ಬೆಂಗಳೂರು: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಬಂಧಿತರಾಗಿ ಅಮಾನತುಗೊಂಡಿರುವ ಎಡಿಜಿಪಿ ಅಮೃತ್ ಪಾಲ್ ಜಾಮೀನು ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಜಾಮೀನಿಗಾಗಿ ಈಗ ಸೆಷನ್ಸ್ ನ್ಯಾಯಾಲಯದ ಮೇಟ್ಟಿಲೇರಿದ್ದಾರೆ.
ಪಿಎಸ್ಐ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಅಮೃತ್ ಪಾಲ್ ಸದ್ಯ ಅಮಾನತುಗೊಂಡು ಜೈಲಿನಲ್ಲಿದ್ದಾರೆ. ಜಾಮೀನು ಅರ್ಜಿ ವಿಚಾರಣೆ ನಡೆಸಿದ 51ನೇ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ (ಸಿಸಿಎಚ್) ನ್ಯಾ.ಯಶವಂತ ಕುಮಾರ್, ಆಕ್ಷೇಪಣೆ ಸಲ್ಲಿಸಲು ಸಿಐಡಿಗೆ ನೋಟಿಸ್ ನೀಡಿದ್ದಾರೆ.
ನ್ಯಾಯಾಲಯದಲ್ಲಿ ವಾದ ಮಂಡಿಸಿರುವ ಪಾಲ್ ಪರ ವಕೀಲರು, ಅಮೃತ್ ಪಾಲ್ ಮೊಬೈಲ್‌ನ ಎಫ್ಎಸ್ಎಲ್ ವರದಿ ಬಂದಿಲ್ಲ. ಕಚೇರಿಯ ಸಿಸಿಟಿವಿ ದೃಶ್ಯಗಳ ಸಂಗ್ರಹ ಮಾಡಿಲ್ಲ ಎಂದು ಸಿಐಡಿ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದು, ಇದೇ ಕಾರಣಕ್ಕೆ ಅವರನ್ನು ಜೈಲಿನಲ್ಲಿ ಇಡುವುದು ಸೂಕ್ತವಲ್ಲ. ಸುಮೋಟೋ ಕೇಸ್ ದಾಖಲಿಸಿಕೊಂಡು ಪ್ರಕರಣದಲ್ಲಿ 35ನೇ ಆರೋಪಿಯಾಗಿ ಅಮೃತ್ ಪಾಲ್ ಅವರನ್ನು ಬಂಧನ ಮಾಡಲಾಗಿದೆ ಎಂದು ವಾದಿಸಿದ್ದಾರೆ.
ಆರೋಪಿಯಾಗಿರುವ ಅಮೃತ್ ಪಾಲ್ ಅವರಿಂದ ಯಾವುದೇ ದಾಖಲೆಗಳನ್ನು ಸೀಜ್ ಮಾಡಿಲ್ಲ. ಕೇವಲ ಅವರ ಮೊಬೈಲ್ ಫೋನ್ ಅನ್ನು ಮಾತ್ರ ಸೀಜ್ ಮಾಡಲಾಗಿದೆ. ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. 1 ರಿಂದ 22ನೇ ಆರೋಪಿಗಳ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಬಹುತೇಕ ಪ್ರಕರಣದ ತನಿಖೆಯನ್ನು ಸಿಐಡಿ ಮುಕ್ತಾಯ ಮಾಡಿದ್ದು, ಕೋರ್ಟ್ ಹಾಕುವ ಎಲ್ಲ ಷರತ್ತುಗಳಿಗೆ ಪಾಲ್ ಬದ್ಧರಾಗಿರುತ್ತಾರೆ. ಹೀಗಾಗಿ ಅವರಿಗೆ ಜಾಮೀನು ನೀಡುವಂತೆ ಪಾಲ್ ಪರ ವಕೀಲರು ಸೆಷನ್ಸ್ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಪಾಲ್ ಪರ ವಕೀಲರ ವಾದ ಆಲಿಸಿದ ನ್ಯಾಯಾಧೀಶರು, ಆಕ್ಷೇಪಣೆ ಸಲ್ಲಿಸಲು ಸಿಐಡಿಗೆ ನೋಟಿಸ್ ನೀಡಿದ್ದಾರೆ.
ಇದನ್ನೂ ಓದಿ | BBMP Election | ಆ.16ರವರೆಗೆ ಮೀಸಲಾತಿ ಪಟ್ಟಿ ಅಂತಿಮಗೊಳಿಸದಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