Site icon Vistara News

75ನೇ ಸ್ವಾತಂತ್ರ್ಯೋತ್ಸವಕ್ಕೆ ಪಕ್ಷಾತೀತ ಸ್ವಾತಂತ್ರ್ಯ ನಡಿಗೆ: ಡಿ.ಕೆ. ಶಿವಕುಮಾರ್

shivakumar tweet

ಬೆಂಗಳೂರು: ದೇಶದ 75ನೇ ಸ್ವಾತಂತ್ರ್ಯ ದಿನಾಚಾರಣೆ ಅಂಗವಾಗಿ ಆಗಸ್ಟ್ 15ರಂದು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿವರೆಗೂ ರಾಷ್ಟ್ರಧ್ವಜ ಹಿಡಿದು ಫ್ರೀಡಂ ಮಾರ್ಚ್ (ಸ್ವಾತಂತ್ರ್ಯ ನಡಿಗೆ) ಎಂಬ ಪಕ್ಷಾತೀತ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಕಾರ್ಯಕ್ರಮದಲ್ಲಿ ಸುಮಾರು 75 ಸಾವಿರದಿಂದ 1 ಲಕ್ಷದವರೆಗೂ ಜನ ಸೇರಲಿದ್ದಾರೆ. ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಿಂದ ಜನರು ಬಂದು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಈ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಿದ್ದು, ಯಾರು ಭಾಗವಹಿಸಲಿದ್ದಾರೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ | ಅಮೃತ ಭಾರತಿಗೆ ಕನ್ನಡದಾರತಿ: ರಾಜ್ಯಾದ್ಯಂತ ಮೊಳಗಿದ ಸ್ವಾತಂತ್ರ್ಯ ಕಹಳೆ

ಇದೊಂದು ಪಕ್ಷಾತೀತ ಕಾರ್ಯಾಕ್ರಮವಾಗಿದ್ದು, ಇದರಲ್ಲಿ ಎಲ್ಲ ಸಂಘ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಕಾರ್ಮಿಕ ಸಂಘಟನೆಗಳು, ಸಾಂಸ್ಕೃತಿಕ ಸಂಘಟನೆಗಳು, ಕ್ರೀಡಾಪಟುಗಳು, ಕಲಾವಿದರು ಸೇರಿದಂತೆ ಎಲ್ಲರೂ ಭಾಗವಹಿಸಬಹುದು. ಈಗಾಗಲೇ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಸ್ವಾತಂತ್ರ್ಯ ನಡಿಗೆ ಕುರಿತು ಟೀಟ್ವ್‌

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವವನ್ನು ರಾಜ್ಯದಲ್ಲಿ ಪಾದಯಾತ್ರೆ ಮೂಲಕ ಆಚರಿಸಲು ಸೂಚಿಸಿದ್ದಾರೆ. ಪ್ರತಿ ಜಿಲ್ಲೆಯಲ್ಲಿ 75 ಕಿ.ಮೀ ಪಾದಯಾತ್ರೆ ಮಾಡಲಾಗುವುದು. ಈ ನಡಿಗೆಯನ್ನು ಒಂದು ಜಿಲ್ಲೆಯ ಎಷ್ಟು ತಾಲೂಕುಗಳಲ್ಲಿ ಮಾಡಬೇಕು ಎಂಬುದನ್ನು ಆಯಾ ಜಿಲ್ಲಾ ಕಾಂಗ್ರೆಸ್ ನಾಯಕರ ಇಚ್ಛೆಗೆ ಬಿಟ್ಟಿದ್ದೇವೆ ಎಂದರು.  

ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್‌

ಆ.1 ರಿಂದ ಆ.10 ರವರೆಗೆ ಅಥವಾ ಅದಕ್ಕಿಂತ ಮುಂಚಿತವಾಗಿ ಬೇಕಾದರೂ ಈ ಪಾದಯಾತ್ರೆ ಮಾಡಬಹುದು. ಕೆಲವು ನಾಯಕರು ತಮ್ಮ ಕ್ಷೇತ್ರಗಳಲ್ಲೇ 75 ಕಿ.ಮೀ ಪಾದಯಾತ್ರೆ ಮಾಡುವುದಾಗಿ ತಿಳಿಸಿದ್ದು, ಅದಕ್ಕೂ ಅನುಮತಿ ನೀಡಿದ್ದೇವೆ. ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಈ ದೇಶಕ್ಕೆ ರಾಷ್ಟ್ರಧ್ವಜ, ಸಂವಿಧಾನ, ರಾಷ್ಟ್ರಗೀತೆಯನ್ನು ಕೊಡುಗೆಯಾಗಿ ನೀಡಿದ್ದು, ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕೆಂದರು.

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದವರು ಇದ್ದರೆ ಅವರನ್ನು ಅಥವಾ ಅವರ ಕುಟುಂಬದವರನ್ನು ಭೇಟಿಯಾಗಿ ಅವರಿಗೆ ಗೌರವ ಸಲ್ಲಿಸಬೇಕು ಎಂದು ಆಯಾ ತಾಲೂಕಿನ ಶಾಸಕರು, ಪರಾಜಿತ ಅಭ್ಯರ್ಥಿಗಳು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಸೂಚಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್‌ ಮಾಹಿತಿ ನೀಡಿದರು.

ಇದನ್ನೂ ಓದಿ | ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ನಿವಾಸಕ್ಕೆ ಭೇಟಿ ನೀಡಿದ ಶೃಂಗೇರಿ ಶ್ರೀಗಳು

Exit mobile version