Site icon Vistara News

Kharge Congress President | ಪಕ್ಷ ಭೇದ ಮರೆತು ಶುಭಾಶಯ ಕೋರಿದ ನಾಯಕರು

Mallikarjun Kharge

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವುದಕ್ಕೆ ಕಾಂಗ್ರೆಸ್‌ ನಾಯಕರಲ್ಲಿ ಸಹಜವಾಗಿಯೇ ಸಂತಸ ಮನೆಮಾಡಿದೆ. ಅದರಲ್ಲೂ ಕರ್ನಾಟಕ ಕಾಂಗ್ರೆಸ್‌ ನಾಯಕರು ಹೆಚ್ಚೇ ಸಂತಸಗೊಂಡಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಕಳೆದ ಐದು ದಶಕಗಳಿಂದಲೂ ಕಾರ್ಯನಿರ್ವಹಿಸುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್‌ ಪಕ್ಷದ ನಾಯಕರಷ್ಟೆ ಅಲ್ಲದೆ ಬಿಜೆಪಿ, ಜೆಡಿಎಸ್‌ನಿಂದಲೂ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ. ಮುಂದಿನ ದಿನಗಳಲ್ಲಿ, ಚುನಾವಣೆ ವೇಳೆಯಲ್ಲಿ ಪರಸ್ಪರರ ವಿರುದ್ಧ ಆರೋಪ ಪ್ರತ್ಯಾರೋಪ ಇರುತ್ತದಾದರೂ ಹಿರಿಯ ನಾಯಕನಿಗೆ ಗೌರವ ಸಲ್ಲಿಸುತ್ತಿದ್ದಾರೆ.

ಸಲೀಂ ಅಹ್ಮದ್‌, ಕೆಪಿಸಿಸಿ ಕಾರ್ಯಾಧ್ಯಕ್ಷ
ಎಐಸಿಸಿ ಅಧ್ಯಕ್ಷರಾಗಿ ಚುನಾಯಿತರಾದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾರ್ದಿಕ ಅಭಿನಂದನೆಗಳು. ರಾಜಕೀಯದಲ್ಲಿ ಸುದೀರ್ಘ ಅನುಭವ ಹೊಂದಿರುವ ಶ್ರೀ ಮಲ್ಲಿಕಾರ್ಜುನ ಖರ್ಗೆಯವರು ಪಕ್ಷದ ಅಧ್ಯಕ್ಷರಾಗಿ ಚುನಾಯಿತರಾಗಿರುವುದು ಸಂತಸ ತಂದಿದೆ. ಇದು 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ. ರಾಜ್ಯದಲ್ಲಿ ಕೂಡ ಪಕ್ಷದ ಮುಖಂಡರುಗಳು ಹಾಗೂ ಕಾರ್ಯಕರ್ತರಿಗೆ ಹೊಸ ಹುಮ್ಮಸ್ಸು ಉತ್ಸಾಹ ತಂದಿದೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ಮತ್ತಷ್ಟು ಬಲಿಷ್ಠಗೊಳ್ಳಲಿದೆ.

ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಸಿಎಂ
ಎಐಸಿಸಿ ಅಧ್ಯಕ್ಷರಾಗಿ ಚುನಾಯಿತರಾದ ರಾಜ್ಯದ ಹಿರಿಯ ರಾಜಕಾರಣಿ, ಕಾಂಗ್ರೆಸ್ ಪಕ್ಷದ ಹಿರಿಯರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆಗಳು. ಶ್ರೀ ಖರ್ಗೆ ಅವರದ್ದು ಸುದೀರ್ಘ ರಾಜಕೀಯ ಅನುಭವ. ಅಚಲವಾದ ಪಕ್ಷನಿಷ್ಠೆ ಅವರನ್ನು ಈ ಉನ್ನತ ಹುದ್ದೆವರೆಗೂ ತಂದಿದೆ. ಶ್ರೀ ಖರ್ಗೆ ಅವರಿಂದ ಆ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ.

ಬಸವರಾಜ ಬೊಮ್ಮಾಯಿ, ಸಿಎಂ
ರಾಷ್ಟ್ರೀಯ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾರ್ದಿಕ ಅಭಿನಂದನೆಗಳು. ರಾಷ್ಟ್ರೀಯ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ.

ಬಿ.ಎಸ್‌. ಯಡಿಯೂರಪ್ಪ, ರಾಷ್ಟ್ರೀಯ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ಈ ನೂತನ ಜವಾಬ್ದಾರಿಗೆ ನನ್ನ ಶುಭ ಹಾರೈಕೆಗಳು.

ಡಾ. ಶಂಕರ ಗುಹಾ ದ್ವಾರಕಾನಾಥ್‌ ಬೆಳ್ಳೂರು, ಕೆಪಿಸಿಸಿ ವಕ್ತಾರ
ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕರ್ನಾಟಕದ ಹಿರಿಯ ರಾಜಕಾರಣಿ, ಕಾಂಗ್ರೆಸ್ ಪಕ್ಷದ ಹಿರಿಯ ಮುತ್ಸದಿ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾರ್ದಿಕ ಅಭಿನಂದನೆಗಳು.

