Site icon Vistara News

ಬಿಸಿಯೂಟ ಯೋಜನೆಗೆ ಡಾ. ಶಿವಕುಮಾರ ಶ್ರೀಗಳ ಹೆಸರು: ಸಿಎಂ ಬೊಮ್ಮಾಯಿ ಘೋಷಣೆ

Basavaraj bommai profile pics

ತುಮಕೂರು:  ಶಾಲಾ ಮಕ್ಕಳಿಗೆ ವಿತರಿಸುವ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ನಡೆದಾಡುವ ದೇವರು ಎಂದೇ ಹೆಸರು ಪಡೆದಿರುವ ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳ ಹೆಸರು ಇಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಡಾ. ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಶಿವಕುಮಾರ ಶ್ರೀಗಳ ಹೆಸರು ಇಡುವುದಾಗಿ ಘೋಷಣೆ ಮಾಡಿದ್ದಾರೆ.

ʻಶಿವಕುಮಾರ ಸ್ವಾಮೀಜಿಗಳು ಕಷ್ಟದಲ್ಲಿರುವವರಿಗೆ ಬದುಕು ಕಟ್ಟಿಕೊಡುತ್ತಿದ್ದರು. ಲಕ್ಷಾಂತರ ಮಕ್ಕಳಿಗೆ ತ್ರಿವಿಧ ದಾಸೋಹಗಳಲ್ಲಿ ಒಂದಾಗಿರುವ ಅನ್ನ ದಾಸೋಹವನ್ನು ಕೂಡ ಮಾಡಿದವರು. ಮಧ್ಯಾಹ್ಯದ ಬಿಸಿ ಊಟದ ಯೋಜನೆಗೆ ಶಿವಕುಮಾರ ಸ್ವಾಮೀಜಿ ಹೆಸರು ಇಡಲು ಸರ್ಕಾರ ಮುಂದಾಗುತ್ತದೆ. ಈ ಬಗ್ಗೆ ಈಗಾಗಲೇ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಆದೇಶ ಹೊರಡಿಸುತ್ತೇನೆʼ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಏಪ್ರಿಲ್ 1 ದಾಸೋಹ ದಿನ:

ಶಿವಕುಮಾರ ಸ್ವಾಮಿಜಿಗಳ ಜನ್ಮದಿನವನ್ನು ರಾಜ್ಯದಲ್ಲಿ ದಾಸೋಹ ದಿನವನ್ನಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. 

ʻಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ನಡೆದಾಡಿದ ನೆಲದಲ್ಲಿ ಸ್ಪೂರ್ತಿ, ಹೆಮ್ಮೆ ಇದೆ. ಸುಮಾರು 88 ವರ್ಷ ಶ್ರೀಮಠದ ನಿಸ್ವಾರ್ಥ ಸೇವೆ ಮಾಡಿದ್ದಾರೆ. ಇದು ದಾಖಲೆ. ಈ ಕೆಲಸವನ್ನು ಇಡೀ ದೇಶದಲ್ಲೇ ಯಾರೂ ಮಾಡಿಲ್ಲ. ಆ ದಾಖಲೆ ನಮ್ಮ‌ ಶಿವಕುಮಾರ ಸ್ವಾಮಿಗಳು ಮಾಡಿದ್ದಾರೆ. ಶ್ರೀಗಳು ಹಚ್ಚಿದ ಒಲೆಯ ಕಿಚ್ಚು ಇಂದಿಗೂ ನಿರಂತರವಾಗಿ ಉರಿಯುತ್ತಿದೆ. ಅವರು ನಮ್ಮ‌ ನಡುವೆ ಜೀವಂತ ಆಗಿದ್ದಾರೆ. ಅವರು ದೈಹಿಕವಾಗಿ ಇಲ್ಲದಿದ್ದರೂ ಅವರ ನಡೆ, ಗೌರವ ನಮ್ಮ‌ ಜೊತೆ ಸದಾ ಇರುತ್ತದೆ. ಶ್ರೀಗಳ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ಅಲ್ಲ, ಅವರ ಭಕ್ತನಾಗಿ ಭಾಗಿಯಾಗುತ್ತಿರುವುದು ನನ್ನ ಪಾಲಿನ ಪುಣ್ಯʼ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯ ಸರ್ಕಾರದ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಸಿದ್ದಗಂಗೆಯ ಶಿವಕುಮಾರ ಶ್ರೀಗಳ ಹೆಸರು ಇಡಬೇಕು ಎಂಬ ಬೇಡಿಕೆಯನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಟ್ಟಿದ್ದರು.

Exit mobile version