ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (kseeb) ದ್ವಿತೀಯ ಪಿಯುಸಿಯ ಫಲಿತಾಂಶ (2nd PUC Result 2023) ಪ್ರಕಟಿಸಿದೆ. ಈ ಬಾರಿ ಶೇ.74.67 ಮಂದಿ ಉತ್ತೀರ್ಣರಾಗಿದ್ದಾರೆ. ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಸಚಿವ ಎಂ.ಬಿ. ಪಾಟೀಲ್ ಮತ್ತಿತರ ನಾಯಕರು ಅಭಿನಂದನೆ ಸಲ್ಲಿಸಿದಾರೆ.
ʻʻದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಅತ್ಯುತ್ತಮ ಸಾಧನೆಗೈದ, ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಮತ್ತು ಈ ಸಾಧನೆ ಹಿಂದಿರುವ ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಹಾರ್ದಿಕ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಸೋಲೇ ಗೆಲುವಿನ ಸೋಪಾನ
ಇದೇ ಟ್ವೀಟ್‌ನಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಂತ್ವನದ ಮಾತುಗಳನ್ನು ಹೇಳಿದ್ದು, ʻʻಅನುತ್ತೀರ್ಣರಾದ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಎದೆಗುಂದಬೇಡಿ. ಸೋಲೇ ಗೆಲುವಿನ ಸೋಪಾನ ಎಂದು ಮತ್ತೊಂದು ಪ್ರಯತ್ನಕ್ಕೆ ಸಿದ್ಧರಾಗಿ. ಎಲ್ಲರಿಗೂ ಶುಭವಾಗಲಿʼʼ ಎಂದು ಹಾರೈಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಪಿಯು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ʻʻಪಿಯು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗೂ ಅಭಿನಂದನೆಗಳು. ನಿರೀಕ್ಷಿತ ಫಲಿತಾಂಶ ದೊರೆಯಲಿಲ್ಲ ಎಂದು ಪ್ರಯತ್ನಿಸುವುದು ಬಿಡಬೇಡಿ. ನಿಮ್ಮ ಕಠಿಣ ಶ್ರಮವೇ ಯಶಸ್ಸಿಗೆ ದಾರಿʼʼ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಬಿಜೆಪಿಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಕೂಡ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳು ದೃತಿಗೆಡದೆ ಮರಳಿ ಯತ್ನಿಸಿದಲ್ಲಿ ಅವಕಾಶಗಳ ಬಾಗಿಲು ತೆರೆದಿರುತ್ತದೆ. ನಿರಂತರ ಪ್ರಯತ್ನ ನಿರಂತರವಾಗಿರಲಿ. ನಿಮ್ಮೆಲ್ಲರ ಮುಂದಿನ ಭವಿಷ್ಯ ಉಜ್ವಲವಾಗಲೆಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ್, ನಮ್ಮ ವಿಜಯಪುರ ಜಿಲ್ಲೆ ರಾಜ್ಯಕ್ಕೆ 5ನೇ ಸ್ಥಾನ ಪಡೆದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ʻʻಉತ್ತೀರ್ಣಗೊಂಡ ಎಲ್ಲ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಅಭಿನಂದನೆಗಳು. ಅಪೇಕ್ಷಿತ ಫಲಿತಾಂಶ ಬಾರದ ವಿದ್ಯಾರ್ಥಿಗಳು ನಿರಾಶಗೊಳ್ಳುವ ಅಗತ್ಯವಿಲ್ಲ. ‘ಮರಳಿ ಯತ್ನವ ಮಾಡು…’ ಎಂಬಂತೆ ಪುನಃ ಪ್ರಯತ್ನ ಮಾಡಿ ಎಂದು ಟ್ವಿಟ್ಟರ್‌ನಲ್ಲಿ ಶುಭ ಹಾರೈಸಿದ್ದಾರೆ.
ಸಂಸದ ಬಿ.ವೈ ರಾಘವೇಂದ್ರ, ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾರ್ದಿಕ ಶುಭಾಶಯಗಳು. ಹಾಗೆಯೇ ಕಡಿಮೆ ಅಂಕಗಳಿಸಿದ ವಿದ್ಯಾರ್ಥಿಗಳು ಧೃತಿಗೆಡದೆ ಪೂರಕ ಪರೀಕ್ಷೆಯಲ್ಲಿ ಅಂಕಗಳನ್ನು ಉತ್ತಮಪಡಿಸಿಕೊಳ್ಳಿ. ಎಲ್ಲಾ ವಿದ್ಯಾರ್ಥಿಗಳ ಭವಿಷ್ಯವು ಉಜ್ವಲವಾಗಲಿ. ನಿಮ್ಮ ಕನಸುಗಳು ಸಾಕಾರಗೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.
ಸಂಸದ ಡಿ.ಕೆ. ಸುರೇಶ್, ವಿಧ್ಯಾರ್ಥಿ ಜೀವನದ ಪ್ರಮುಖ ಘಟ್ಟ ದ್ವಿತೀಯ ಪಿಯುಸಿಯಲ್ಲಿ ದಾಖಲೆ ಮಟ್ಟದ ಫಲಿತಾಂಶ ಬಂದದ್ದು ಸಂತಸದ ವಿಷಯ. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ನನ್ನ ಕಡೆಯಿಂದ ಹೃತ್ಪೂರ್ವಕ ಅಭಿನಂದನೆಗಳು. ತೇರ್ಗಡೆಯಾಗದ ವಿದ್ಯಾರ್ಥಿಗಳು ದೃತಿಗೆಡದೇ ಮುಂದಿನ ಒಳ್ಳೆಯ ಫಲಿತಾಂಶಕ್ಕೆ ಪ್ರಯತ್ನಿಸಿ. ಶುಭವಾಗಲಿ ಎಂದಿದ್ದಾರೆ.
ಇದನ್ನೂ ಓದಿ : 2nd PUC Result 2023: ಕೂಲಿ ಮಾಡುವವರ ಮಗ ರಾಹುಲ್ ಈಗ ಪಿಯುಸಿ ಟಾಪರ್! ಸಾಧನೆಗೆ ಅಡ್ಡಿಯಾಗದ ಬಡತನ