ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಆಗಾಗ್ಗೆ ಅಸಮಾಧಾನ ಹೊರಹಾಕುತ್ತಿರುವ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ (BK Hariprasad) ಅವರಿಗೆ ಎಐಸಿಸಿ ಶಿಸ್ತು ಸಮಿತಿ ನೋಟಿಸ್ ನೀಡಿದೆ. ಯಾವ ಕಾರಣಕ್ಕೆ ಸಿಎಂ ವಿರುದ್ಧ ಬಹಿರಂಗ ಹೇಳಿಕೆ ನೀಡಿದ್ದೀರಿ ಎಂಬುವ ಕುರಿತು 10 ದಿನಗಳೊಳಗೆ ಉತ್ತರಿಸುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೆ.9ರಂದು ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತೀ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಪೂರ್ವಭಾವಿ ಸಭೆ ನಡೆದಿತ್ತು. ಈ ವೇಳೆ ಬಿಜೆಪಿ ಹಾಗೂ ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಸೇರಿ ವಿವಿಧ ಪಕ್ಷಗಳ ನಾಯಕರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಬಿ.ಕೆ.ಹರಿಪ್ರಸಾದ್ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದರು.
ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹಲವು ಬಾರಿ ಅಸಮಾಧಾನ ಹೊರಹಾಕಿದ್ದ ಬಿ.ಕೆ.ಹರಿಪ್ರಸಾದ್ ಅವರು ಕಾರ್ಯಕ್ರಮದಲ್ಲಿ ಮತ್ತೊಮ್ಮೆ ಸಿಎಂ ವಿರುದ್ಧ ಬಹಿರಂಗ ಹೇಳಿಕೆ ನೀಡಿದ್ದರು. ಪಂಚೆ ಹಾಕಿಕೊಂಡು ಹ್ಯುಬ್ಲೋಟ್ ವಾಚ್ ಕಟ್ಟಿಕೊಂಡು, ಒಳಗೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜವಾದಿ ಎಂದು ಹೇಳಿದರೆ ಆಗೋದಿಲ್ಲ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದರು. ಹೀಗಾಗಿ ಅವರಿಗೆ ನೋಟಿಸ್ ನೀಡಲಾಗಿದೆ.
ಇದನ್ನೂ ಓದಿ | Minister D Sudhakar : ಸಚಿವ ಡಿ. ಸುಧಾಕರ್ ವಿರುದ್ಧ ದಾಖಲಾದ ಕೇಸ್‌ಗಳು ಯಾವುವು? ಅದಕ್ಕೇನು ಶಿಕ್ಷೆ?
ಬಿ.ಕೆ.ಹರಿಪ್ರಸಾದ್ ಟೀಕೆಗಳಿಗೆ ಉತ್ತರಿಸದೆ ಮೌನ ವಹಿಸುವಂತೆ ಸಿದ್ದರಾಮಯ್ಯ ಆ್ಯಂಡ್ ಟೀಮ್‌ಗೆ ಹೈಕಮಾಂಡ್ ಸೂಚನೆ ನೀಡಿತ್ತು. ಹರಿಪ್ರಸಾದ್ ಮಾತನಾಡಲಿ, ನೀವು ಅದಕ್ಕೆ ರಿಯಾಕ್ಟ್ ಮಾಡಬೇಡಿ. ಶಿಸ್ತು ಮೀರಿದರೆ ಸಹಿಸಲ್ಲ ಎಂದು ಹೈಕಮಾಂಡ್ ಸಂದೇಶ ರವಾನೆ ಮಾಡಿತ್ತು. ಇದರ ಬೆನ್ನಲ್ಲೇ ಬಿ.ಕೆ. ಹರಿಪ್ರಸಾದ್‌ಗೆ ನೋಟಿಸ್ ಕೊಡಲಾಗಿದೆ.