Tax collection) ವ್ಯವಸ್ಥೆಯಲ್ಲಿ ಸೋರಿಕೆ ತಡೆಗಟ್ಟುವ ಮೂಲಕ 6,000 ಕೋಟಿ ರೂ.ಗಳಷ್ಟು ತೆರಿಗೆ ಸಂಗ್ರಹದ ಗುರಿಯನ್ನು ಇಟ್ಟುಕೊಂಡಿದ್ದಾರೆ. ಈ ಮೂಲಕ ನಗರಾಭಿವೃದ್ಧಿಯನ್ನು ಹೇಗೆ ಮಾಡಲಾಗುವುದು ಎಂಬ ಬಗ್ಗೆಯೂ ಸಿಎಂ ವಿವರಣೆ ನೀಡಿದ್ದಾರೆ.
ಬಜೆಟ್ ಮಂಡನೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರು ನಗರವನ್ನು ವಿಶ್ವದರ್ಜೆಯ ನಗರವಾಗಿ ಅಭಿವೃದ್ಧಿಪಡಿಸಲು ನಾವು ಬ್ರಾಂಡ್ ಬೆಂಗಳೂರು ಪರಿಕಲ್ಪನೆಯನ್ನು ರೂಪಿಸಿ ಜಾರಿಗೊಳಿಸುತ್ತಿದ್ದೇವೆ. ಜನರ ಬದುಕಿನ ಗುಣಮಟ್ಟ ಸುಧಾರಣೆಗಾಗಿ ಹಾಗೂ ಹೂಡಿಕೆದಾರರನ್ನು ಆಕರ್ಷಿಸಲು ವಿವಿಧ ವಲಯಗಳಲ್ಲಿ ಗಣನೀಯ ಸುಧಾರಣೆಗಳನ್ನು ತರಲು ಹಲವಾರು ದಿಟ್ಟ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಪ್ರಸಕ್ತ ಸಾಲಿನಲ್ಲಿ ಸಂಪನ್ಮೂಲಗಳ ಹೆಚ್ಚಳ, ಸಂಚಾರ ದಟ್ಟಣೆ ನಿವಾರಣೆ, ಗುಣಮಟ್ಟದ ರಸ್ತೆಗಳ ನಿರ್ಮಾಣ, ಶುದ್ಧ ಕುಡಿಯುವ ನೀರು ಪೂರೈಕೆ, ಉತ್ತಮ ಸಾರ್ವಜನಿಕ ಸಾರಿಗೆ ಮತ್ತು ಸ್ವಚ್ಛ-ಸುಂದರ ಬೆಂಗಳೂರು ನಿರ್ಮಾಣದ ಕುರಿತು ಹೆಚ್ಚಿನ ಗಮನ ಹರಿಸುತ್ತೇವೆ ಎಂದು ಹೇಳಿದರು.
ಬಿ.ಬಿ.ಎಂ.ಪಿಯಲ್ಲಿ ತೆರಿಗೆ ಮತ್ತು ತೆರಿಗೆಯೇತರ ಸಂಪನ್ಮೂಲಗಳನ್ನು ಕ್ರೋಢೀಕರಿಸಲು ಸರ್ಕಾರವು ಹಲವು ಉಪಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ, ಯಾವ ರೀತಿ ಮಾಡಲಾಗುವುದು ಎಂಬ ಅಂಶವನ್ನು ತೆರೆದಿಟ್ಟಿದ್ದಾರೆ.
• 2023-24ನೇ ಸಾಲಿನಲ್ಲಿ 4,300 ಕೋಟಿ ರೂ. ತೆರಿಗೆ ಸಂಗ್ರಹ ಮಾಡುವ ಮುಖಾಂತರ ದಾಖಲೆಯ ತೆರಿಗೆ ಸಂಗ್ರಹ ಮಾಡುವತ್ತ ಮುನ್ನಡೆದಿದೆ. ಇದು 2022-23ನೇ ಸಾಲಿಗಿಂತ 1,000 ಕೋಟಿ ರೂ. ಗಳಷ್ಟು ಹೆಚ್ಚಾಗಿದೆ. 2024-25ರಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸೋರಿಕೆ ತಡೆಗಟ್ಟುವ ಮೂಲಕ 6,000 ಕೋಟಿ ರೂ.ಗಳಷ್ಟು ತೆರಿಗೆ ಸಂಗ್ರಹದ ನಿರೀಕ್ಷೆ ಇದೆ.