ಅಬ್ದುಲ್‌ ಮಜೀದ್‌, ಎಸ್‌ಡಿಪಿಐ ರಾಜ್ಯಾಧ್ಯಕ್ಷ
ಭಾರತೀಯ ರಾಷ್ಟೀಯ ಕಾಂಗ್ರೆಸ್ ರಾಷ್ಟೀಯ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ರವರಿಗೆ ಅಭಿನಂದನೆಗಳು.

ಡಾ. ಸಿ.ಎನ್‌. ಅಶ್ವತ್ಥನಾರಾಯಣ, ಐಟಿಬಿಟಿ, ಉನ್ನತ ಶಿಕ್ಷಣ ಸಚಿವ
ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ರಾಜಕೀಯ ಮುತ್ಸದ್ದಿ, ಕನ್ನಡಿಗರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ರಾಷ್ಟ್ರೀಯ ಪಕ್ಷವನ್ನು ಮುನ್ನಡೆಸುವ ದೊಡ್ಡ ಜವಾಬ್ದಾರಿ ಹೊತ್ತಿರುವ ತಮಗೆ ರಾಷ್ಟ್ರ ರಾಜಕಾರಣದ ಅಪಾರ ಅನುಭವ ಬಲ ನೀಡಲೆಂದು ಶುಭ ಹಾರೈಕೆಗಳು.

ಬಿ.ವೈ. ವಿಜಯೇಂದ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ
ಎಐಸಿಸಿ ಅಧ್ಯಕ್ಷರಾಗಿ ಚುನಾಯಿತರಾಗಿರುವ ಹಿರಿಯ ರಾಜಕೀಯ ಮುತ್ಸದ್ದಿ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗೌರವ ಪೂರ್ವಕ ಅಭಿನಂದನೆಗಳು. ಮಾನ್ಯ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಸುದೀರ್ಘ ರಾಜಕೀಯ ಪಯಣದಲ್ಲಿ ಮಹತ್ವದ ಘಟ್ಟ ತಲುಪಿದ್ದು,ಅವರ ಅಪಾರ ಅನುಭವ ಭಾರತದ ರಾಜಕಾರಣದಲ್ಲಿ ಪರಿಪೂರ್ಣತೆ ಹಾಗೂ ಆರೋಗ್ಯಕರ ಪೈಪೋಟಿಗೆ ಕೊಡುಗೆ ನೀಡಲಿ ಎಂದು ಆಶಿಸುವೆ.

ವಿ. ಸೋಮಣ್ಣ, ವಸತಿ ಸಚಿವ
ಕಾಂಗ್ರೆಸ್ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ, ಹಿರಿಯ ರಾಜಕೀಯ ಧುರೀಣರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾರ್ದಿಕ ಅಭಿನಂದನೆಗಳು. ಈ ಉನ್ನತ ಜವಾಬ್ದಾರಿಯನ್ನು ತಾವು ಉತ್ತಮವಾಗಿ ನಿರ್ವಹಿಸುವಂತಾಗಲಿ.

ಶರತ್‌ ಬಚ್ಚೇಗೌಡ, ಹೊಸಕೋಟೆ ಶಾಸಕ
ಅಖಿಲ ಭಾರತ ಕಾಂಗ್ರೆಸ್‌ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕನ್ನಡಿಗರೂ, ಹಿರಿಯ ನಾಯಕರೂ, ಮಾರ್ಗದರ್ಶಕರಾಗಿರುವ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾರ್ದಿಕ ಅಭಿನಂದನೆಗಳು.

ಜಿ.ಸಿ. ಚಂದ್ರಶೇಖರ್‌, ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ
ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆಗಳು. ಮಲ್ಲಿಕಾರ್ಜುನ ಖರ್ಗೆ ಅವರ ಸುದೀರ್ಘ ರಾಜಕೀಯ ಅನುಭವ, ಅಧ್ಯಯನ, ಜ್ಞಾನ, ಬದ್ಧತೆಗಳು ಕಾಂಗ್ರೆಸ್ ಪಕ್ಷವನ್ನು ಸೈದ್ದಂತಿಕವಾಗಿ ಹಾಗೂ ರಾಜಕೀಯವಾಗಿ ಇನ್ನಷ್ಟು ಗಟ್ಟಿಯಾಗಿ ಕಟ್ಟುವಲ್ಲಿ ಸಹಕಾರಿಯಾಗಲಿದೆ.

ಇದನ್ನೂ ಓದಿ | ಬಿಜೆಪಿಯ SCST ಮೀಸಲಾತಿ ಮಾಸ್ಟರ್‌ ಸ್ಟ್ರೋಕ್‌ಗೆ ಕಾಂಗ್ರೆಸ್‌ ಉತ್ತರ ಮಲ್ಲಿಕಾರ್ಜುನ ಖರ್ಗೆ?

Exit mobile version