ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ (PSI Scam) ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ನಿವೃತ್ತ ನ್ಯಾ. ವೀರಪ್ಪ ನೇತೃತ್ವದಲ್ಲಿ ತನಿಖೆಗೆ ಸೂಚಿಸಲಾಗಿದ್ದು, ತನಿಖೆಗೆ ಪೊಲೀಸ್ ಇಲಾಖೆ ಹಾಗೂ ಸಿಐಡಿ ಸಹಕಾರ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ.
ರಾಜ್ಯ ಸರ್ಕಾರ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿತ 52 ಅಭ್ಯರ್ಥಿಗಳು ಕಾನೂನು ಬಾಹಿರವಾಗಿ ಪರೀಕ್ಷೆಯನ್ನು ಬರೆದಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆ ನಡೆಸುವ ಎಲ್ಲಾ ವೃಂದದ ಹುದ್ದೆಗಳ ನೇಮಕಾತಿಯಲ್ಲಿ ಭಾಗವಹಿಸಲು ಶಾಶ್ವತವಾಗಿ ನಿಷೇಧಿಸಿದೆ (Permanently Debarred).
ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) 545 ಖಾಲಿ ಹುದ್ದೆಗಳಿಗೆ ನೇರ ನೇಮಕಾತಿಗೆ 2021ರ ಜನವರಿ 21ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಬಳಿಕ ಅದೇ ವರ್ಷದ ಅಕ್ಟೋಬರ್ 3ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಪರೀಕ್ಷೆಯಲ್ಲಿ ಅಕ್ರಮಗಳು ಕಂಡು ಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸಲಾಗಿತ್ತು.
ಪ್ರಕರಣದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿನ 52 ಅಭ್ಯರ್ಥಿಗಳು ಒಳಗೊಂಡಂತೆ ಇತರೆ ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದು, ಸಂಬಂಧಪಟ್ಟ ನ್ಯಾಯಾಲಯಗಳಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ. ಜತೆಗೆ ಹೆಚ್ಚುವರಿ ತನಿಖೆಯನ್ನು ಮುಂದುವರಿಸಲಾಗಿದೆ.
ಇದನ್ನೂ ಓದಿ | Nandini Milk Price Hike: ನಂದಿನಿ ಹಾಲಿನ ದರ ಲೀಟರ್‌ಗೆ 3 ರೂ. ಏರಿಕೆ; ಆ.1ರಿಂದ ಜಾರಿ
ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಬಹು ಆಯಾಮದ ಆಕ್ರಮಗಳು ನಡೆದಿರುವುದು ಕಂಡುಬಂದಿರುವುದರಿಂದ ಹಾಗೂ ಇನ್ನು ಮುಂದೆ ನಡೆಯುವ ಪೊಲೀಸ್ ನೇಮಕಾತಿಗಳು ಅತ್ಯಂತ ಪಾರದರ್ಶಕವಾಗಿ ನಡೆಸುವ ಅಗತ್ಯವಿರುವುದರಿಂದ ಈ ಪ್ರಕರಣದಲ್ಲಿ ನ್ಯಾಯಾಂಗ ತನಿಖೆಯ ಅಗತ್ಯವಿರುವುದನ್ನು ಮನಗಂಡು, Commissions of Inquiry Act 1952ರ ನಿಯಮ 3ರ ಉಪ ನಿಯಮ 1 ರನ್ವಯ ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ನಿವೃತ್ತ ನ್ಯಾ. ವೀರಪ್ಪ ನೇತೃತ್ವದಲ್ಲಿ ಏಕಸದಸ್ಯ ನ್ಯಾಯಾಂಗ ತನಿಖಾ ಆಯೋಗವನ್ನು ರಾಜ್ಯ ಸರ್ಕಾರ ನೇಮಿಸಿದೆ.