• ಪ್ರಸಕ್ತ ಸಾಲಿನಿಂದ ಪರಿಷ್ಕೃತ ಜಾಹೀರಾತು ನೀತಿ ಮತ್ತು Premium FAR ನೀತಿಯನ್ನು ಜಾರಿಗೆ ತರುವ ಮೂಲಕ ಹೆಚ್ಚುವರಿಯಾಗಿ 2,000 ಕೋಟಿ ರೂ.ಗಳಷ್ಟು ತೆರಿಗೆಯೇತರ ಸಂಪನ್ಮೂಲ ಸಂಗ್ರಹಿಸುವ ಗುರಿ ಹೊಂದಲಾಗಿದೆ.
• ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 20 ಲಕ್ಷ ಆಸ್ತಿಗಳ ಆಸ್ತಿ ತೆರಿಗೆ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ 2024-25ನೇ ಸಾಲಿನಿಂದ ಮಾಲೀಕರಿಗೆ ಡಿಜಿಟಲ್ ಇ-ಖಾತಾ ಮತ್ತು ಆಸ್ತಿ ತೆರಿಗೆ ಪಾವತಿ ವಿವರಗಳನ್ನು ದೊರಕಿಸಲಾಗುವುದು.
ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಕ್ರಮ
ಮೇಲೆ ವಿವರಿಸಿರುವಂತೆ ಸಂಗ್ರಹವಾಗುವ ಹೆಚ್ಚುವರಿ ಸಂಪನ್ಮೂಲಗಳಿಂದ ಆದ್ಯತೆಯ ಮೇಲೆ ಬೆಂಗಳೂರಿನ ಸಂಚಾರ ದಟ್ಟಣೆಯ ಸಮಸ್ಯೆಯನ್ನು ನಿವಾರಿಸಲು ಸರ್ಕಾರವು ವಿವಿಧ ಯೋಜನೆಗಳನ್ನು ಕೈಗೆತ್ತಿಕೊಳ್ಳಲಿದೆ.
• ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಗರದ ಪ್ರಮುಖ ರಸ್ತೆಗಳಲ್ಲಿ 147 ಕಿ.ಮೀ ಉದ್ದದ ವೈಟ್ ಟಾಪಿಂಗ್ ಕಾಮಗಾರಿಗಳನ್ನು 1,700 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಮಂಜೂರಾತಿ ನೀಡಲಾಗಿದೆ. ಈ ಕಾಮಗಾರಿಗಳನ್ನು ಡಿಸೆಂಬರ್ 2025 ರೊಳಗೆ ಪೂರ್ಣಗೊಳಿಸಲಾಗುವುದು.
• ಭೂಮಿಯ ಅಲಭ್ಯತೆ ಮತ್ತು ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ತೊಡಕುಗಳ ಕಾರಣ ಅಸ್ತಿತ್ವದಲ್ಲಿರುವ ರಸ್ತೆಗಳ ವಿಸ್ತರಣೆಯು ಅತ್ಯಂತ ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸುರಂಗ ಮಾರ್ಗ (Tunnel) ನಿರ್ಮಿಸುವ ಮೂಲಕ ನಗರದಲ್ಲಿ ಸಂಚಾರ ದಟ್ಟಣೆಯನ್ನು ಬಗೆಹರಿಸಲು ನಿರ್ಧರಿಸಿದೆ. ಈ ವರ್ಷ ಸಂಚಾರ ದಟ್ಟಣೆ ಅತ್ಯಂತ ತೀವ್ರವಾಗಿರುವ ಹೆಬ್ಬಾಳ ಜಂಕ್ಷನ್‌ನಲ್ಲಿ ಪ್ರಾಯೋಗಿಕವಾಗಿ ಟನೆಲ್ ಅನ್ನು ನಿರ್ಮಿಸಲಾಗುವುದು.
• ನಾಲಾ ಬಫರ್ ವಲಯದೊಳಗೆ ನಾಲಾ ಬಫರ್ ಅನ್ನು ಬಳಸಿಕೊಂಡು ಸರ್ವಋತು ರಸ್ತೆಗಳನ್ನು ನಿರ್ಮಿಸುವ
ಹೊಸ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
• ಈ ಯೋಜನೆಯಡಿ ಈಗಾಗಲೇ 200 ಕೋಟಿ ರೂ. ಅಂದಾಜು ವೆಚ್ಚದಲ್ಲಿ 100 ಕಿ.ಮೀ. ಉದ್ದದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿಯಾಗಿ 100 ಕಿ.ಮೀ. ಉದ್ದದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು.
ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಪರಿಹಾರ
• ಸುಗಮ ಸಂಚಾರ-ಬ್ರಾಂಡ್ ಬೆಂಗಳೂರು ಯೋಜನೆಯಡಿ ಅಂತಾರಾಷ್ಟ್ರೀಯ ಮಟ್ಟದ ತಜ್ಞ ಸಂಸ್ಥೆಯನ್ನು ನೇಮಿಸಿಕೊಳ್ಳಲಾಗಿದೆ. ಈ ಸಂಸ್ಥೆಯು ನೀಡುವ ವರದಿಯನ್ನು ಆಧರಿಸಿ, ಬೆಂಗಳೂರಿನ ಸಂಚಾರ ದಟ್ಟಣೆಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು.
• ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದರ ಜತೆಗೆ ಬೆಂಗಳೂರಿನ ಆರ್ಥಿಕ ಚಟುವಟಿಕೆಯನ್ನು ದೊಡ್ಡ ಪ್ರಮಾಣದಲ್ಲಿ ವೃದ್ಧಿಸಲು ಸಹಕಾರಿಯಾಗುವಂತೆ ಪೆರಿಫೆರಲ್ ರಿಂಗ್ ರೋಡ್ ಅನ್ನು ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ ಪರಿಚಯಿಸಲು ಉದ್ದೇಶಿಸಲಾಗಿದೆ.
• ಈ ಯೋಜನೆಯಡಿ 73 ಕಿ.ಮೀ. ಉದ್ದದ ರಸ್ತೆಯನ್ನು 27,000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಾಣ ಮಾಡಲು ಆರ್‌ಇಪಿ (RFP) ಕರೆಯಲಾಗಿದೆ. ಈ ಯೋಜನೆಯನ್ನು ಇದೇ ಸಾಲಿನಲ್ಲಿ ಪ್ರಾರಂಭ ಮಾಡಲು ಉದ್ದೇಶಿಸಿದೆ.
• ಬೆಂಗಳೂರು ನಗರದಲ್ಲಿ 250 ಮೀಟರ್ ಎತ್ತರದ ಸ್ಕೈ-ಡೆಕ್ (Sky-Deck) ನಿರ್ಮಾಣಕ್ಕಾಗಿ ನೂತನ ಪರಿಕಲ್ಪನೆ ಒದಗಿಸುವಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದ ವಾಸ್ತುವಿನ್ಯಾಸಗಾರರನ್ನು ಆಹ್ವಾನಿಸಿದೆ. ಇದರಿಂದ ನಗರದ ಒಳಗೆ ಆಕರ್ಷಕವಾದ ಪ್ರವಾಸಿ ತಾಣವನ್ನು ಸೃಜಿಸಿದಂತಾಗುತ್ತದೆ.
ನಗರಾಭಿವೃದ್ಧಿ ಇಲಾಖೆಯ ಅಂಗಸಂಸ್ಥೆಗಳಿಗೆ ಸೋಲಾರ್ ಪಾರ್ಕ್
• ನಗರಾಭಿವೃದ್ಧಿ ಇಲಾಖೆಯ ಅಂಗಸಂಸ್ಥೆಗಳಾದ ಬಿಬಿಎಂಪಿ, ಬಿಎಂಆರ್‌ಸಿಎಲ್, ಬಿಡಬ್ಲ್ಯುಎಸ್‌ಎಸ್‌ಬಿ, ಬಿಡಿಎ (BBMP, BMRCL, BWSSB, BDA) ಗಳ ವ್ಯಾಪ್ತಿಯಲ್ಲಿ ಪ್ರತಿ ತಿಂಗಳು ವಿದ್ಯುತ್ ಶುಲ್ಕ ಪಾವತಿಯ ಆರ್ಥಿಕ ಹೊರೆ ಕಡಿಮೆಗೊಳಿಸಲು ಸೋಲಾರ್ ಪಾರ್ಕ್ ಅನ್ನು Captive/Group Captive ಮೂಲಕ ಸ್ಥಾಪಿಸಲಾಗುವುದು.
