ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸಕ್ರಿಯ ಪ್ರಕರಣಗಳ ಸಂಖ್ಯೆ 1 ಸಾವಿರ ಗಡಿ ಮುಟ್ಟಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 229 ಕೊರೊನಾ ಪಾಸಿಟಿವ್ ಪ್ರಕರಣಗಳು (Coronavirus News) ವರದಿಯಾಗಿದ್ದು, 62 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯಾದ್ಯಂತ 3527 ಮಂದಿಗೆ ಕೋವಿಡ್ ತಪಾಸಣೆ ನಡೆಸಲಾಗಿದ್ದು, ಈ ಪೈಕಿ 229 ಮಂದಿಗೆ ಸೋಂಕು ದೃಢಪಟ್ಟಿದೆ. ಇನ್ನು ಕೋವಿಡ್ ಪಾಸಿಟಿವಿಟಿ ದರ 6.49 ದಾಖಲಾಗಿದ್ದು, ಮರಣ ಪ್ರಮಾಣ ದರ ಶೂನ್ಯವಿದೆ. ಒಟ್ಟು 1000 ಸಕ್ರಿಯ ಪ್ರಕರಣಗಳಲ್ಲಿ 943 ಮಂದಿ ಹೋಮ್ ಐಸೋಲೇಷನ್‌ನಲ್ಲಿದ್ದಾರೆ. 57 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 22 ಮಂದಿ ಐಸಿಯುನಲ್ಲಿದ್ದಾರೆ.
ಕೋವಿಡ್ ಮಾರ್ಗಸೂಚಿ ಅನುಷ್ಠಾನದಲ್ಲಿ ಬಿಬಿಎಂಪಿ ನಿರ್ಲಕ್ಷ್ಯ?
ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯ ಇಲ್ಲದಿದ್ದರೂ ಜಾಗೃತಿ ಮೂಡಿಸುವಂತೆ ಆರೋಗ್ಯ ಇಲಾಖೆ ಬಿಬಿಎಂಪಿಗೆ ನಿರ್ದೇಶನ ನೀಡಿತ್ತು. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇತ್ತೀಚೆಗೆ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದ್ದರು. ಆದರೆ, ಕೋವಿಡ್ ನಿಯಮಾವಳಿ ಅನುಷ್ಠಾನದಲ್ಲಿ ಬಿಬಿಎಂಪಿ ನಿರ್ಲಕ್ಷ್ಯ ವಹಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ | Skincare Tips: ಚರ್ಮದ ಆರೈಕೆ ಮಾಡುವಾಗ ಈ ಸಂಗತಿ ಮರೆಯಬೇಡಿ
ಹೊಸ ವರ್ಷಾಚರಣೆ ವೇಳೆ ಅತಿ ಹೆಚ್ಚು ಜನದಟ್ಟಣೆ ಪ್ರದೇಶಗಳಲ್ಲಿ ನಿಗಾ ವಹಿಸುವಂತೆ ಆರೋಗ್ಯ ಇಲಾಖೆ ಹೇಳಿತ್ತು. ಬ್ರಿಗೇಡ್ ರೋಡ್, MG ರೋಡ್, ಚರ್ಚ್ ಸ್ಟ್ರೀಟ್ ಗಳಲ್ಲಿ ಮಾಸ್ಕ್ ಹಾಕದೆ ಬಹುತೇಕ ಜನರು ಓಡಾಡುತ್ತಿದ್ದಾರೆ. ಆದರೆ, ಬಿಬಿಎಂಪಿ ವತಿಯಿಂದ ಕನಿಷ್ಠ ಜಾಗೃತಿ ಮೂಡಿಸದೆ ನಿರ್ಲಕ್ಷ್ಯ ವಹಿಸಲಾಗುತ್ತಿರುವುದು ಕಂಡುಬಂದಿದೆ. ಹೀಗಾಗಿ ಸೀಮಿತ ಜನದಟ್ಟಣೆ ಪ್ರದೇಶಗಳಲ್ಲಿ ಮಾರ್ಷಲ್‌ಗಳ ನೇಮಿಸಿ ಜಾಗೃತಿ ಮೂಡಿಸಲು ಬಿಬಿಎಂಪಿ ವಿಫಲವಾಗಿದೆ ಎಂದು ಸಾರ್ವಜನಿಕರು ಅಸಮಾಧಾನ ಹೊರಹಾಕುತ್ತಿದ್ದಾರೆ.
ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ವಾರ್ಡ್ ಮೀಸಲಿಡಲು ಸರ್ಕಾರ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ (Coronavirus News) ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವುದು ಆತಂಕ ಮೂಡಿಸಿದೆ. ಹೀಗಾಗಿ ಸೋಂಕು ಹರಡುವಿಕೆ ನಿಯಂತ್ರಿಸಲು ಚಿಕಿತ್ಸೆಗೆ ಆಗಮಿಸುವ ಸೋಂಕಿತರನ್ನು ದಾಖಲಿಸಕೊಳ್ಳಲು ಜಿಲ್ಲಾಸ್ಪತ್ರೆಗಳಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ್ (Isolated Covid Wards) ಮೀಸಲಿಡಲು ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ.
ಸಚಿವ ಸಂಪುಟ ಉಪಸಮಿತಿ (ರಾಜ್ಯ ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣ) ಸಭೆಯ ನಿರ್ದೇಶನದಂತೆ, ಕೋವಿಡ್-19 ಸೋಂಕು ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ಬೆಂಗಳೂರಿನ ಪ್ರಮುಖ ಸಾರ್ವಜನಿಕ ಆಸ್ಪತ್ರೆಗಳು ಸೇರಿದಂತೆ ಜಿಲ್ಲಾಸ್ಪತ್ರೆಗಳಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ್ (Isolated Covid Wards) ಅನ್ನು ಮೀಸಲಿಡಲು ತಿಳಿಸಲಾಗಿದೆ.
ಇದನ್ನೂ ಓದಿ | New Year 2024: ಹೊಸ ವರ್ಷ ಸ್ವಾಗತಕ್ಕೆ ಸಿಲಿಕಾನ್ ಸಿಟಿ ಸಜ್ಜು; ಎಲ್ಲೆಡೆ ಪೊಲೀಸ್ ಕಣ್ಗಾವಲು
ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯ H-Block, ಕೆ.ಸಿ.ಜನರಲ್ ಆಸ್ಪತ್ರೆ, ಜಯನಗರ ಜನರಲ್ ಆಸ್ಪತ್ರೆ, ಸಿ.ವಿ.ರಾಮನ್ ಆಸ್ಪತ್ರೆ ಹಾಗೂ ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆ (RGICD) ಗಳಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ್ (Isolated Covid Wards) ಅನ್ನು ಕಾಯ್ದಿರಿಸಲು ಮತ್ತು ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾ ಆಸ್ಪತ್ರೆ (ವೈದ್ಯಕೀಯ ಕಾಲೇಜುಗಳು ಸೇರಿದಂತೆ) ಕನಿಷ್ಠ 10 ಸಾಮಾನ್ಯ ಹಾಸಿಗೆಗಳು ಮತ್ತು 5 ಐ.ಸಿ.ಯು ಹಾಸಿಗೆಗಳನ್ನು ಪ್ರತ್ಯೇಕವಾಗಿ ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ ಕಾಯ್ದಿರಿಸಬೇಕು ಎಂದು ಆರೋಗ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