ಮೆಟ್ರೋ ಮತ್ತು ರೈಲು ಯೋಜನೆ
• ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ ಸೇವೆಯೊಂದಿಗೆ ಮೆಟ್ರೋ ರೈಲು ಹಾಗೂ ಸಬ್-ಅರ್ಬನ್ ರೈಲು ಯೋಜನೆಗಳು ಜನರ ಸುಗಮ ಸಂಚಾರದ ದೃಷ್ಟಿಯಿಂದ ಕ್ರಾಂತಿಕಾರಿ ಬದಲಾವಣೆ ತರಲಿವೆ.
• ಈ ಬಹುವಿಧ ಸಾರಿಗೆ ವ್ಯವಸ್ಥೆಗಳನ್ನು ಒಗ್ಗೂಡಿಸಿ, ಪರಸ್ಪರ ಸಮನ್ವಯದಿಂದ ಕಾರ್ಯಾಚರಣೆ ಮಾಡುವ ಮೂಲಕ ಜನರು ಹೆಚ್ಚು ಹೆಚ್ಚಾಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಅವಲಂಬಿಸಲು ಪ್ರೇರೇಪಿಸುವುದು ನಮ್ಮ ಆದ್ಯತೆಯಾಗಿದೆ. ಇದರಿಂದ ಸಂಚಾರ ದಟ್ಟಣೆ ಹಾಗೂ ಪರಿಸರ ಮಾಲಿನ್ಯಗಳ ನಿಯಂತ್ರಣ ಸಾಧ್ಯವಾಗುವುದಲ್ಲದೆ, ಬದುಕು ಇನ್ನಷ್ಟು ಸುಗಮವಾಗಲಿದೆ.
• ದೇಶದ ಅತ್ಯುತ್ತಮ ಮೆಟ್ರೋ ಸೇವೆಗಳಲ್ಲಿ ಮುಂಚೂಣಿಯಲ್ಲಿರುವ ನಮ್ಮ ಮೆಟ್ರೋ ರೈಲು ಯೋಜನೆಯು ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯ ಜೀವನಾಡಿಯಾಗಿದೆ. 8 ಲಕ್ಷಕ್ಕೂ ಹೆಚ್ಚಿನ ಜನರು
ಪ್ರತಿನಿತ್ಯ ಮೆಟ್ರೋ ಸೇವೆಯನ್ನು ಬಳಸುತ್ತಿದ್ದಾರೆ. ಪ್ರಸ್ತುತ ಕಾರ್ಯಾಚರಣೆಯಲ್ಲಿರುವ 74 ಕಿ.ಮೀ. ಮಾರ್ಗದೊಂದಿಗೆ 2025ರ ಮಾರ್ಚ್ ವೇಳೆಗೆ ಹೆಚ್ಚುವರಿಯಾಗಿ 44 ಕಿ.ಮೀ. ಮಾರ್ಗ ಸೇರ್ಪಡೆಯಾಗಲಿದೆ.
• ಮೆಟ್ರೋ ಯೋಜನೆ ಹಂತ-2 ಮತ್ತು 2ಎ ಯೋಜನೆಯಡಿ ಹೊರವರ್ತುಲ ರಸ್ತೆ- ವಿಮಾನ ನಿಲ್ದಾಣ ಮಾರ್ಗವು 2026ರ ಜೂನ್ ವೇಳೆಗೆ ಪೂರ್ಣಗೊಳ್ಳಲಿದೆ. ಪ್ರಸಕ್ತ ಸಾಲಿನಲ್ಲಿ ಮೆಟ್ರೋ ಸೇವೆಯ ಇತಿಹಾಸದಲ್ಲಿಯೇ ಪ್ರಥಮ ಬಾರಿ ಕಾರ್ಯಾಚರಣೆಯು ಲಾಭದಾಯಕವಾಗಿ (Operational Profit) ಪರಿಣಮಿಸಿರುವುದು ಹೆಮ್ಮೆಯ ಸಂಕೇತವಾಗಿದೆ.
• ನಮ್ಮ ಮೆಟ್ರೋ ಹಂತ-3 ರಡಿ ಅಂದಾಜು 15,611 ಕೋಟಿ ರೂ. ವೆಚ್ಚದ ಯೋಜನೆಗೆ ರಾಜ್ಯ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕೇಂದ್ರ ಸರ್ಕಾರದ ಅನುಮೋದನೆಯ ನಿರೀಕ್ಷೆಯಲ್ಲಿದೆ.
• ನಮ್ಮ ಮೆಟ್ರೋ ಹಂತ-3ಎ ರಡಿಯಲ್ಲಿ ಸರ್ಜಾಪುರದಿಂದ ಅಗರ, ಕೋರಮಂಗಲ ಡೈರಿ ವೃತ್ತ, ಮೇಖ್ರಿ ವೃತ್ತ ಮೂಲಕ ಹೆಬ್ಬಾಳವನ್ನು ಸಂಪರ್ಕಿಸುವ ಮಾರ್ಗ ನಿರ್ಮಾಣ ಕುರಿತು ಡಿ.ಪಿ.ಆರ್. ಕರಡು ಸಿದ್ಧಪಡಿಸಲಾಗಿದ್ದು, ಕೇಂದ್ರ ಸರ್ಕಾರದ ಅನುಮೋದನೆಗೆ ಸಲ್ಲಿಸಲಾಗುವುದು.
• ಮಂದಗತಿಯಲ್ಲಿ ಸಾಗುತ್ತಿದ್ದ ಬೆಂಗಳೂರು ಉಪನಗರ ರೈಲು ಯೋಜನೆಯನ್ನು ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಚುರುಕುಗೊಳಿಸಿ, ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ ವರೆಗಿನ ಕಾರಿಡಾರ್-2ರ ಸಿವಿಲ್ ಕಾಮಗಾರಿಗಳನ್ನು ವೇಗವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಕಾರಿಡಾರ್-4 ರ ಹೀಲಲಿಗೆಯಿಂದ ರಾಜಾನುಕುಂಟೆ ವರೆಗಿನ 46.2 ಕಿ.ಮೀ. ಉದ್ದದ ಮಾರ್ಗ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ. Rolling Stock ಮತ್ತು ಅದರ ಕಾರ್ಯಾಚರಣೆ ಮತ್ತು ನಿರ್ವಹಣೆಗೆ RFP ಆಹ್ವಾನ ಮಾಡಲಾಗಿದೆ. European Investment Bank ಮತ್ತು ಜರ್ಮನಿಯ KFW ಬ್ಯಾಂಕುಗಳ ಜೊತೆಗೆ ಆರ್ಥಿಕ ನೆರವಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆಯ ಅಗತ್ಯತೆಯ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದು ಹೆಚ್ಚಿನ ಅನುದಾನ ನೀಡುವಂತೆ ಒತ್ತಾಯಿಸಲಾಗುವುದು ಮತ್ತು ಕೇಂದ್ರ ಸರ್ಕಾರ ನೀಡುವ ಅನುದಾನಕ್ಕೆ ಎದುರಾಗಿ ರಾಜ್ಯ ಸರ್ಕಾರದ ಪಾಲಿನ ಅನುದಾನವನ್ನು ಒದಗಿಸಲಾಗುವುದು.
• ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರತಿದಿನ ಸರಾಸರಿ 42 ಲಕ್ಷ ಜನರಿಗೆ ಸೇವೆಯನ್ನು ಒದಗಿಸುತ್ತಿದ್ದು, ದೇಶದಲ್ಲಿಯೇ ಅತ್ಯುತ್ತಮ ನಗರ ಸಾರಿಗೆ ವ್ಯವಸ್ಥೆಗಳಲ್ಲಿ ಒಂದಾಗಿದೆ. ಮುಂದಿನ ದಿನಗಳಲ್ಲಿ 1,334 ಹೊಸ ಎಲೆಕ್ಟ್ರಿಕ್ ಬಸ್‌ಗಳು ಮತ್ತು 820 ಬಿಎಸ್-6 ಡೀಸೆಲ್ ಬಸ್ಸುಗಳನ್ನು ಬಿ.ಎಂ.ಟಿ.ಸಿ.ಗೆ ಸೇರ್ಪಡೆಗೊಳಿಸಲಾಗುವುದು.
• ಪ್ರಯಾಣಿಕರ ಹಿತದೃಷ್ಟಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಮಹಿಳಾ ಸುರಕ್ಷತೆಯನ್ನು ಒಳಗೊಂಡ Vehicle Tracking ಹೊಂದಿರುವ ಮೊಬೈಲ್ ಆ್ಯಪ್ ಅನ್ನು ಅನುಷ್ಠಾನಗೊಳಿಸಲಾಗುತ್ತಿದೆ.
• ಜಪಾನ್ ಸರ್ಕಾರದ ಸಹಯೋಗದೊಂದಿಗೆ ಬೆಂಗಳೂರು ನಗರದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು Area Traffic Signal Control System ಅನ್ನು ನಗರದ ಪ್ರಮುಖ 28 ಜಂಕ್ಷನ್‌ಗಳಲ್ಲಿ ಅಳವಡಿಸುವ ಮೂಲಕ ಟ್ರಾಫಿಕ್ ಸಿಗ್ನಲ್‌ನಲ್ಲಿ ವಾಹನಗಳ ಸಂದಣಿಯನ್ನು ಶೇ.30ರಷ್ಟು ಹಾಗೂ ಸರಾಸರಿ ವಿಳಂಬವನ್ನು ಶೇ.13ರಷ್ಟು ಕಡಿಮೆಗೊಳಿಸಲಾಗುವುದು.
ನಗರದ ಅಭಿವೃದ್ಧಿಯ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳ ಜತೆಯಲ್ಲಿ ನಾಗರಿಕರ ಬದುಕಿನ ಗುಣಮಟ್ಟ ಸುಧಾರಣೆಗೂ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದ್ದು, ಉತ್ತಮ ಪರಿಸರ, 24×7 ಕುಡಿಯುವ ನೀರಿನ ಪೂರೈಕೆ ಮತ್ತು ಸ್ವಚ್ಛತೆಯ ನಿರ್ವಹಣೆಗೆ ಒತ್ತು ನೀಡಲಾಗುವುದು.
ಕುಡಿಯುವ ನೀರು, ಸ್ವಚ್ಛತೆಗೆ ಸರ್ಕಾರ ಕೈಗೊಳ್ಳಲಿರುವ ಕ್ರಮಗಳಿವು
• ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 5,550 ಕೋಟಿ ರೂ. ಅಂದಾಜು ವೆಚ್ಚದಲ್ಲಿ 775 ಎಂ.ಎಲ್.ಡಿ ಸಾಮರ್ಥ್ಯದ ಕಾವೇರಿ ಹಂತ-5 ಯೋಜನೆಯನ್ನು ಮೇ 2024ರಲ್ಲಿ ಕಾರ್ಯಾರಂಭಗೊಳಿಸುವ ಮೂಲಕ 12 ಲಕ್ಷ ಜನರಿಗೆ ಪ್ರತಿದಿನ 110 ಲೀಟರ್ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುವುದು.
• ಕಾವೇರಿ ಹಂತ-5 ರಡಿಯಲ್ಲಿ ಒಳಚರಂಡಿ ಕಾಮಗಾರಿಗಳನ್ನು ಡಿಸೆಂಬರ್ 2024 ರಲ್ಲಿ ಪೂರ್ಣಗೊಳಿಸಲಾಗುವುದು. ಇದರಿಂದ 228 ಕಿ.ಮೀ ವ್ಯಾಪ್ತಿಯಲ್ಲಿ ಒಳಚರಂಡಿ ಕೊಳವೆಯನ್ನು ಅಳವಡಿಸಲಾಗುವುದು ಮತ್ತು 13 ಎಸ್.ಟಿ.ಪಿ ಘಟಕಗಳಿಂದ 100 ಎಂ.ಎಲ್.ಡಿ ರಷ್ಟು ಒಳಚರಂಡಿ ನೀರನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಸೃಜಿಸಲಾಗುವುದು.
• 07 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು (ಎಸ್.ಟಿ.ಪಿ) 441 ಕೋಟಿ ರೂ.ಗಳ ಮೊತ್ತದಲ್ಲಿ ಉನ್ನತೀಕರಿಸಲಾಗುವುದು. ಇದರಿಂದ 268 ಎಂ.ಎಲ್.ಡಿ ತ್ಯಾಜ್ಯ ನೀರನ್ನು ಪ್ರತಿನಿತ್ಯ ಸಂಸ್ಕರಿಸಿ ಮರುಬಳಕೆ ಮಾಡಲು ಅನುಕೂಲವಾಗಲಿದೆ.
• ಬಿ.ಬಿ.ಎಂ.ಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವ ಯೋಜನೆಯ ಎರಡನೇ ಹಂತವನ್ನು 200 ಕೋಟಿ ರೂ.ಗಳ ಮೊತ್ತದಲ್ಲಿ ಪ್ರಾರಂಭಿಸಲಾಗುವುದು.
• ಮನೆಗಳಿಂದ ತ್ಯಾಜ್ಯ ಸಂಸ್ಕರಣಾ ಘಟಕಗಳವರೆಗೂ ತ್ಯಾಜ್ಯಗಳ ವಿಲೇವಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಬೆಂಗಳೂರು ನಗರ ಜಿಲ್ಲೆಯನ್ನು ನಾಲ್ಕು ವಲಯಗಳನ್ನಾಗಿ ವಿಂಗಡಿಸಿ, ಪ್ರತಿಯೊಂದು ವಲಯಕ್ಕೂ ನುರಿತ ಸಂಸ್ಥೆಯನ್ನು ಪಾರದರ್ಶಕವಾಗಿ ನೇಮಿಸಲಾಗುವುದು. ನಗರದ ಹೊರವಲಯದ ನಾಲ್ಕು ಕಡೆಗಳಲ್ಲಿ
50 ರಿಂದ 100 ಎಕರೆ ಜಮೀನನ್ನು ಗುರುತಿಸಿ ಮುಂದಿನ 30 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟು ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ಅವಕಾಶ ಕಲ್ಪಿಸಲಾಗುವುದು.
• ಬಿಬಿಎಂಪಿಯ ಅರಣ್ಯ, ಕೆರೆ ಮತ್ತು ತೋಟಗಾರಿಕಾ ವಿಭಾಗವನ್ನು ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ನಿರ್ವಹಣಾ ವಿಭಾಗ ಎಂದು ಮರುನಾಮಕರಣ ಮಾಡಿ, ಕಾರ್ಯವ್ಯಾಪ್ತಿಯನ್ನು ವಿಸ್ತರಿಸಲಾಗಿದೆ. ನಗರದಲ್ಲಿ ವಾತಾವರಣದ ಸ್ವಚ್ಛತೆಗಾಗಿ ಮರಗಳ ಗಣತಿ, ಕೆರೆ ಮತ್ತು ಉದ್ಯಾನವನಗಳ ತಂತ್ರಾಂಶ ಆಧಾರಿತ ಮೇಲ್ವಿಚಾರಣೆ ಹಾಗೂ ಕೆರೆ ಮತ್ತು ಉದ್ಯಾನಗಳ ಅಭಿವೃದ್ಧಿಯಲ್ಲಿ ಸಾರ್ವಜನಿಕ ಸಹಭಾಗಿತ್ವವನ್ನು ಹೆಚ್ಚಿಸಲು ಪ್ರತ್ಯೇಕ ನೀತಿಯನ್ನು ಜಾರಿಗೊಳಿಸಲಾಗುವುದು.
• ಬಿಬಿಎಂಪಿ ಸಹಯೋಗದೊಂದಿಗೆ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಸರ್ವಜ್ಞ ಉದ್ಯಾನವನವನ್ನು ಅಭಿವೃದ್ಧಿಪಡಿಸಲಾಗುವುದು.
ಇದನ್ನೂ ಓದಿ: Karnataka Budget 2024: ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಮೇಲ್ದರ್ಜೆಗೆ, ಕಾಲೇಜುಗಳಿಗೆ 400 ಕೋಟಿ ಅನುದಾನ
• ಬೆಂಗಳೂರು ಹಾಗೂ 10 ಮಹಾನಗರ ಪಾಲಿಕೆಗಳಲ್ಲಿ ವಾಣಿಜ್ಯ ಮತ್ತು ವ್ಯಾಪಾರದ ದೃಷ್ಠಿಯಿಂದ ರಾತ್ರಿಯ ವೇಳೆ ವ್ಯಾಪಾರ-ವಹಿವಾಟಿನ ಮೇಲಿನ ನಿರ್ಬಂಧವನ್ನು ಬೆಳಗಿನ ಜಾವ ಒಂದು ಗಂಟೆಯವರೆಗೆ (1:೦೦ am) ವಿಸ್ತರಿಸಲಾಗುವುದು” ಎಂದು ಸಿಎಂ ಸಿದ್ದರಾಮಯ್ಯ ವಿವರಣೆ ನೀಡಿದ್ದಾರೆ.